
ದೆಹಲಿ: ತಾವು ಗೆದ್ದಿರುವ ರಾಜ್ಯಗಳು ಬಿಟ್ಟರೆ ಉಳಿದ ಕಡೆಗಳಲ್ಲೆಲ್ಲಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಇದನ್ನು “ಮತಗಳ್ಳತನ” (ವೋಟ್ ಚೋರಿ) ಎಂದು ಉಲ್ಲೇಖಿಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು, ಈ ಕುರಿತು ಮನವಿ ಪತ್ರ ಸಲ್ಲಿಸಲು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಲು ಮಲ್ಲಿಕಾರ್ಜುನ ಖರ್ಗೆ ಸಹಿತ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಭೇಟಿಗೆ ಹೋಗಿ ವಾಪಸ್ ಬಂದ ಬೆನ್ನಲ್ಲೇ, ಇದೀಗ ಇದು ರಾಜಕೀಯ ತಿರುವು ಪಡೆದುಕೊಂಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಭೇಟಿಯ ಮನವಿಯನ್ನು ನಿರಾಕರಿಸಿದ ಬೆನ್ನಲ್ಲೇ ಕಾಂಗ್ರೆಸ್ಸಿಗರು ಭುಗಿಲೆದ್ದಿದ್ದಾರೆ. ಆದರೆ ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು ತಿರುಗುವು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರಿಗೆ ಒಂದು ಕೇಸ್ ಕೋರ್ಟ್‌ನಲ್ಲಿ ಪೆಂಡಿಂಗ್ನಲ್ಲಿ ಇರುವಾಗ, ಅದರ ಬಗ್ಗೆ ವೈಯಕ್ತಿಕ ಮಾತನಾಡಲು ನ್ಯಾಯಮೂರ್ತಿಗಳನ್ನು ಭೇಟಿಯಾಗುವುದು ಅಪರಾಧ ಎನ್ನುವುದು ಗೊತ್ತಿಲ್ಲವೇ ಎಂದು ಟೀಕಿಸುತ್ತಿದ್ದಾರೆ ಬಿಜೆಪಿ ಕಾರ್ಯಕರ್ತರು. ಅಷ್ಟಕ್ಕೂ ರಾಹುಲ್ ಗಾಂಧಿ ವಿರುದ್ಧ ಇದಾಗಲೇ ಸುಪ್ರೀಂಕೋರ್ಟ್ನಲ್ಲಿ ಕ್ರಿಮಿನಲ್ ಕೇಸ್ ಕೂಡ ಬಾಕಿ ಇದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧದ ರಾಫೆಲ್ ಯುದ್ಧ ವಿಮಾನ ಒಪ್ಪಂದದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಕ್ರಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆ ಕೋರ್ಟ್‌ನಲ್ಲಿ ಪೆಂಡಿಂಗ್ ಇದೆ. ಇಂದು ಅದಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆಯೇ ವಿನಾ ಅದನ್ನು ರದ್ದು ಮಾಡಲಿಲ್ಲ.
ಅದೂ ಅಲ್ಲದೇ ಖುದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದ ಪ್ರಕರಣಗಳು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವುದರಿಂದ, ವೈಯಕ್ತಿಯವಾಗಿ ಭೇಟಿಯಾಗುವುದು ಕಾನೂನು ಉಲ್ಲಂಘನೆ ಎನ್ನುವುದು ಕಾಂಗ್ರೆಸ್ ನಾಯಕರಿಗೆ ತಿಳಿದೇ ಇಲ್ಲವೆ, ಅಷ್ಟೂ ಸಣ್ಣ ವಿಷಯ ಕೂಡ ಅವರಿಗೆ ತಿಳಿಯುತ್ತಿಲ್ಲವೆ, ಅವರ ಗುಂಪಿನಲ್ಲಿ ಸ್ವಲ್ಪನಾದರೂ ಕಾನೂನು ಅರಿತವರು ಯಾರೂ ಇಲ್ಲವೆ ಎಂದೆಲ್ಲಾ ಜಾಲತಾಣಗಳಲ್ಲಿ ಪ್ರಶ್ನಿಸಲಾಗುತ್ತಿದೆ. SIR ಕುರಿತ ವಿವಾದವೇ ಕೋರ್ಟ್‌ನಲ್ಲಿ ಬಾಕಿ ಇರುವ ಹಿನ್ನೆಲೆಯಲ್ಲಿ, ಈ ಭೇಟಿ ಸಾಧ್ಯವಿಲ್ಲ ಎಂದು ಖುದ್ದು ಮುಖ್ಯ ನ್ಯಾಯಮೂರ್ತಿಗಳೇ ಹೇಳಿದ್ದರೂ, ಅದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದು ಎಷ್ಟು ಸರಿ ಎನ್ನುವ ಮಾತು ಕೇಳಿಬರುತ್ತಿದೆ.
ಮತದಾರರ ಪಟ್ಟಿಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ವಿರೋಧಿಸಿ ವಿಪಕ್ಷ ನಾಯಕರು ದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ವರೆಗೆ ಬೃಹತ್ ಮೆರವಣಿಗೆ ನಡೆಸಲು ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲು ಸಿದ್ಧತೆ ನಡೆಸಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಮುಖ್ಯ ನ್ಯಾಯಮೂರ್ತಿಗಳ ಈ ನಿಲುವು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.