ಭ್ರಷ್ಟಾಚಾರ ಕುರಿತು ದಿನಪತ್ರಿಕೆಗಳಿಗೆ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಎದುರು ಖುದ್ದು ಹಾಜರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಬೆಂಗಳೂರು (ಜೂ.07): ಭ್ರಷ್ಟಾಚಾರ ಕುರಿತು ದಿನಪತ್ರಿಕೆಗಳಿಗೆ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಎದುರು ಖುದ್ದು ಹಾಜರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಖುದ್ದು ಹಾಜರಾಗುವಂತೆ ರಾಹುಲ್‌ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ ಜೂ.1ರಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾರೆ. ಆದರೆ ಪ್ರಕರಣದಲ್ಲಿ ಸಮನ್ಸ್ ಪಡೆದಿದ್ದ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿರಲಿಲ್ಲ. ರಾಹುಲ್‌ಗಾಂಧಿ 3ನೇ ಸಮನ್ಸ್‌ಗೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಧೀಶರು ವಿಚಾರಣೆಯನ್ನು ಜೂ.7ಕ್ಕೆ ಮುಂದೂಡಿದ್ದರು.
ನಾಲ್ಕನೇ ಬಾರಿಯೂ ಸಮನ್ಸ್‌ಗೆ ಬೆಲೆ ನೀಡದಿದ್ದರೆ ಕಠಿಣ ಕ್ರಮ ಎದುರಿಸಬೇಕಾಗಬಹುದು ಎಂಬ ಕಾರಣಕ್ಕೆ ರಾಹುಲ್‌ಗಾಂಧಿ ಅವರು ಶುಕ್ರವಾರ ಬೆಳಗ್ಗೆ 10.30 ಗಂಟೆಗೆ ಕಾವೇರಿ ಭವನ ಹಿಂಭಾಗದ ನಗರ ಸಿವಿಲ್ ನ್ಯಾಯಾಲಯದಲ್ಲಿ ಖುದ್ದು ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹುದ್ದೆಗೆ ಎಷ್ಟು ನೀಡಬೇಕು ಎಂದು ಮಾತನಾಡಿದ್ದರು.
ಚನ್ನಪಟ್ಟಣಕ್ಕೆ ಡಿಕೆಸು ನಿಲ್ಲಿಸುವ ಚಿಂತನೆಯಿಲ್ಲ: ಡಿ.ಕೆ.ಶಿವಕುಮಾರ್
ಪತ್ರಿಕೆಗಳಲ್ಲಿ ಭ್ರಷ್ಟಾಚಾರದ ಬಗ್ಗೆ ರೇಟ್ ಕಾರ್ಡ್ ಹಾಕಿದ್ದರು. ಈ ಸಂಬಂಧದ ಜಾಹೀರಾತು ಹಿನ್ನೆಲೆಯಲ್ಲಿ ನನ್ನ, ಮುಖ್ಯಮಂತ್ರಿಗಳ ಮೇಲೆ ಕೇಸು ಹಾಕಲಿ. ಇದಕ್ಕೂ ರಾಹುಲ್‌ಗಾಂಧಿ ಅವರಿಗೂ ಸಂಬಂಧವೇ ಇಲ್ಲ. ಅವರು ಎಐಸಿಸಿ ಅಧ್ಯಕ್ಷರೂ ಅಲ್ಲ, ಅವರ ಫೋಟೋ ಕೂಡ ಹಾಕಿರಲಿಲ್ಲ. ಆದರೂ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್‌ಗಾಂಧಿ ಅವರು ನ್ಯಾಯಾಲಯಕ್ಕೆ ಹಾಜರಾಗಲು ಬರುತ್ತಿದ್ದಾರೆ ಎಂದು ಮಾಹಿತಿ ನೀಡಿದರು.