
ಕನ್ನಡ ಚಿತ್ರರಂಗದ ನಟ ಹಾಗೂ ನಿರ್ದೇಶಕ 'ದುನಿಯಾ' ವಿಜಯ್ ಮತ್ತು ಅವರ ಮೊದಲ ಪತ್ನಿ ನಾಗರತ್ನ ಅವರ ಸುದೀರ್ಘ ವೈವಾಹಿಕ ಕಲಹಕ್ಕೆ ಕರ್ನಾಟಕ ಹೈಕೋರ್ಟ್ ಅಧಿಕೃತವಾಗಿ ತೆರೆ ಎಳೆದಿದೆ. ವಿಜಯ್ ಅವರ ವಿಚ್ಛೇದನ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್ ವಿಭಾಗೀಯ ಪೀಠ, ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ನಟ ದುನಿಯಾ ವಿಜಯ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಭಾವುಕ ಪತ್ರವೊಂದನ್ನು ಹಂಚಿಕೊಂಡಿದ್ದು, ನ್ಯಾಯಾಲಯದ ಆದೇಶವನ್ನು ಗೌರವಿಸಿ ಹೊಸ ಬದುಕಿನತ್ತ ಹೆಜ್ಜೆ ಇಡುತ್ತಿರುವುದಾಗಿ ತಿಳಿಸಿದ್ದಾರೆ.
ವಿಚ್ಛೇದನ ಕೋರಿ ದುನಿಯಾ ವಿಜಯ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಪತ್ನಿ ಮತ್ತು ಮಕ್ಕಳ ಭವಿಷ್ಯ ಹಾಗೂ ನಟನ ಆರ್ಥಿಕ ಸಾಮರ್ಥ್ಯ ಮತ್ತು ಸ್ಥಾನಮಾನವನ್ನು ಪರಿಗಣಿಸಿದ ನ್ಯಾಯಾಲಯ, ಪತ್ನಿ ನಾಗರತ್ನ ಅವರಿಗೆ 3 ತಿಂಗಳ ಒಳಗಾಗಿ ₹2 ಕೋಟಿ ರೂಪಾಯಿ ಶಾಶ್ವತ ಜೀವನಾಂಶ ನೀಡುವಂತೆ ವಿಜಯ್‌ಗೆ ಆದೇಶಿಸಿದೆ. ಜೊತೆಗೆ, ದಂಪತಿಯ ಮೂವರು ಮಕ್ಕಳ ಸಂಪೂರ್ಣ ಭವಿಷ್ಯ ಮತ್ತು ಪೋಷಣೆಯ ಜವಾಬ್ದಾರಿಯನ್ನು ನಟ ದುನಿಯಾ ವಿಜಯ್ ಅವರೇ ವಹಿಸಿಕೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದೆ.
ತೀರ್ಪು ಹೊರಬಿದ್ದ ಬೆನ್ನಲ್ಲೇ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪತ್ರ ಹಂಚಿಕೊಂಡಿರುವ ದುನಿಯಾ ವಿಜಯ್, ಅಭಿಮಾನಿಗಳು ಹಾಗೂ ಮಾಧ್ಯಮ ಮಿತ್ರರಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ. 'ನ್ಯಾಯಾಲಯದ ಆದೇಶಕ್ಕೆ ಶಿರಸಾಷ್ಟಾಂಗ ಪ್ರಣಾಮಗಳೊಂದಿಗೆ ಶರಣಾಗಿದ್ದೇನೆ. ಕಾನೂನಿನ ಮೇಲಿನ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ. ನನ್ನ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ, ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಹಾಗೂ ಶ್ರೀ ಶಾಂತಿಭೂಷಣ್ ಅವರ ಆದೇಶಕ್ಕೆ ತಲೆಬಾಗಿದ್ದೇನೆ. ಈ ಆದೇಶಕ್ಕೆ ನನ್ನ ಗೌರವಪೂರ್ವಕ ಧನ್ಯವಾದಗಳು. ಹಾಗೆಯೇ ನನ್ನ ಪರ ವಾದಿಸಿದ ಹಿರಿಯ ಕೌನ್ಸಿಲ್ ಶ್ರೀವತ್ಸ ಹಾಗೂ ವಕೀಲ ಯುಕ್ತ ಅನಿಲ್ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು' ಎಂದು ವಿಜಯ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದೇ ವೇಳೆ ಮಾಧ್ಯಮಗಳಲ್ಲಿ ಈ ವಿಚಾರವಾಗಿ ಸಾರ್ವಜನಿಕವಾಗಿ ಮಾತನಾಡಲು ಇಷ್ಟವಿಲ್ಲ ಎಂದು ಸ್ಪಷ್ಟಪಡಿಸಿರುವ ನಟ, 'ನನ್ನ ಹೆಣ್ಣುಮಕ್ಕಳು ಈಗ ವಯಸ್ಕರಾಗಿದ್ದು, ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನ ಗಳಿಸಿದ್ದಾರೆ. ಅವರಿಗೆ ಯಾವುದೇ ಮುಜುಗರವಾಗಬಾರದು. ಮಕ್ಕಳ ಭವಿಷ್ಯ ಹಾಗೂ ಹಿತದೃಷ್ಟಿಯಿಂದ, ನನ್ನ ವೈಯಕ್ತಿಕ ಸಾಂಸಾರಿಕ ವಿಚಾರಕ್ಕೆ ನ್ಯಾಯಾಲಯ ನೀಡಿದ ಆದೇಶವನ್ನು ಆತ್ಮಸಾಕ್ಷಿಯಿಂದ ಸ್ವೀಕರಿಸಿದ್ದು, ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಹಾಕುತ್ತಿದ್ದೇನೆ. ನಿಮ್ಮ ಆಶೀರ್ವಾದ ಮತ್ತು ಹಾರೈಕೆ ಹೀಗೆಯೇ ಇರಲಿ' ಎಂದು ವಿನಂತಿಸಿದ್ದಾರೆ.
ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ನಡುವಿನ ಕೌಟುಂಬಿಕ ಬಿರುಕು ಈ ಹಿಂದೆ ಪೊಲೀಸ್ ಠಾಣೆ, ಸಾರ್ವಜನಿಕ ಚರ್ಚೆ ಹಾಗೂ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿತ್ತು. ಕೌಟುಂಬಿಕ ನ್ಯಾಯಾಲಯ ಈ ಹಿಂದೆ ವಿಚ್ಛೇದನ ನಿರಾಕರಿಸಿದ್ದರಿಂದ ವಿಜಯ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಮಾನಸಿಕ ಕ್ರೌರ್ಯದ ಆಧಾರ ಹಾಗೂ ದಂಪತಿಗಳು ಮತ್ತೆ ಒಂದಾಗಲು ಸಾಧ್ಯವಿಲ್ಲ ಎಂಬ ವಾಸ್ತವವನ್ನು ಪರಿಗಣಿಸಿ, ಷರತ್ತುಬದ್ಧ ವಿಚ್ಛೇದನ ನೀಡುವ ಮೂಲಕ ಈ ಹೈಪ್ರೊಫೈಲ್ ಕೌಟುಂಬಿಕ ವಿವಾದಕ್ಕೆ ಶಾಶ್ವತ ತೆರೆ ಎಳೆದಿದೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.