ಕಾಂಗ್ರೆಸ್ ಅಧಿಕಾರಕ್ಕೆ ತರಲು ಬೆಂಬಲ ನೀಡಿದ ಜಿಲ್ಲೆಯ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪಕ್ಷದ ಕಾರ್ಯಕರ್ತರು, ಮುಖಂಡರ ಶ್ರಮವನ್ನು ಶ್ಲಾಘಿಸುತ್ತೇನೆ. ನಾವು ಸೋತಾಗ ಕುಗ್ಗಲಿಲ್ಲ. ಗೆದ್ದಾಗ ಬೀಗುವುದಿಲ್ಲ. ಜನಪರ ಆಡಳಿತ ನೀಡಿ ಎಲ್ಲ ವರ್ಗದ ಆಶೋತ್ತರಗಳನ್ನು ಈಡೇರಿಸುವ ಕೆಲಸ ಮಾಡುತ್ತೇವೆ ಎಂದ ಸಲೀಂ ಅಹ್ಮದ್
ಹಾವೇರಿ(ಜೂ.13): ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಧ್ವನಿಯೆತ್ತಿ ಚುನಾವಣೆಯಲ್ಲಿ ಜನಾಶೀರ್ವಾದ ಪಡೆದಿದ್ದೇವೆ. ಗೆದ್ದಿದ್ದೇವೆಂದು ನಾವು ಬೀಗುವುದಿಲ್ಲ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ. ಅದೇ ರೀತಿ ಅಧಿಕಾರಿಗಳು ಭ್ರಷ್ಟಾಚಾರ ನಡೆಸದೆ, ಸರ್ಕಾರಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ತರಲು ಬೆಂಬಲ ನೀಡಿದ ಜಿಲ್ಲೆಯ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪಕ್ಷದ ಕಾರ್ಯಕರ್ತರು, ಮುಖಂಡರ ಶ್ರಮವನ್ನು ಶ್ಲಾಘಿಘಿಸುತ್ತೇನೆ. ನಾವು ಸೋತಾಗ ಕುಗ್ಗಲಿಲ್ಲ. ಗೆದ್ದಾಗ ಬೀಗುವುದಿಲ್ಲ. ಜನಪರ ಆಡಳಿತ ನೀಡಿ ಎಲ್ಲ ವರ್ಗದ ಆಶೋತ್ತರಗಳನ್ನು ಈಡೇರಿಸುವ ಕೆಲಸ ಮಾಡುತ್ತೇವೆ ಎಂದರು.
ಹಾವೇರಿ ಉಸ್ತುವಾರಿ ಸಚಿವರಾಗಿ ಶಿವಾನಂದ ಪಾಟೀಲ್: ಹೆಗಲೇರಿವೆ ಹಲವು ಸವಾಲು!
ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ. ಚುನಾವಣೆ ಪೂರ್ವದಲ್ಲಿ ನಾವು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೆವು. ಮೊದಲ ಕ್ಯಾಬಿನೆಟ್‌ನಲ್ಲೇ ಚರ್ಚಿಸಿ ಸುತ್ತೋಲೆ ಹೊರಡಿಸಿದ್ದೇವೆ. ಈಗಾಗಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದೇವೆ. ಆಗಸ್ಟ್ ಒಳಗಾಗಿ ಇನ್ನುಳಿದ 4 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ಭರವಸೆ ನೀಡಿದರು.
ನುಡಿದಂತೆ ನಡೆದಿದ್ದೇವೆ:
ಕಾಂಗ್ರೆಸ್ ಯಾವತ್ತೂ ನುಡಿದಂತೆ ನಡೆಯುವ ಪಕ್ಷ. 2013ರಲ್ಲಿ ಪ್ರಣಾಳಿಕೆಯಲ್ಲಿ ಕೊಟ್ಟಿದ್ದ 165 ಭರವಸೆಗಳನ್ನು ನಾವು ಈಡೇರಿಸಿದ್ದೆವು. ಈ ಸಲ ಶೇ.43ರಷ್ಟುಮತಗಳನ್ನು ನೀಡಿ ಜನರು ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಟೀಕಿಸುವ ನೈತಿಕತೆ ಬಿಜೆಪಿಗಿಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದರೆ ಕಪ್ಪು ಹಣ ತಂದು ಎಲ್ಲರ ಖಾತೆಗೆ .15 ಲಕ್ಷ ಹಾಕುತ್ತೇವೆ ಎಂದಿದ್ದರು. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿದ್ದರು. ಆದರೆ, ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದಿನಸಿ ವಸ್ತುಗಳ ಬೆಲೆ ಏರಿಸಿದ್ದರಿಂದ ಬಡ ಜನರ ಬದುಕು ದುರ್ಬರವಾಯಿತು. ಇದರಿಂದ ಬಿಜೆಪಿ ಅಧಿಕಾರ ಕಳೆದುಕೊಂಡಿತು ಎಂದು ಹೇಳಿದರು.
ಇಂದಿರಾ ಕ್ಯಾಂಟೀನ್ ಪುನಾರಂಭ:
ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಭ್ರಷ್ಟಾಚಾರ, ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಯಾವ್ಯಾವ ಇಲಾಖೆ, ಯೋಜನೆಗಳಲ್ಲಿ ಅವ್ಯವಹಾರ ನಡೆದಿದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ರಾಜ್ಯದಲ್ಲಿ ಬಾಗಿಲು ಮುಚ್ಚಿರುವ ಇಂದಿರಾ ಕ್ಯಾಂಟೀನ್‌ಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಯುತ್ತಿದೆ ಎಂದ ಅವರು, ಜಿಲ್ಲೆಯಲ್ಲಿ ಐವರು ಶಾಸಕರಿದ್ದರೂ ಸಚಿವ ಸ್ಥಾನ ಸಿಗದೇ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಹೇಳಿದರು.
ಖಾತೆಗೆ 15 ಲಕ್ಷರೂ. ಹಾಕುವ ಕತೆ ಏನಾಯ್ತು? ಬಿಜೆಪಿ ಅಪಪ್ರಚಾರ ಮಾಡೋದು ನಿಲ್ಲಿಸಲಿ: ಶಾಸಕ ಮಾನೆ
ಮಾಜಿ ಶಾಸಕ ಸೋಮಣ್ಣ ಬೇವಿನಮರದ, ಕಾಂಗ್ರೆಸ್ ಮುಖಂಡರಾದ ಸಂಜೀವಕುಮಾರ ನೀರಲಗಿ, ಶಿವಕುಮಾರ ತಾವರಗಿ ಇದ್ದರು.
20 ಸ್ಥಾನ ಗೆಲ್ಲುತ್ತೇವೆ:
ಜಿಪಂ ಮತ್ತು ತಾಪಂ ಚುನಾವಣೆ ನಡೆಸಲು ನಾವು ಉತ್ಸುಕರಾಗಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು ಎಂದು ಸಲೀಂ ಅಹ್ಮದ್ ಹೇಳಿದರು.