ಬಿಬಿಎಂಪಿ ಚುನಾವಣೆ ಕುರಿತಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಚಿಂತನೆ ನಡೆಸಿದೆ.
ಬೆಂಗಳೂರು, ಡಿ. 04: ಬಿಬಿಎಂಪಿ ಚುನಾವಣೆ ಕುರಿತಂತೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಅವರು ಹೇಳಿದ್ದಾರೆ.
ಈ ಬಗ್ಗೆ ಇಂದು (ಶುಕ್ರವಾರ) ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಉದ್ದೇಶಿಸಿದ್ದೇವೆ ಎಂದರು.
ಬಿಬಿಎಂಪಿ ಚುನಾವಣೆ ಭವಿಷ್ಯ: ಮಹತ್ವದ ತೀರ್ಪು ನೀಡಿದ ಹೈಕೋರ್ಟ್..!
ಬಿಬಿಎಂಪಿಗೆ ಪ್ರತ್ಯೇಕ ಕಾಯ್ದೆ ರೂಪಿಸುವುದಾಗಿ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿಯೆ ಭರವಸೆ ನೀಡಲಾಗಿತ್ತು. ಮುಂಬರುವ ಅಧಿವೇಶನದಲ್ಲೇ ವಿಧೇಯಕ ಮಂಡನೆ ಮಾಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.
ನಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ಬೇಕು ಅಂತ ತಿಳಿಸಿದ್ದೆವು. ಈ ನಿಟ್ಟಿನಲ್ಲಿ ಕ್ರಮಗಳು ಆಗ್ತಿವೆ. ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕೋ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
ಬಿಬಿಎಂಪಿ ಚುನಾವಣೆ ಕುರಿತಂತೆ ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ಮಹತ್ವದ ಸೂಚನೆ ನೀಡಿದೆ. ಬಿಬಿಎಂಪಿ ವಾರ್ಡ್ ಪುನರ್ ವಿಂಗಡನೆ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ರಾಜ್ಯ ಸರ್ಕಾರ ಪ್ರಯತ್ನ ನಡೆಸಿತ್ತು. ಆದರೆ ಇದೀಗ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಬರುವ ವರ್ಷದ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯುವುದು ಸಾಧ್ಯತೆಗಳಿವೆ.