
ಬೆಂಗಳೂರು (ಮೇ.19): ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನೂತನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹೆಸರು ಘೋಷಣೆಯಾದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶದ ಆರು ದಿನಗಳ ಬಳಿಕ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವದ ತೀರ್ಪು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.
ರಾಜಕಾರಣದಲ್ಲಿ ಪಾತ್ರಗಳನ್ನು ತೀರ್ಮಾನಿಸುವುದು ಜನ. ನಮಗೆ ಪ್ರತಿಪಕ್ಷವಾಗಿರಲು ಜನ ತೀರ್ಮಾನ ಕೊಟ್ಟಿದ್ದಾರೆ. ಕಾಂಗ್ರೆಸ್ ಮೇಲೆ ಜನ ಬಹಳಷ್ಟುವಿಶ್ವಾಸ ಇಟ್ಟಿದ್ದಾರೆ. ಗ್ಯಾರಂಟಿಗಳ ಮೇಲೆ ಜನರಿಗೆ ದೊಡ್ಡ ವಿಶ್ವಾಸ ಇದೆ. ಅದನ್ನು ಅವರು ಪೂರೈಸಬೇಕಾಗಿದೆ. ಪೂರೈಸುವ ವೇಳೆ ರಾಜ್ಯದ ಆರ್ಥಿಕ ಸ್ವಾಸ್ಥ್ಯ ಹಾಳಾಗದಂತೆ ನೋಡಿಕೊಳ್ಳುವುದು ಕೂಡ ಅವರ ಜವಾಬ್ದಾರಿ. ಯಾವ ರೀತಿ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು ಹೇಳಿದರು.
ಬಿಜೆಪಿ ಸೋಲಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಕಾರಣ: ಕುಮಾರ್ ಬಂಗಾರಪ್ಪ
ಪ್ರತಿಪಕ್ಷವಾಗಿ ನಾವು ಜವಾಬ್ದಾರಿಯಿಂದ ಕೆಲಸ ಮಾಡುವ ಅವಶ್ಯಕತೆ ಇದೆ. ನೆಲ-ಜಲ ವಿಚಾರದಲ್ಲಿ ರಾಜಕೀಯ ಬೆರೆಸದೆ ಕೆಲಸ ಮಾಡಬೇಕು. ಜನರಿಗೆ ಅನ್ಯಾಯ ಆದಾಗ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಕೆಲಸ ಮಾಡುತ್ತೇವೆ. 2023ನೇ ಇಸ್ವಿ ರಾಜ್ಯದ ಒಟ್ಟಾರೆ ಅಭಿವೃದ್ಧಿ ದೃಷ್ಟಿಯಿಂದ ಬಹಳ ಮಹತ್ವದ್ದು ಮತ್ತು ಅನೇಕ ಸವಾಲುಗಳಿವೆ. ಕರ್ನಾಟಕ ಸುಭಿಕ್ಷವಾಗಿರುವ ನಾಡು. ಜನ ಶಾಂತಿಯನ್ನು ಮಾನ್ಯ ಮಾಡುವಂತಹವರು. ಕರ್ನಾಟಕದ ಅಭ್ಯುದಯ ದೇಶಕ್ಕೆ ಪರಿಣಾಮ ಬೀರುತ್ತದೆ. ಈ ಆಯಾಮಗಳ ಮೇಲೆ ಪ್ರತಿಪಕ್ಷವಾಗಿ ನಾವು ಇರುತ್ತೇವೆ ಎಂದು ತಿಳಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬೊಮ್ಮಾಯಿ, ನಮ್ಮ ಸೋಲಿನ ಪರಾಮರ್ಶೆ ಬೇರೆ ಬೇರೆ ಹಂತದಲ್ಲಿ ನಡೆಯುತ್ತಿದೆ. ಎರಡು-ಮೂರು ದಿನಗಳಲ್ಲಿ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಸಭೆ ಮಾಡುತ್ತೇವೆ. ಅದೇ ಸಭೆಯಲ್ಲಿ ವಿಪಕ್ಷ ನಾಯಕರ ತೀರ್ಮಾನ ಮಾಡುತ್ತೇವೆ. ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇಲ್ಲ. ಕೆಲವು ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ನಾವು ಹಿಂದೆ ಬಿದ್ದೆವು. ಚುನಾವಣಾ ತಯಾರಿಯಲ್ಲಿ ಕಾಂಗ್ರೆಸ್ ಮುಂದೆ ಇದ್ದಿದ್ದು ಸೋಲಿಗೆ ಕಾರಣವಾಗಿದೆ. ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ ಎಂದರು.
ಗ್ಯಾಸ್ ದರ ಹೆಚ್ಚಳದಿಂದ ಹಲವು ನಾಯಕರ ಸೋಲು: ಶಾಸಕ ಶಿವರಾಮ ಹೆಬ್ಬಾರ್
ಪ್ರತಿಪಕ್ಷ ನಾಯಕನ ಆಯ್ಕೆಗೆ ನಾಡಿದ್ದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಸರ್ಕಾರ ರಚನೆ ಬಿಕ್ಕಟ್ಟು ಸುಗಮವಾಗಿ ಮುಗಿದ ಬೆನ್ನಲ್ಲೇ ಪ್ರಮುಖ ಪ್ರತಿಪಕ್ಷದ ಸ್ಥಾನ ವಹಿಸಿಕೊಳ್ಳಲಿರುವ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ಈ ತಿಂಗಳ 21ರಂದು ಭಾನುವಾರ ನಡೆಯುವ ಸಾಧ್ಯತೆಯಿದೆ. ಸಭೆಯಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನ ಅಲಂಕರಿಸುವ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡುವ ಸಾಧ್ಯತೆಯಿದ್ದು, ಇದರೊಂದಿಗೆ ಚುನಾವಣೆಯ ಸೋಲಿನ ಬಗ್ಗೆಯೂ ಪರಾಮರ್ಶೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.