
ಅರಸೀಕೆರೆ (ನ.18): ಕನ್ನಡ ಭಾಷೆ ಅಸ್ಮಿತೆ ಮತ್ತು ಸಂಸ್ಕೃತಿ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೂ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ. ಕನ್ನಡದ ಬಗ್ಗೆ ಅಭಿಮಾನವನ್ನು ಕೇವಲ ಮಾತುಗಳಿಗೆ ಸೀಮಿತಗೊಳಿಸದೆ ದೈನಂದಿನ ಬದುಕಿನಲ್ಲಿಯೂ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಖ್ಯಾತ ನಟ ಡಾಲಿ ಧನಂಜಯ್ ಕರೆ ನೀಡಿದರು.
ತಾಲೂಕಿನ ಮಲ್ಲಿದೇವಿಹಳ್ಳಿಯಲ್ಲಿ ಮಂಜುನಾಥ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಗ್ರಾಮಸ್ಥರಿಂದ ಗೌರವ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಭವ್ಯ ಇತಿಹಾಸವಿದೆ. ಕವಿಗಳು, ಸಾಹಿತಿಗಳು, ವಚನಕಾರರು ಹಾಗೂ ದಾಸಶ್ರೇಷ್ಠರು ತಮ್ಮ ಸಾಹಿತ್ಯ ಮತ್ತು ವಿಚಾರಧಾರೆಗಳ ಮೂಲಕ ಕನ್ನಡದ ಹಿರಿಮೆಯನ್ನು ವಿಶ್ವದಾದ್ಯಂತ ಪರಿಚಯಿಸಿದ್ದಾರೆ. ಇಂತಹ ಶ್ರೀಮಂತ ಭಾಷೆಯನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ವ್ಯವಹಾರಗಳಲ್ಲಿ ಕನ್ನಡವನ್ನು ಬಳಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಕನ್ನಡವನ್ನು ಪ್ರೀತಿಸಿ ಬಳಸಿದಾಗ ಅದೇ ನಮ್ಮನ್ನು ಬೆಳೆಸುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಮುಖಂಡ ಹಾಗೂ ಚೆಸ್ಕಾಂ ಸಲಹಾ ಸಮಿತಿ ಸದಸ್ಯ ಮಂಜುನಾಥ್ ಮಾತನಾಡಿ, ಕನ್ನಡ ಭಾಷೆ ಕೇವಲ ಸಂವಹನದ ಸಾಧನವಲ್ಲ, ಅದು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಮತ್ತು ಬದುಕಿನ ಪ್ರತಿಬಿಂಬವಾಗಿದೆ. ವಿಶಿಷ್ಟ ಲಿಪಿ, ಸಾಹಿತ್ಯ ಪರಂಪರೆ ಹಾಗೂ ಭಾಷಾ ವೈವಿಧ್ಯತೆಯಿಂದ ಕನ್ನಡಕ್ಕೆ ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಗೌರವ ದೊರೆತಿದೆ. ಕನ್ನಡದ ಗತ್ತು, ಗಾಂಭೀರ್ಯ ಮತ್ತು ಸತ್ವವನ್ನು ಪ್ರತಿಯೊಬ್ಬರೂ ಅರಿತು ಭಾಷೆಯ ಬೆಳವಣಿಗೆಗೆ ಕೈಜೋಡಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ವಾನ್ ಡಾ. ನಾರಾಯಣಪ್ಪ ಅವರನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಾರನಹಳ್ಳಿ ಶಿವಮೂರ್ತಿ, ಭೂ ನ್ಯಾಯಮಂಡಳಿ ಸದಸ್ಯ ಗುತ್ತಿನಕೆರೆ ಶ್ರೀನಿವಾಸ, ಗೀಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಧರ್ಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ಕಾಂಗ್ರೆಸ್ ಮುಖಂಡ ಅಡವಿ ಸ್ವಾಮಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಯಣ್ಣ, ಕರವೇ ತಾಲೂಕು ಅಧ್ಯಕ್ಷ ಕಿರಣ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ನಂತರ ನಡೆದ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳು ಗ್ರಾಮಸ್ಥರ ಮನಸೂರೆಗೊಂಡವು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.