
ಬೆಂಗಳೂರು (ಜೂ.19): ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆಯಾಗುವ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ಘೋಷಣೆ ಮಾಡಿದೆ. ಇದೇ ತಿಂಗಳು 25ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ಜು.2ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಜು.3ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜು.5ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಜು.12ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಜರುಗಲಿದೆ. ಅದೇ ದಿನ ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.
ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇರೆಗೆ ಈ ಸ್ಥಾನ ಆಡಳಿತಾರೂಢ ಕಾಂಗ್ರೆಸ್ ಪಾಲಾಗುವುದು ನಿಶ್ಚಿತ. ಈಗಾಗಲೇ ಕಾಂಗ್ರೆಸ್ ಪಕ್ಷ ಪಕ್ಷದ ಅಭ್ಯರ್ಥಿಯನ್ನಾಗಿ ಬಸವನಗೌಡ ಬಾದರ್ಲಿ ಅವರ ಹೆಸರನ್ನು ಘೋಷಿಸಿದೆ. ಹೀಗಾಗಿ, ಮತದಾನ ನಡೆಯದೇ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ನಿಚ್ಚಳವಾಗಿದೆ. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಸರ್ಕಾರವು ವಿಧಾನಪರಿಷತ್‌ಗೆ ಆಯ್ಕೆ ಮಾಡಿತ್ತು. ಆದರೆ, ಕಾರಣಾಂತರಗಳಿಂದ ಜ.25ರಂದು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಬಿಜೆಪಿಗೆ ಮರಳಿದ್ದರು. 2028ರ ಜೂ.14ರವರೆಗೆ ಜಗದೀಶ್ ಶೆಟ್ಟರ್ ಅವಧಿ ಇತ್ತು. ಆದರೆ, ರಾಜೀನಾಮೆಯಿಂದಾಗಿ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ಘೋಷಣೆ ಮಾಡಲಾಗಿದೆ.
ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಿದ್ದರೆ ದರ್ಶನ್ ಮನೆ ತೆರವು: ಡಿಕೆಶಿ
ಒಂದು ವರ್ಷದಲ್ಲಿ ಎಲ್ಲಾ ರೀತಿ ಬೆಲೆ ಏರಿಕೆ ಭಾಗ್ಯ: ಲೋಕಸಭೆ ಚುನಾವಣೆ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಮಾರಾಟ ತೆರಿಗೆ ಹೆಚ್ಚಿಸಿದ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಜತೆಗೆ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕಾದ ಹಿನ್ನಡೆಗೆ ರಾಜ್ಯ ಸರ್ಕಾರ ಇದೀಗ ಬೆಲೆ ಏರಿಕೆ ಮೂಲಕ ಸೇಡು ತೀರಿಸಿಕೊಳ್ಳಲು ಹೊರಟಿದೆ ಎಂದು ಆರೋಪಿಸಿದ್ದಾರೆ.
ಸರ್ಕಾರದ ಬೆಲೆ ಏರಿಕೆ ನಿರ್ಧಾರದಿಂದ ಜನರಿಗೆ ಆರ್ಥಿಕ ಹೊರೆಯಾಗಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಸಚಿವ ಸಿ.ಟಿ.ರವಿ ಮತ್ತಿತರರು ಆರೋಪಿಸಿದರೆ, ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ರಾಜ್ಯಾದ್ಯಂತ ಸೋಮವಾರ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದ್ದಾರೆ. ಏತನ್ಮಧ್ಯೆ, ಭಾನುವಾರ ಚಿಕ್ಕಮಗಳೂರು, ಕೊಪ್ಪಳ ಸೇರಿ ರಾಜ್ಯದ ಕೆಲವೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶವನ್ನೂ ಹೊರಹಾಕಿದ್ದಾರೆ.
ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲಿ ನೀಟ್ ರದ್ದು ಚಿಂತನೆ: ಡಿ.ಕೆ.ಶಿವಕುಮಾರ್ ಸುಳಿವು
ದರ ಏರಿಕೆ ಭಾಗ್ಯ: ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ತೈಲ ದರ ಏರಿಕೆ ಮಾಡಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಈ ಮೂಲಕ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಹಾಕಲಾಗಿದೆ ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ. ಹಾಲು, ಆಲ್ಕೋಹಾಲ್, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ ತೈಲ ಬೆಲೆ ಏರಿಕೆ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.