
ಹುಬ್ಬಳ್ಳಿ (ನ.26): ಪಕ್ಷದ ಕುರಿತು, ಪಕ್ಷದಲ್ಲಿರುವವರ ಕುರಿತು ಏನೇ ಅತೃಪ್ತಿಗಳಿರಲಿ ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಶನಿವಾರ ಮಾಜಿ ಸಚಿವ ವಿ. ಸೋಮಣ್ಣ ಅವರ ಬಂಡಾಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕದ ನಂತರ ಅವರ ಅತೃಪ್ತಿ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು.
ಮಾಜಿ ಸಚಿವ ವಿ. ಸೋಮಣ್ಣ ಹೈಕಮಾಂಡ್ ಗೆ ದೂರು ನೀಡುತ್ತಿರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ನಿಮ್ಮ ಕುಂದು ಕೊರತೆಗಳು ಏನೇ ಇರಲಿ ಅದನ್ನು ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಇತರ ರಾಷ್ಟ್ರೀಯ ನಾಯಕರಿಗೆ ಮಾಹಿತಿ ನೀಡಲಿ. ಮಾಧ್ಯಮದ ಮೂಲಕ ಇದನ್ನು ಚರ್ಚಿಸುವುದು ಒಳ್ಳೆಯದಲ್ಲ. ಸೋಮಣ್ಣ ಪಕ್ಷದ ಪ್ರಮುಖ ನಾಯಕರು. ವೈಯಕ್ತಿಕವಾಗಿಯೂ ನನ್ನೊಂದಿಗೆ ಆತ್ಮೀಯರಾಗಿದ್ದು, ಈ ಕುರಿತು ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಡಿಕೆಶಿ ಪ್ರಾಮಾಣಿಕರಾಗಿದ್ದರೆ ಸಂಪುಟ ನಿರ್ಧಾರ ವಿರೋಧಿಸಬೇಕಿತ್ತು: ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಉತ್ತರ ಕರ್ನಾಟಕ ಕಡೆಗಣನೆ ವಿಚಾರಕ್ಕೆ ಉತ್ತರಿಸಿದ ಜೋಶಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಅಂತ ಭಾಗ ಮಾಡಲು ಆಗುವುದಿಲ್ಲ. ಒಂದು ವ್ಯವಸ್ಥೆಯೊಳಗೆ ಈ ಪ್ರಕ್ರಿಯೆ ಮಾಡಲಾಗಿದೆ. ಉತ್ತರ ಕರ್ನಾಟಕಕ್ಕೆ ಮೊದಲ ಆದ್ಯತೆ ಕೊಟ್ಟಿದ್ದೇ ಬಿಜೆಪಿ. ನಂಜುಂಡಪ್ಪ ವರದಿ ಅನುಷ್ಠಾನಕ್ಕೆ ಅಧ್ಯಕ್ಷರನ್ನು ನೇಮಿಸಿದ್ದು ಇದೇ ಬಿಜೆಪಿ ಎಂಬುದು ನೆನಪಿರಲಿ. ಸಮಸ್ಯೆ ಏನಿದೆ ಅದನ್ನು ಬಗೆಹರಿಸಬೇಕು ಅದನ್ನು ಬಿಟ್ಟು ಯಾರೋ ವ್ಯಕ್ತಿಯನ್ನು ನೇಮಕ ಮಾಡಿದಾಗ ಈ ಬಗ್ಗೆ ಚರ್ಚಿಸುವುದು ಸರಿಯಲ್ಲ ಎಂದರು.
ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ: ಡಿಕೆ ಶಿವಕುಮಾರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ನಡೆಸುತ್ತಿರುವ ತನಿಖೆಯನ್ನು ರಾಜ್ಯ ಸರ್ಕಾರ ಹಿಂಪಡೆಯಲು ನಿರ್ಧಿಸಿರುವುದು ಸರಿಯಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ ಅನ್ನೋದು ಇದರಿಂದ ಸ್ಪಷ್ಟವಾಗುತ್ತೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.
ಡಿಸಿಎಂ ಡಿಕೆ ಶಿವಕುಮಾರ ಅವರ ಸಿಬಿಐ ತನಿಖೆ ಶಿಫಾರಸ್ಸು ವಾಪಸ್ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಇದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ. ಸಚಿವ ಸಂಪುಟದ ಈ ನಿರ್ಧಾರವನ್ನ ನ್ಯಾಯಾಲಯ ತಿರಸ್ಕರಿಸಲಿದೆ ಅನ್ನೋ ವಿಶ್ವಾಸವಿದೆ. ಎಂದರು. ಡಿಕೆ ಶಿವಕುಮಾರ ವಿರುದ್ಧ ಸೂಕ್ತ ರೀತಿಯಲ್ಲಿ ತನಿಖೆ ನಡೆಯುತ್ತೆ. ದೇಶದಲ್ಲಿ ನಾಯಾಂಗ ವ್ಯವಸ್ಥೆ ಇದೆ. ಸರ್ಕಾರದ ನಿರ್ಣಯಗಳ ವಿರುದ್ಧವಾಗಿಯೂ ನ್ಯಾಯಾಲಯಗಳು ತೀರ್ಪು ನೀಡಿವೆ.
ಕಾನೂನು ಪ್ರಕಾರ ಡಿಕೆಶಿ ಕೇಸ್ ವಾಪಸ್: ಸಚಿವ ಪ್ರಿಯಾಂಕ್ ಖರ್ಗೆ
ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ಸ್ವತಂತ್ರವಾಗಿವೆ. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ. ಹೀಗಿರುವಾಗ ದೋಷಾರೋಪ ಪಟ್ಟಿ ಸಲ್ಲಿಸುವ ಹಂತದಲ್ಲಿ ಶಿಫಾರಸ್ಸು ವಾಪಸ್ ಪಡೆದಿರುವುದು ಸರಿಯಲ್ಲ. ಸಂಬಂಧಿಸಿದ ಏಜೆನ್ಸಿಗಳು ಆರೋಪಪಟ್ಟಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಈಗಾಗಲೇ ರಾಜ್ಯ ಸರ್ಕಾರ ಅನುಮತಿ ಕೊಟ್ಟಿದೆ. ದೋಷಾರೋಪ ಪಟ್ಟಿ ಸಲ್ಲಿಕೆಯ ಹಂತದಲ್ಲಿರುವುದರಿಂದ ಟೆಕ್ನಿಕಲ್ ಗ್ರೌಂಡ್ಸ್ ಮೇಲೆ ಹೋಗೋದಿಲ್ಲ. ಒಂದುವೇಳೆ ಅದು ತಪ್ಪಾಗಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ಇದರಲ್ಲಿ ಆದ್ರೆ ರಾಜಕೀಯ ಅಧಿಕಾರ ನಡೆಸೋದು ಸರಿಯಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.