
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕೆ ತೆರಳುತ್ತಿದ್ದ ಆರು ಮಂದಿ ಸ್ನೇಹಿತರಿದ್ದ ಕಾರು ಶಿವಮೊಗ್ಗ ತಾಲೂಕಿನ ಚೋರಡಿ ಬ್ರಿಡ್ಜ್ ಬಳಿ ಪಲ್ಟಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಆರೂ ಮಂದಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಆರು ಮಂದಿ ಸ್ನೇಹಿತರು ಕಾರಿನಲ್ಲಿ ಸಿಗಂದೂರು ದೇವಸ್ಥಾನಕ್ಕೆ ಹೊರಟಿದ್ದರು. ಶಿವಮೊಗ್ಗ ತಾಲೂಕಿನ ಚೋರಡಿ ಬ್ರಿಡ್ಜ್ ಸಮೀಪಿಸುತ್ತಿದ್ದಂತೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಡಿವೈಡರ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲೇ ಮೂರು ಬಾರಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಒಳಗಿದ್ದವರು ನೆರವಿಗಾಗಿ ಕೂಗಿಕೊಂಡಿದ್ದಾರೆ.
ಅಪಘಾತ ನಡೆದ ಇದೇ ಸಮಯದಲ್ಲಿ ಸಾಗರ ಪೇಟೆ ಠಾಣೆಯ ಎಎಸ್‌ಐ ಮೀರಾಬಾಯಿ ಹಾಗೂ ಪೊಲೀಸ್ ಸಿಬ್ಬಂದಿ ಕರ್ತವ್ಯದ ನಿಮಿತ್ತ ಶಿವಮೊಗ್ಗದ ಕಡೆಗೆ ತಮ್ಮ ವಾಹನದಲ್ಲಿ ತೆರಳುತ್ತಿದ್ದರು. ಕಾರು ಪಲ್ಟಿಯಾಗಿರುವುದನ್ನು ಕಂಡ ತಕ್ಷಣ ವಾಹನ ನಿಲ್ಲಿಸಿದ ಪೊಲೀಸರು, ತಡಮಾಡದೆ ಕಾರಿನೊಳಗೆ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದಿದ್ದಾರೆ.
ಪೊಲೀಸ್ ಸಿಬ್ಬಂದಿ ಗಾಯಾಳುಗಳಿಗೆ ಪ್ರಾಥಮಿಕ ನೆರವು ನೀಡಿ, ಸ್ಥಳೀಯ ಇನೋವಾ ವಾಹನ ಹಾಗೂ ಆಂಬುಲೆನ್ಸ್ ಮೂಲಕ ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರ ಈ ಸಮಯಪ್ರಜ್ಞೆ ಮತ್ತು ಸಮಯಕ್ಕೆ ಸರಿಯಾಗಿ ಸಿಕ್ಕ ಚಿಕಿತ್ಸೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.