
ಬೆಂಗಳೂರು (ಡಿ.16): ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅಭಿಮಾನಿಗಳಿಗೆ ಶುಭ ಸುದ್ದಿಯೊಂದು ಹೊರಬಿದ್ದಿದೆ. ಈ ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸುವ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಗಂಭೀರ ಪ್ರಯತ್ನ ನಡೆಸುತ್ತಿದೆ.
ಈ ಸಂಬಂಧ ಮೈಸೂರಿನಲ್ಲಿ ಮಾತನಾಡಿದ ಕೆಎಸ್‌ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರು, ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯವನ್ನು ಆಯೋಜಿಸುವಂತೆ ಈಗಾಗಲೇ ಬಿಸಿಸಿಐ (BCCI) ಜೊತೆ ಮಾತುಕತೆ ನಡೆಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಬಿಸಿಸಿಐ ಸಹ ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ನಡೆಸಲು ಸಿದ್ಧತೆ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸಾಮಾನ್ಯವಾಗಿ ಪ್ರತಿ ವರ್ಷ ಐಪಿಎಲ್ ಟ್ರೋಫಿ ಗೆದ್ದ ತಂಡದ ತವರು ಮೈದಾನದಲ್ಲೇ ಉದ್ಘಾಟನಾ ಪಂದ್ಯ ನಡೆಯುತ್ತಿತ್ತು. ಆದರೆ, ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ನಡೆದ ಘಟನೆಯಿಂದಾಗಿ ಸಾಕಷ್ಟು ಗೊಂದಲಗಳು ಉಂಟಾಗಿದ್ದವು. ಹೀಗಾಗಿ, ಹೊಸದಾಗಿ ಆಯ್ಕೆಯಾಗಿರುವ ನಮ್ಮ ಕೆಎಸ್‌ಸಿಎ ತಂಡವು ರಾಜ್ಯ ಸರ್ಕಾರದ ಜೊತೆ ಮಾತುಕತೆ ನಡೆಸಿದೆ. ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಈಗಾಗಲೇ ಪಂದ್ಯಾವಳಿ ನಡೆಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಗೃಹ ಸಚಿವರ ಜೊತೆ ಕೂಡ ಫೋನ್ ಮೂಲಕ ಮಾತನಾಡಿದ್ದೇನೆ ಎಂದು ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ.
ಐಪಿಎಲ್, ಅಂತರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು. ಶೀಘ್ರದಲ್ಲೇ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯದ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಈ ಬೆಳವಣಿಗೆಯು ಆರ್‌ಸಿಬಿ ಮತ್ತು ಕ್ರಿಕೆಟ್ ಪ್ರೇಮಿಗಳಲ್ಲಿ ಉತ್ಸಾಹ ಹೆಚ್ಚಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.