
ಹುಬ್ಬಳ್ಳಿ (ಅ.12): ಸರ್ಕಾರಿ ಅಥವಾ ಖಾಸಗಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಮಾಡಿರುವುದು ಒಳ್ಳೆಯ ಬೆಳವಣಿಗೆಯಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ತುಷ್ಟೀಕರಣ ರಾಜಕಾರಣ ಹೆಚ್ಚುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು. ಇಲ್ಲಿಯ ದೇವರ ಗುಡಿಹಾಳ ರಸ್ತೆಯ ವಿಶಾಲನಗರದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಮಾಡಿದ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಅವರು, ಭೂಮಿಪೂಜೆ, ಶಿಲಾನ್ಯಾಸ, ಕಾಮಗಾರಿಗಳ ಉದ್ಘಾಟನೆ ಪೂಜೆ ಮಾಡುವುದು ಸಾಮಾನ್ಯ.ಆದರೆ, ಕುರಾನ್ ಪಠಣ ಸರಿಯಲ್ಲ. ಕೆಲವರು ಮತ ಬ್ಯಾಂಕ್ ದೃಷ್ಟಿಯಿಂದ ಈ ರೀತಿ ಮಾಡುತ್ತಿದ್ದಾರೆ ಎಂದರು.
ಬೆಂಗಳೂರಿನ ಸಂಚಾರ ದಟ್ಟಣೆ ರಾಜ್ಯದ ಅರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಟಿಯ ಸಂಕೇತ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜೋಶಿ, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಇದೇ ವಿಷಯಕ್ಕೆ ಟೀಕೆ ಮಾಡುತ್ತಿದ್ದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕೇವಲ 60 ಸಾವಿರ ಕಿಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದಾಗ ನರೇಂದ್ರ ಮೋದಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದಲ್ಲಿ 90 ಸಾವಿರ ಕಿಮೀಗೂ ಹೆಚ್ಚು ರಸ್ತೆ ನಿರ್ಮಿಸಲಾಗಿದೆ ಎಂದರು.
ಅಕ್ರಮ ನುಸುಳುಕೋರರೇ ಕಾರಣ: ಭಾರತದಲ್ಲಿ ಮುಸ್ಲಿಂರ ಸಂಖ್ಯೆ ಹೆಚ್ಚಾಗಲು ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಅಕ್ರಮ ವಲಸಿಗರು ಕಾರಣ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ದೇಶದಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಲು ಅಕ್ರಮ ನುಸುಕೋಳರರೇ ಕಾರಣ. ಅಸ್ಸಾಂನಲ್ಲಿ ನಡೆದ ಗಲಭೆ ನೋಡಿದರೆ ಇದು ವಾಸ್ತವ ಎನಿಸುತ್ತದೆ ಎಂದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷ ಹಾಗೂ ವಿಜಯದಶಮಿ ಅಂಗವಾಗಿ ಹುಬ್ಬಳ್ಳಿ ಮಹಾನಗರ ಘಟಕದ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಡೆಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ್, ಶಾಸಕ ಮಹೇಶ ಟೆಂಗಿನಕಾಯಿ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಸ್ವರ್ಣಾ ಗ್ರುಪ್ ಆಫ್ ಕಂಪನೀಸ್ ವ್ಯವಸ್ಥಾಪಕ ನಿರ್ದೇಶಕ ಡಾ। ವಿಎಸ್‌ವಿ ಪ್ರಸಾದ, ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಸೇರಿದಂತೆ ಅನೇಕ ಗಣ್ಯರು ಪಥ ಸಂಚಲನದಲ್ಲಿ ಪಾಲ್ಗೊಂಡು ಗಮನ ಸೆಳೆದರು.
6 ತಿಂಗಳ ಮಗುವಿಗೂ ಗಣವೇಷ ಹಾಕಿದ್ದು ಗಮನ ಸೆಳೆಯಿತು. ಇದಲ್ಲದೇ, 2, 3, 5, 8... ಹೀಗೆ ನಾನಾ ವಯಸ್ಸಿನ ಮಕ್ಕಳು ಗಣವೇಷಧಾರಿಗಳಾಗಿ ತಮ್ಮ ತಮ್ಮ ತಂದೆಯ ಜತೆ, ಜತೆಗೆ ಹೆಜ್ಜೆ ಹಾಕುತ್ತಿದ್ದ ದೃಶ್ಯ ಕಣ್ಮನ ಸೆಳೆಯಿತು. ಗಣವೇಷಧಾರಿಗಳು ವಾದ್ಯಕ್ಕೆ ತಕ್ಕಂತೆ ಹೆಜ್ಜೆ ಹಾಕಿದರೆ, ರಸ್ತೆಯ ಎರಡು ಬದಿಗಳ ಇಕ್ಕೆಲಗಳಲ್ಲಿ ನಿಂತಿದ್ದ ಜನರು ಪಥ ಸಂಚಲನ ವೀಕ್ಷಿಸಿದರು. ನಗರದ ಪ್ರಮುಖ ಬೀದಿಗಳನ್ನು ರಂಗೋಲಿ, ಪುಷ್ಪಗಳಿಂದ ಅಲಂಕರಿಸಿ ಪಥ ಸಂಚಲನವನ್ನು ಜನರು ಸ್ವಾಗತಿಸಿದರು. ಗಣವೇಷಧಾರಿಗಳ ಮೇಲೆ ಪುಷ್ಪಗಳ ಮಳೆಗರೆದು, ಜಯಘೋಷ ಮೊಳಗಿಸಿದರು.
ಭಗವಾ ಧ್ವಜ ಹಾಗೂ ಸಂಘದ ಸಂಸ್ಥಾಪಕರ ಭಾವಚಿತ್ರಕ್ಕೆ ಜನರು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಇನ್ನು ಕೊಯಿನ್ ರಸ್ತೆಯಲ್ಲಿ ಬಾನಿ ಓಣಿಯ ಗೆಳೆಯರ ಬಳಗ ಸೇರಿದಂತೆ ವಿವಿಧೆಡೆ ಪಥ ಸಂಚಲನ ಬಂದ ಸಮಯದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಆರ್‌ಎಸ್‌ಎಸ್ ಗಣವೇಷಧಾರಿ, ಭಾರತ ಮಾತೆ, ಸ್ವಾಮಿ ವಿವೇಕಾನಂದ ಸೇರಿದಂತೆ ವಿವಿಧ ವೇಷಭೂಷಣದಲ್ಲಿ ತಯಾರಾಗಿದ್ದ ಮಕ್ಕಳು ರಸ್ತೆ ಬದಿಯಲ್ಲಿ ನಿಂತು ಪಥ ಸಂಚಲನವನ್ನು ಸ್ವಾಗತಿಸುತ್ತಿದ್ದ ದೃಶ್ಯ ಗಮನ ಸೆಳೆಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.