
ನವದೆಹಲಿ: ಬೇಸಿಗೆ ಪ್ರವಾಸಕ್ಕೆಂದು ಕಣಿವೆ ರಾಜ್ಯ ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ಮಂಗಳವಾರ ಭೀಕರ ನರಮೇಧ ನಡೆಸಿದ್ದಾರೆ. ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಹಲ್ಲುಗಾವಲು ಪ್ರದೇಶದಲ್ಲಿ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುತ್ತಿದ್ದ ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 28 ಜನರು ಸಾವನ್ನಪ್ಪಿದ್ದಾರೆ.
ಮೃತ ಕನ್ನಡಿಗರನ್ನು ಶಿವಮೊಗ್ಗದ ಉದ್ಯಮಿ ಮಂಜುನಾಥ್ ರಾವ್ ಮತ್ತು ಬೆಂಗಳೂರಿನ ಭರತ್ ಭೂಷಣ್ ಎಂದು ಗುರುತಿಸಲಾಗಿದೆ. ಮೃತರಲ್ಲಿ ಇಬ್ಬರು ವಿದೇಶಿಯರು ಕೂಡಾ ಇದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿಯಾದಿ ಗಣ್ಯರು ಕಟುನುಡಿಗಳಲ್ಲಿ ಖಂಡಿಸಿದ್ದಾರೆ.
ಇನ್ನು ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಭಾರತದ ಕ್ರೀಡಾಪಟುಗಳು ಖಂಡಿಸಿದ್ದು, ಪಾಕಿಸ್ತಾನದೊಂದಿಗಿನ ಎಲ್ಲಾ ಕ್ರೀಡಾ ಸಂಬಂಧ ಕಡಿತಗೊಳಿಸಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ದುರಂತಕ್ಕೆ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಜಸ್‌ಪ್ರೀತ್ ಬೂಮ್ರಾ, ಸೂರ್ಯಕುಮಾರ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ‘ಧರ್ಮದ ಹೆಸರಿನಲ್ಲಿ ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಂಡು ಕೊಲ್ಲುವುದು ದುಷ್ಟತನ. ಭಯೋತ್ಪಾದಕರಿಗೆ ಶಿಕ್ಷೆಯಾಗಲಿ’ ಎಂದು ಸಿರಾಜ್ ಪೋಸ್ಟ್ ಮಾಡಿದ್ದಾರೆ.
ಟೀಂ ಇಂಡಿಯಾದ ಕೋಚ್, ಬಿಜೆಪಿ ಸಂಸದ ಗೌತಮ್ ಗಂಭೀರ್, ‘ ದಾಳಿಗೆ ಕಾರಣರಾದವರು ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಾರೆ. ಈ ನಡುವೆ ಮಾಜಿ ಕ್ರಿಕೆಟಿಗ ಶ್ರೀವತ್ಸ್ ಗೋಸ್ವಾಮಿ ಪಾಕಿಸ್ತಾನದೊಂದಿಗಿನ ಎಲ್ಲಾ ಕ್ರೀಡಾ ಸಂಬಂಧವನ್ನು ಭಾರತ ಕೊನೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ, ಒಲಿಂಪಿಯನ್ ಬಾಕ್ಸರ್ ವಿಜೇಂದರ್ ಸಿಂಗ್, ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ಅಭಿನವ್ ಬಿಂದ್ರಾ, ಹಾಕಿ ಪಟು ಪಿ.ಆರ್.ಶ್ರೀಜೇಶ್, ಸೈನಾ ನೆಹ್ವಾಲ್, ಮಾಜಿ ಕ್ರಿಕೆಟಿಗ ಸುರೇಶ್ ರೈನಾ, ಮಾಜಿ ಕೋಚ್ ರವಿ ಶಾಸ್ತ್ರಿ ಸೇರಿದಂತೆ ಹಲವು ಘಟನೆಯನ್ನು ಖಂಡಿಸಿದ್ದಾರೆ.
ಐಪಿಎಲ್‌ನಲ್ಲಿ ಮೌನಾಚರಣೆ:
ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿ ಘಟನೆಯನ್ನು ಕ್ರಿಕೆಟಿಗರು ಖಂಡಿಸಿದ್ದು, ಮೃತ ವ್ಯಕ್ತಿಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೋರಿ, ಬುಧವಾರ ಸನ್‌ರೈಸರ್ಸ್ ಹಾಗೂ ಮುಂಬೈ ನಡುವಿನ ಪಂದ್ಯದಲ್ಲಿ ಆಟಗಾರರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಆಡಿದರು. ಪಂದ್ಯಕ್ಕೂ ಮುನ್ನ ಆಟಗಾರರು ಮೌನಾಚರಣೆ ಮಾಡಿದರು. ಅಲ್ಲದೇ, ಪಂದ್ಯದಲ್ಲಿ ಚಿಯರ್ ಲೀಡರ್‌ಗಳಾಗಲಿ ಪಟಾಕಿಗಳಾಗಲಿ ಇರಲಿಲ್ಲ.
ಈ ದಾಳಿಯನ್ನು ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕದ, ಪುಲ್ವಾಮಾದಲ್ಲಿ ಯೋಧರ ಗುರಿಯಾಗಿಸಿ ನಡೆಸಿದ ಬಳಿಕ ಅತಿದೊಡ್ಡ ದಾಳಿಯಾಗಿದೆ. ಜೊತೆಗೆ ಕಾಶ್ಮಿರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಕಳೆದ 25 ವರ್ಷಗಳಲ್ಲೇ ನಡೆಸಿದ ಅತಿದೊಡ್ಡ ದಾಳಿ ಎಂದು ಬಣ್ಣಿಸಲಾಗಿದೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.