
ದುಬೈ[ಸೆ.21]: ಬ್ಯಾಟಿಂಗ್ ಹಾಗೂ ಬೌಲಿಂಗ್’ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಟೀಂ ಇಂಡಿಯಾ ಏಷ್ಯಾಕಪ್’ನ ಸೂಪರ್ 4 ಹಂತದ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 7 ವಿಕೆಟ್’ಗಳ ಭರ್ಜರಿ ಜಯ ದಾಖಲಿಸಿದೆ.
ದುಬೈನ ಅಂತರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಕೇವಲ 173 ರನ್’ಗಳಿಗೆ ನಿಯಂತ್ರಿಸಿದ್ದ ಭಾರತ, ನಾಯಕ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಹಾಗೂ ಧೋನಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಸುಲಭವಾಗಿ ಗೆಲುವಿನ ದಡ ಸೇರಿತು. ಸುಲಭ ಗುರಿ ಬೆನ್ನತ್ತಿದ ಟೀಂ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಉತ್ತಮ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್’ಗೆ ಈ ಜೋಡಿ 61 ರನ್’ಗಳ ಜತೆಯಾಟವಾಡಿತು. ಧವನ್ 40 ರನ್ ಬಾರಿಸಿ ಶಕೀಬ್’ಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಅಂಬಟಿ ರಾಯುಡು ಜತೆ ಇನ್ನಿಂಗ್ಸ್ ಮುಂದುವರೆಸಿದ ನಾಯಕ ರೋಹಿತ್ ಆಕರ್ಷಕ ಬ್ಯಾಟಿಂಗ್ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದರು. ಸಿಕ್ಸರ್ ಮೂಲಕವೇ ಅರ್ಧಶತಕ ಪೂರೈಸಿದ ರೋಹಿತ್ ಶರ್ಮಾ 104 ಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್’ಗಳ ನೆರವಿನಿಂದ 83 ಬಾರಿಸಿ ಅಜೇಯರಾಗುಳಿದರು. ಅಂಬಟಿ ರಾಯುಡು[13] ಬಳಿಕ ಕ್ರೀಸ್’ಗಿಳಿದ ಎಂ.ಎಸ್ ಧೋನಿ 3 ಬೌಂಡರಿಗಳ ನೆರವಿನಿಂದ 33 ಬಾರಿಸಿ ವಿನ್ನಿಂಗ್ ಶಾಟ್ ಬಾರಿಸುವ ಯತ್ನದಲ್ಲಿ ವಿಕೆಟ್ ಒಪ್ಪಿಸಿದರು.
ಇದಕ್ಕೂ ಮೊದಲು ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಬಾಂಗ್ಲಾದೇಶಕ್ಕೆ ಭುವಿ ಹಾಗೂ ಬುಮ್ರಾ ಆರಂಭದಲ್ಲೇ ಆಘಾತ ನೀಡಿದರು. ಆ ಬಳಿಕ ರವೀಂದ್ರ ಜಡೇಜಾ ಸ್ಪಿನ್ ದಾಳಿಗೆ ತತ್ತರಿಸಿದ ಬಾಂಗ್ಲಾದೇಶ ಅಲ್ಪ ಮೊತ್ತಕ್ಕೆ ಸರ್ವಪತನ ಕಂಡಿತು.
ಸಂಕ್ಷಿಪ್ತ ಸ್ಕೋರ್:
ಬಾಂಗ್ಲಾದೇಶ: 173/10
ಮೆಹದಿ ಹಸನ್: 42
ಜಡೇಜಾ: 29/4
ಭಾರತ: 174/3
ರೋಹಿತ್ ಶರ್ಮಾ: 83*
ಹುಸೇನ್: 21/1
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.