
ಪ್ರಭುಸ್ವಾಮಿ ನಟೇಕರ್
ಬೆಂಗಳೂರು(ಮಾ.09): ಲೋಕಸಭಾ ಚುನಾವಣೆ ಸಮರದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮಂಡ್ಯ ಕ್ಷೇತ್ರವು ಅಂತಿಮವಾಗಿ ದಳಪತಿಗಳ ಪಾಲಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಕಳೆದುಕೊಂಡಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ತನ್ನ ಪಾರುಪತ್ಯ ಸಾಧಿಸಲು ಜೆಡಿಎಸ್ ಹವಣಿಸುತ್ತಿದೆ. ಬಿಜೆಪಿ ಹೈಕಮಾಂಡ್ ಮನವೊಲಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಕ್ಷೇತ್ರವನ್ನು ತಮ್ಮ ಪಕ್ಷಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.
ಚುನಾವಣೆ ಬಳಿಕ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ಬಗ್ಗೆ ಬಿಜೆಪಿ ವರಿಷ್ಠರು ಆಶ್ವಾಸನೆ ನೀಡಿದರೆ ಕುಮಾರಸ್ವಾಮಿ ಅವರೇ ಮಂಡ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಇಲ್ಲದಿದ್ದರೆ ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು ಅಥವಾ ಡಿ.ಸಿ. ತಮ್ಮಣ್ಣರನ್ನು ಅಭ್ಯರ್ಥಿಯನ್ನಾಗಿಸಬಹುದು ಎನ್ನಲಾಗಿದೆ.
ದೇವರ ಆಶೀರ್ವಾದವಿದ್ದರೆ ಮಂಡ್ಯದಲ್ಲಿ ಮನೆ ಕಟ್ಟುವೆ: ಸುಮಲತಾ ಅಂಬರೀಶ್
ಹಾಲಿ ಸಂಸದೆ ಸುಮಲತಾ ಅವರು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯದಿಂದಲೇ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರೂ ಅವರಿಗೆಟಿಕೆಟ್ ಲಭಿಸುವುದು ಅನುಮಾನ. ಮಂಡ್ಯ ಬಗ್ಗೆ ಬಿಜೆಪಿ ವರಿಷ್ಠರ ಜತೆ ಕುಮಾರ ಸ್ವಾಮಿ ಗಂಭೀರವಾಗಿ ಸಮಾಲೋಚನೆ ನಡೆಸಿ ಬಹುತೇಕ ಅಂತಿಮಗೊಳಿಸಿದ್ದಾರೆ. ಮುಂದಿನ ವಾರ ದೆಹಲಿಗೆ ತೆರಳುವ ಅವರು ಅಲ್ಲಿಯೇ ಅಂತಿಮ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದರೂ ರಾಜ್ಯದ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ. ಮುಂದಿನ ಪಟ್ಟಿಯಲ್ಲಿ ಪ್ರಕಟಿಸುವ ನಿರೀಕ್ಷೆ ಇದೆ. ಅಷ್ಟರ ವೇಳೆಗೆ ಮೈತ್ರಿ ಸ್ಥಾನಗಳನ್ನು ಅಂತಿಮಗೊಳಿಸಬೇಕಾಗಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನೂರಕ್ಕೆ ನೂರರಷ್ಟು ನನಗೇ ಸಿಗೋದು ಖಚಿತ: ಸಂಸದೆ ಸುಮಲತಾ
ಅಭ್ಯರ್ಥಿ ಬಗ್ಗೆ ಶೀಘ್ರದಲ್ಲಿಯೇ ಅಂತಿಮ?:
ಮಂಡ್ಯ ಜೆಡಿಎಸ್‌ಗೆ ಸಿಗಲಿದೆ ಎಂಬುದು ಬಹುತೇಕ ಖಚಿತವಾಗಿರುವ ಕಾರಣ ಪಕ್ಷದಲ್ಲಿ ಪೈಪೋಟಿಯೂ ಆರಂಭವಾ ಗಿದೆ. ಮಾಜಿ ಶಾಸಕರಾದ ಪುಟ್ಟರಾಜು ಮತ್ತು ತಮ್ಮಣ್ಣ ನಡುವೆ ಟಿಕೆಟ್ ಗಾಗಿ ಪೈಪೋಟಿ ನಡೆಯುತ್ತಿದೆ. ಇವರಿಬ್ಬರಲ್ಲಿ ಒಬ್ಬರನ್ನು ಕುಮಾರಸ್ವಾಮಿ ಅವರು ಅಂತಿಮಗೊಳಿಸಲಿದ್ದಾರೆ. ಮಂಡ್ಯ ಜಿಲ್ಲೆಯ ಮುಖಂಡರ ಸಭೆಯಲ್ಲಿಯೂ ಈ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಈ ನಡುವೆ, ಇತ್ತೀಚೆಗೆ ನಡೆದ ಸಭೆಯಲ್ಲಿ ಕುಮಾರ ಸ್ವಾಮಿ ಚುನಾವಣೆಗೆ ಸ್ಪರ್ಧಿಸುವ ಒತ್ತಾಯವೂ ಕೇಳಿ ಬಂದಿವೆ. ಆದರೆ, ಚುನಾವಣೆ ಬಳಿಕ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ಲಭಿಸುವ ಬಗ್ಗೆ ಬಿಜೆಪಿ ವರಿಷ್ಠರು ಆಶ್ವಾಸನೆ ನೀಡಿದರೆ ಮಾತ್ರ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.