ನಾನು ಕಾಂಗ್ರೆಸ್ ಪಕ್ಷ ಸೇರಿದ ನಂತರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಅವರು ಮತ್ತೆ ಬಿಜೆಪಿ ಸೇರಿದ್ದಾರೆ. ಅದು ಅವರ ವೈಯಕ್ತಿಕ ವಿಚಾರ. ಅವರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಶಾಸಕ ಲಕ್ಷ್ಮಣ ಸವದಿ
ಅಥಣಿ(ಜ.27): ನನ್ನ ರಾಜಕೀಯ ಜೀವನದಲ್ಲಿ ಕಳೆದ 25 ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿದ್ದೇನೆ. ಹೀಗಾಗಿ ಅನೇಕ ಜನ ನನಗೆ ಆತ್ಮೀಯ ಸ್ನೇಹಿತರು ಮತ್ತು ಒಳ್ಳೆಯ ಅಭಿಮಾನಿ ಜನಪ್ರತಿನಿಧಿಗಳು ಇದ್ದಾರೆ. ಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರಿಗೆ ನಮ್ಮ ಅವಶ್ಯಕತೆ ಮತ್ತು ಅನಿವಾರ್ಯತೆ ಇರುವುದರಿಂದ ಅವರು ನಮ್ಮನ್ನು ಪಕ್ಷಕ್ಕೆ ಕರೆಯುತ್ತಿದ್ದಾರೆ. ಆದರೆ ನಾನು ಕಾಂಗ್ರೆಸ್ ಪಕ್ಷವನ್ನು ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.
ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷ ಸೇರಿದ ನಂತರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಅವರು ಮತ್ತೆ ಬಿಜೆಪಿ ಸೇರಿದ್ದಾರೆ. ಅದು ಅವರ ವೈಯಕ್ತಿಕ ವಿಚಾರ. ಅವರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
News Hour: ಜಗದೀಶ್ ಶೆಟ್ಟರ್ ಆಯ್ತು.. ಬಿಜೆಪಿ ಲಿಸ್ಟ್‌ನಲ್ಲಿ ಇನ್ನೂ ಇರೋರು ಯಾರು?
ನಾನು ಮತ್ತು ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬಂದ ನಂತರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹಳಷ್ಟು ನಷ್ಟವಾಗಿದೆ. ಹೀಗಾಗಿ ಬಿಜೆಪಿ ವರಿಷ್ಠರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಮತ್ತು ತಮ್ಮ ಪಕ್ಷದ ಏಳಿಗೆಗಾಗಿ ಆಪರೇಷನ್ ಮತ್ತೆ ಶುರು ಮಾಡಿದ್ದಾರೆ. ನನಗೂ ಕೆಲವರು ಸಂಪರ್ಕಿಸಿದ್ದಾರೆ. ಅವರ ಹೆಸರುಗಳನ್ನು ನಾನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ. ಅವರಿಗೆ ವಿಶ್ವಾಸ ದ್ರೋಹ ಬಗೆಯಲು ನಾನು ಬಯಸುವುದಿಲ್ಲ. ಬಿಜೆಪಿಯ ಯಾವುದೇ ಒತ್ತಡಕ್ಕೆ ಒಳಗಾಗಿ ನಾನು ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.