
ಬೆಂಗಳೂರು(ಆ.22): ನನ್ನ ವಿರುದ್ಧ ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯಿಂದ ನನಗೆ ಯಾವುದೇ ಭಯ ಇಲ್ಲ. ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯಗಳು ಬರಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಬುಧವಾರ ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಗಳು ಕಳೆದ ವಾರದಿಂದ ಹೇಗೆ ನಡೆದುಕೊಂಡಿದ್ದಾರೆ ಎಂಬುದು ಗೊತ್ತಿದೆ. ನನಗೆ ಭಯ ಶುರುವಾಗಿದೆ ಎಂಬುದು ನನ್ನ ನೋಡಿದರೆ ಅನಿಸುತ್ತದೆಯೇ? ಎಂದು ತಿರುಗೇಟು ನೀಡಿದರು.
ಬೆಂಗಳೂರು ದಕ್ಷಿಣ: ನಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಕೆಲಸ ಆಗ್ತಿದೆ, ಡಿ.ಕೆ.ಶಿವಕುಮಾರ್
ಮೈಸೂರಿನ ಮುಡಾ ಆಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಸ್ತಿ ಎನ್ನುತ್ತಿದ್ದಾರೆ. ಇಂತಹ ಭಂಡತನವನ್ನು ಯಾವ ಮುಖ್ಯಮಂತ್ರಿಗಳು ಸಹ ತೋರಿಲ್ಲ. ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ 61 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 50 ಪ್ರಕರಣಗಳ ತನಿಖೆಯೇ ಆಗಿಲ್ಲ ಎಂಬುದಾಗಿ ಪತ್ರಿಕಾ ವರದಿ ಹೇಳುತ್ತದೆ. ಇದಕ್ಕೆ ಸಿದ್ದರಾಮಯ್ಯ ಏನು ಹೇಳುತ್ತಾರೆ ಎಂದು ಕಟುವಾಗಿ ಪ್ರಶ್ನಿಸಿದರು.
ತಾವು ಕಪ್ಪು ಚುಕ್ಕೆ ಇಲ್ಲದ ನಾಯಕ, ಹಿಂದುಳಿದ ನಾಯಕ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಹಾಗಾದರೆ ಇವರು ಐದು ವರ್ಷ ಮುಖ್ಯಮಂತ್ರಿಯಾಗಿದ್ದಾಗ ಲೋಕಾಯುಕ್ತವನ್ನು ಏನು ಮಾಡಿದರು? ಎಸಿಬಿಯನ್ನು ಯಾಕೆ ಹುಟ್ಟು ಹಾಕಿದರು ಎಂದು ಕಿಡಿಕಾರಿದ ಅವರು, ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಕೃತ್ಯಗಳ ಬಗ್ಗೆ ಮೊದಲ ದಿನದಿಂದಲೂ ಮಾತನಾಡುತ್ತಲೇ ಇದ್ದೇನೆ. ಇದನ್ನು ಸಹಿಸಲಾಗದೆ ಸರ್ಕಾರದಲ್ಲಿ ದೊಡ್ಡ ಮಟ್ಟದ ಒಳಸಂಚು ನಡೆಯುತ್ತಿದೆ. ನನಗೆ ಖುದ್ದು ಮುಖ್ಯಮಂತ್ರಿಗಳ ಮನೆಯಿಂದಲೇ ಮಾಹಿತಿ ಬರುತ್ತಿದೆ. ಮುಖ್ಯಮಂತ್ರಿಗಳ ಕಾನೂನು ತಜ್ಞರು ಏನು ಮಾಡುತ್ತಿದ್ದಾರೆ, ಏನೆಲ್ಲಾ ಶೋಧ ಮಾಡುತ್ತಾ ನನ್ನ ವಿರುದ್ಧ ಮಸಲತ್ತು ಮಾಡುತ್ತಿದ್ದಾರೆ ಎನ್ನುವ ವಿಷಯ ಗೊತ್ತಾಗುತ್ತಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.