
ವಿಧಾನ ಪರಿಷತ್ (ಮಾ.12): ಹುಬ್ಬಳ್ಳಿಯ ಉಣಕಲ್‌ನಲ್ಲಿರುವ ಐತಿಹಾಸಿಕ ಶ್ರೀಚಂದ್ರಮೌಳೇಶ್ವರ ದೇವಸ್ಥಾನದ ಅಭಿವೃದ್ಧಿಗೆ ನಗರ ಪಾಲಿಕೆಯಿಂದ ₹ 25 ಕೋಟಿ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಬಿಜೆಪಿಯ ಪ್ರದೀಪ್ ಶೆಟ್ಟರ್ ಅವರ ಪಶ್ನೆಗೆ ಉತ್ತರಿಸಿದ ಅವರು, ಈ ದೇವಸ್ಥಾನವು ಧಾರ್ಮಿಕ ದತ್ತಿ ಇಲಾಖೆ ಆಡಳಿತಕ್ಕೆ ಒಳಪಟ್ಟಿದೆ. ಕೇಂದ್ರ ಪುರಾತತ್ವ ಇಲಾಖೆಯ ನಿರ್ವಹಣೆಗೆ ಒಳಪಡುವ ಸಂರಕ್ಷಿತ ದೇವಸ್ಥಾನವಾಗಿರುತ್ತದೆ. ದೇವಾಲಯ ಅಭಿವೃದ್ಧಿ ಮಾಡಲು ಸ್ಥಳದ ಅಭಾವದ ಕೊರತೆ ಇದೆ. ಹೀಗಾಗಿ ನಗರ ಪಾಲಿಕೆ ಸಿದ್ಧಪಡಿಸಿರುವ ₹ 25 ಕೋಟಿ ಯೋಜನೆಯಡಿ ₹ 18 ಕೋಟಿ ಭೂಸ್ವಾಧೀನಕ್ಕೆ ಉಳಿದ ₹ 7 ಕೋಟಿ ದೇವಸ್ಥಾನದ ಅಭಿವೃದ್ಧಿಗೆ ಬಳಸಲು ಉದ್ದೇಶಿಸಲಾಗಿದೆ ಎಂದರು.
ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಮತ್ತು ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಒಪ್ಪಿಗೆ ದೊರಕಿದ ನಂತರ ದೇವಸ್ಥಾನ ಅಭಿವೃದ್ಧಿಗೊಳಿಸಲಾಗುವುದು ಎಂದು ಸಚಿವರು ಉತ್ತರಿಸಿದರು.
ಸಿದ್ಧಾರೂಢ ಮಠಕ್ಕೆ ನೆರವು: ಸಿದ್ಧಾರೂಢ ಮಠಕ್ಕೆ ಮುಜರಾಯಿ ಇಲಾಖೆಯಿಂದ ಅನುದಾನ ನೀಡಲು ಕಾನೂನಲ್ಲಿ ಅವಕಾಶವಿಲ್ಲ. ಬದಲಾಗಿ ಮುಖ್ಯಮಂತ್ರಿಗಳ ವಿಶೇಷ ನಿಧಿ ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ನೆರವು ಪಡೆಯಬಹುದು ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ನಡೆಸಲಾಗುವ ದಾಸೋಹಕ್ಕೆ ಯಾವುದೇ ಸಮಸ್ಯೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಇಲಾಖೆ ಆಯುಕ್ತರಿಗೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಈ ಕುರಿತಂತೆ ಮುಜರಾಯಿ ಆಯುಕ್ತರೊಂದಿಗೆ ದೂರವಾಣಿ ಮೂಲಕ ಚರ್ಚಿಸಿದ ರಾಮಲಿಂಗಾರೆಡ್ಡಿ, ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್ ಬಳಸಿ ದಾಸೋಹ ನಡೆಸುವ ದೇವಸ್ಥಾನಗಳ ಅಧಿಕಾರಿಗಳೊಂದಿಗೆ ಚರ್ಚಿಸಿ, ಭಕ್ತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶಿಸಿದರು.
ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ 15 ಪ್ರಮುಖ ಮುಜರಾಯಿ ದೇವಸ್ಥಾನಗಳಿಗೆ ಸ್ವಲ್ಪ ಸಮಸ್ಯೆಯಾಗಿದೆ. ಪ್ರಸಾದ, ದಾಸೋಹಕ್ಕೆ ಸಮಸ್ಯೆ ಕುರಿತಂತೆ ಮತ್ತು ಅದಕ್ಕೆ ಪರಿಹಾರದ ಕುರಿತಂತೆ ಚರ್ಚೆ ಮಾಡಲಾಗಿದೆ. ಸಮಸ್ಯೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ದೇವಸ್ಥಾನದ ಆಡಳಿತ ಮಂಡಳಿಗೆ ತಿಳಿಸಿದ್ದೇನೆ. ಸದ್ಯಕ್ಕೆ ಕಡಿಮೆ ಇಂಧನ ಬಳಕೆಯಾಗುವ ಪ್ರಸಾದ ತಯಾರಿಸುವ ಕುರಿತಂತೆ ತೀರ್ಮಾನಿಸಿಲ್ಲ. ಪರಿಸ್ಥಿತಿ ಆಧರಿಸಿ ಮುಂದೆ ಚರ್ಚೆ ಮಾಡಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.