
ದುಬೈ[ಸೆ.21]: ಟೀಂ ಇಂಡಿಯಾ ಬೌಲರ್’ಗಳ ಸಂಘಟಿತ ದಾಳಿಗೆ ತತ್ತರಿಸಿದ ಬಾಂಗ್ಲಾದೇಶ ಕೇವಲ 173 ರನ್’ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಭಾರತ ಗೆಲ್ಲಲು ಸಾಧಾರಣ ಗುರಿ ಸಿಕ್ಕಂತಾಗಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಬಾಂಗ್ಲಾದೇಶ, ಆರಂಭದಲ್ಲೇ ಮುಗ್ಗರಿಸಿತು. ತಂಡದ ಮೊತ್ತ 20 ರನ್’ಗಳಾಗುವಷ್ಟರಲ್ಲೇ ಆರಂಭಿಕರಿಬ್ಬರೂ ಪೆವಿಲಿಯನ್ ಸೇರಿದರು. ಮುಷ್ಫೀಕರ್ ರಹೀಮ್, ಶಕೀಬ್ ಅಲ್ ಹಸನ್ ಉತ್ತಮ ಇನ್ನಿಂಗ್ಸ್ ಕಟ್ಟುವ ಮುನ್ಸೂಚನೆ ನೀಡಿದರಾದರೂ ಈ ಇಬ್ಬರನ್ನು ಜಡೇಜಾ ಪೆವಿಲಿಯನ್’ಗಟ್ಟುವಲ್ಲಿ ಯಶಸ್ವಿಯಾದರು. ಕೆಳಕ್ರಮಾಂಕದಲ್ಲಿ ಮೆಹದಿ ಹಸನ್[42] ಹಾಗೂ ನಾಯಕ ಮಶ್ರಫೆ ಮೊರ್ತಾಜಾ[26] ಉಪಯುಕ್ತ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.
ಮಿಂಚಿದ ಜಡ್ಡು-ಭುವಿ-ಬುಮ್ರಾ: ಹಾರ್ದಿಕ್ ಪಾಂಡ್ಯ ಬದಲು ತಂಡದಲ್ಲಿ ಸ್ಥಾನ ಪಡೆದ ಜಡೇಜಾ ಸಿಕ್ಕ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಲ್ಲಿ ಸಫಲರಾದರು. ಬಾಂಗ್ಲಾದೇಶದ ಅಗ್ರಕ್ರಮಾಂಕದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದ ಜಡ್ಡು ಕೇವಲ 29 ರನ್ ನೀಡಿ 4 ವಿಕೆಟ್ ಕಬಳಿಸಿದರು. ಇನ್ನು ವೇಗಿಗಳಾದ ಭುವನೇಶ್ವರ್ ಕುಮಾರ್ ಹಾಗೂ ಜಸ್ಪ್ರೀತ್ ಬುಮ್ರಾ ತಲಾ ಮೂರು ವಿಕೆಟ್ ಪಡೆಯುವ ಮೂಲಕ ಬಾಂಗ್ಲಾ ರನ್ ವೇಗಕ್ಕೆ ಕಡಿವಾಣ ಹಾಕಿದರು.
ಸಂಕ್ಷಿಪ್ತ ಸ್ಕೋರ್:
ಬಾಂಗ್ಲಾದೇಶ: 173/10
ಮೆಹದಿ ಹಸನ್: 42
ಜಡೇಜಾ: 29/4
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.