
ಬೆಂಗಳೂರು (ಆ.21): ರಾಜ್ಯ ಸರ್ಕಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇ ನಿರ್ಮಿಸಿರುವುದರಿಂದ ನೈಸ್ ರಸ್ತೆಯ ಅವಶ್ಯಕತೆಯಿಲ್ಲ. ಹೀಗಾಗಿ ನೈಸ್ ಯೋಜನೆಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2016ರಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರವಿದ್ದಾಗ ನೈಸ್ ಯೋಜನೆಗೆ ಸಂಬಂಧಿಸಿದಂತೆ ನಾನೇ ಸದನ ಸಮಿತಿ ವರದಿ ಕೊಟ್ಟಿದ್ದೇನೆ.
ಇದರ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಹೆಚ್ಚುವರಿ ಭೂಮಿಯನ್ನು ಹಿಂಪಡೆಯಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಮುಖ್ಯಮಂತ್ರಿ ಅವರು ಶಿಫಾರಸುಗಳ ಅನುಸಾರ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ನೈಸ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಆರೋಪ-ಪ್ರತ್ಯಾರೋಪಗಳ ಕುರಿತು ಕೇಳಿದ ಪ್ರಶ್ನೆಗೆ, ಆ ಬಗ್ಗೆ ನೀವು ಅವರಿಬ್ಬರನ್ನೇ ಕೇಳಿ ಎಂದರು.
2 ದಿನದಲ್ಲಿ ನೈಸ್ ಅಕ್ರಮಗಳ ದಾಖಲೆ ಬಹಿರಂಗ: ಡಿಕೆ ಬ್ರದರ್ಸ್ ವಿರುದ್ಧ ಎಚ್ಡಿಕೆ ವಾಗ್ದಾಳಿ
ನಾಳೆ ಸರ್ವಪಕ್ಷ ಸಭೆ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಬುಧವಾರ ರಾಜ್ಯ ಸರ್ಕಾರ ಸರ್ವಪಕ್ಷ ಸಭೆ ಕರೆದಿದ್ದು, ಅಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಇದೇ ವೇಳೆ ಟಿ.ಬಿ.ಜಯಚಂದ್ರ ತಿಳಿಸಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದರೂ ಏಳು ವರ್ಷಗಳಿಂದ ಹಣವನ್ನೇ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ 5 ಸಾವಿರ ಕೋಟಿ ರು. ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಶೀಘ್ರ ಹಣ ಬಿಡುಗಡೆ ಮಾಡಲಿ. ಈ ಯೋಜನೆಗೆ ರಾಜ್ಯ ಸರ್ಕಾರ 20 ಸಾವಿರ ಕೋಟಿ ರು. ವೆಚ್ಚ ಮಾಡುತ್ತಿದೆ ಎಂದರು.
‘ನಮ್ನೀರು, ನಮ್ಹಕ್ಕು’ ಎಂದವರು ತ.ನಾಡಿಗೆ ಬಿಟ್ಟಿದ್ದೇಕೆ?: ಎಚ್.ಡಿ.ಕುಮಾರಸ್ವಾಮಿ
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಕೇಂದ್ರ ಸರ್ಕಾರ ಬಜೆಟ್ ಮಂಡಿಸಿದ ಬಳಿಕ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಬಜೆಟ್‌ನಲ್ಲಿ ಅಳವಡಿಸಿಕೊಳ್ಳುವುದು ಸಂಪ್ರದಾಯವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಷ್ಟು ಹಣ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಎಷ್ಟುವೆಚ್ಚ ಮಾಡಿದೆ? ಬಾಕಿ ಎಷ್ಟು ಬಿಡುಗಡೆ ಮಾಡಲಿದೆ ಎಂಬ ವಿವರಗಳನ್ನು ಮುಂದಿನ ದಿನಗಳಲ್ಲಿ ಮಾಹಿತಿ ಪಡೆದು ನೀಡುವುದಾಗಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.