Karnataka Politics: ಭ್ರಷ್ಟ ಸಚಿವರ ವಿರುದ್ಧ ಕ್ರಮಕ್ಕೆ ಹಿಂದೇಟು ಏಕೆ?: ಭಾಸ್ಕರ್‌ ರಾವ್‌

By Kannadaprabha News  |  First Published Sep 2, 2022, 10:24 AM IST

ಸಾವರ್ಕರ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿ ಅಂಡಮಾನ್‌ ಜೈಲಿನಲ್ಲಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಇದು ಬಿಜೆಪಿಯವರಿಗೆ ಲಾಭವಾಗುತ್ತಿದೆಯಾ ಎಂದು ಪ್ರಶ್ನಿಸಿದ ಭಾಸ್ಕರ್‌ ರಾವ್‌ 


ಬೆಳಗಾವಿ(ಸೆ.02): ರಾಜ್ಯ ಬಿಜೆಪಿ ಸರ್ಕಾರದ ಸಚಿವರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಶಾಮೀಲಾಗಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುವಲ್ಲಿ ಪ್ರಧಾನಿ ನರೇಂದ್ರ ಮೋದಿ ಹಿಂದೇಟು ಹಾಕುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಆರೋಪಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಚಿವರ ಮೇಲೆ ಕ್ರಮ ಕೈಗೊಳ್ಳುವಲ್ಲಿ ಹಿಂದೇಟು ಏಕೆ ಹಾಕಲಾಗುತ್ತಿದೆ ಎಂಬುದರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದುಮಾಡಿದ್ದ ಬಿಟ್‌ ಕಾಯಿನ್‌ ಹಗರಣದ ಪ್ರಕರಣ ಎಲ್ಲಿಗೆ ಬಂತು ಎಂದು ಪ್ರಶ್ನಿಸಿದ ಅವರು, ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಇಲ್ಲಿಯವರೆಗೂ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Tap to resize

Latest Videos

ಬಿಜೆಪಿ ಸರ್ಕಾರದ 40% ಕಮಿಷನ್‌ ವಿರುದ್ಧ ಹೋರಾಟ: ಕೃಷ್ಣ ಭೈರೇಗೌಡ, ಪ್ರಿಯಾಂಕ್‌ ಎಚ್ಚರಿಕೆ

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಬರುತ್ತಿದ್ದಾರೆ. ಸ್ವಾತಂತ್ರ್ಯದ ದಿನ ಕೆಂಪುಕೋಟೆ ಮೇಲೆ ಭಾಷಣದ ವೇಳೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ಹೇಳಿದ್ದು ಸ್ವಾಗತಾರ್ಹ. ಆದರೆ, ಕರ್ನಾಟಕದ ಬಗ್ಗೆ ಮೋದಿ ಅವರು ತಿಳಿದುಕೊಳ್ಳಬೇಕಿದೆ ಎಂದರು.

ಗುತ್ತಿಗೆದಾರರು ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದರೂ ಕರ್ನಾಟಕದ ಬಗ್ಗೆ ಮೋದಿ ಅವರು ಮೌನವಾಗಿರುವುದು ನಾನಾ ಅನುಮಾನಕ್ಕೆ ಕಾರಣವಾಗಿದೆ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಪಿಎಸ್‌ಐ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಎಂದು ಹೇಳಿದ್ದರು. ಆದರೆ, ಇದರಲ್ಲಿ ಹಿರಿಯ ಪೊಲೀಸ್‌ ಅಧಿಕಾರಿ ಶಾಮೀಲಾಗಿದ್ದು ಬಹಿರಂಗವಾಗಿದೆ. ಇದರ ಹಿಂದೆ ರಾಜಕಾರಣಿಗಳ ಕೈವಾಡ ಇರುವುದು ಎಲ್ಲರಿಗೂ ತಿಳಿದಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಚಿವ ಮುನಿರತ್ನ ವಿರುದ್ಧ ಕ್ರಮಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಮಂಗಳೂರಿಗೆ ಬರುವ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎನ್ನುವುದು ಕಾದು ನೋಡಬೇಕು ಎಂದು ಹೇಳಿದರು.

40% Commission: 40% ಕಮಿಷನ್‌ಗೆ ಉತ್ತರಿಸದ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ನ್ಯಾಯಾಲಯದಿಂದ ಎಸಿಬಿ ರದ್ದುಗೊಳಿಸಿ ಲೋಕಾಯುಕ್ತಕ್ಕೆ ಬಲ ನೀಡಿದೆ. ಅದು 20 ದಿನ ಕಳೆದರೂ ಇಲ್ಲಿಯವರೆಗೆ ಎಸಿಬಿಯ ಪ್ರಕರಣವನ್ನು ಲೋಕಾಯುಕ್ತಕ್ಕೆ ಹಸ್ತಾಂತರ ಮಾಡಿಲ್ಲ ಎಂದು ಹರಿಹಾಯ್ದರು. ರಾಷ್ಟ್ರೀಯ ಪಕ್ಷ ಬಿಜೆಪಿ ವಿಪಕ್ಷಗಳ ವಿರುದ್ಧ ಇಲ್ಲ. ಈಗ ಜನರ ವಿರುದ್ಧ ಹೋಗಿದೆ. ಗುಜರಾತನಲ್ಲಿ ಆಪ್‌ ಮುಖಂಡ ಸಿಸೋಡಿಯಾ ಮನೆಯಲ್ಲಿ ಇಡಿ ದಾಳಿ ನಡೆಸಿದರು. ಅಲ್ಲಿ ಏನೂ ಸಿಕ್ಕಿತ್ತು ಎನ್ನುವುದನ್ನು ಬಹಿರಂಗ ಪಡಿಸಬೇಕು ಎಂದು ಸವಾಲು ಹಾಕಿದರು.
ಆಮ್‌ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ, ಶಂಕರ ಹೆಗಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಾವರ್ಕರ್‌ ಬೀದಿಗೆ ತಂದು ಅವಮಾನ

ವೀರ ಸಾವರ್ಕರ ಅವರನ್ನು ಬಿಜೆಪಿಯವರು ಬೀದಿಗೆ ತಂದು ಅವಮಾನ ಮಾಡುತ್ತಿದ್ದಾರೆ ಎಂದು ಆಮ್‌ ಆದ್ಮಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಹೇಳಿದರು. ಸಾವರ್ಕರ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿ ಅಂಡಮಾನ್‌ ಜೈಲಿನಲ್ಲಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಇದು ಬಿಜೆಪಿಯವರಿಗೆ ಲಾಭವಾಗುತ್ತಿದೆಯಾ ಎಂದು ಪ್ರಶ್ನಿಸಿದರು. ಗಣಪತಿ ಪೂಜೆ ಇಡೀ ಭಾರತದಲ್ಲಿ ಸಾರ್ವಜನಿಕವಾಗಿ ಮಾಡಬೇಕು ಎನ್ನುವ ಆಶಯ ಬಾಲಗಂಗಾಧರ ತಿಲಕ ಅವರದ್ದಾಗಿತ್ತು. ಹುಬ್ಬಳ್ಳಿ ಹಾಗೂ ಉತ್ತರ ಕರ್ನಾಟಕದಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮಾಡುವಾಗ ಬಾಲಗಂಗಾಧರ ತಿಲಕರ ಫೋಟೋ ಬಿಟ್ಟರೆ ಸಂಗೊಳ್ಳಿ ರಾಯಣ್ಣ ಮತ್ತು ಕಿತ್ತೂರು ರಾಣಿ ಚನ್ನಮ್ಮನ ಭಾವಚಿತ್ರ ಇಡಲಾಗುತ್ತದೆ ಎಂದು ಹೇಳಿದರು.
 

click me!