
ಲಂಡನ್(ಜೂ.08): ಟೀಂ ಇಂಡಿಯಾದ ಮುಖ್ಯ ಕೋಚ್ ಯಾರಾಗಬೇಕು ಎನ್ನುವ ಚರ್ಚೆ ಕಾವೇರುತ್ತಿರುವುದರ ಬೆನ್ನಲ್ಲೇ ಇದೀಗ ಅದಕ್ಕೆ ಮತ್ತಷ್ಟು ಟ್ವಿಸ್ಟ್ ಸಿಕ್ಕಂತಾಗಿದೆ.
ಹೌದು ಚಾಂಪಿಯನ್ಸ್ ಟ್ರೋಫಿ ಬಳಿಕ ಭಾರತ ತಂಡದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಅವಧಿ ಮುಕ್ತಾಯವಾಗಲಿದ್ದು, ಆ ಹುದ್ದೆಗೆ ಮಾಜಿ ಕ್ರಿಕೆಟಿಗ ರವಿ ಶಾಸ್ತ್ರಿ ಅವರನ್ನು ನೇಮಿಸಬೇಕು ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ಸಲಹಾ ಸಮಿತಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಚಾಂಪಿಯನ್ಸ್ ಟ್ರೋಫಿಗೂ ತೆರಳುವ ಮುನ್ನ ಕ್ರಿಕೆಟ್ ಸಲಹಾ ಸಮಿತಿಗೆ ಕೋಚ್ ಹುದ್ದೆಗೆ ರವಿಶಾಸ್ತ್ರಿ ಸೂಕ್ತವೆಂದು ತಿಳಿಸಿದ್ದಾರೆನ್ನಲಾಗಿದೆ.
ಅನಿಲ್ ಕುಂಬ್ಳೆ ಹಾಗೂ ಆಟಗಾರರ ನಡುವೆ ಮನಸ್ತಾಪ ಉಂಟಾಗಿದೆ ಎಂಬ ಮಾತುಗಳು ಕೇಳಿಬರುತ್ತಿರುವುದರ ಬೆನ್ನಲ್ಲೇ ಈ ವಿಚಾರ ಬೆಳಕಿಗೆ ಬಂದಿರುವುದು ಉರಿವ ಬೆಂಕಿಗೆ ತುಪ್ಪ ಸುರಿದಂತಾಗಿದೆ.
ಈ ಮೊದಲು ರವಿಶಾಸ್ತ್ರಿ ಭಾರತ ತಂಡದ ನಿರ್ದೇಶಕರಾಗಿ ತಂಡವನ್ನು ಯಶಸ್ವಿಯಾಗಿ ಮುನ್ನೆಡೆಸಿದ್ದರು. ಆದರೆ ರವಿಶಾಸ್ತ್ರಿ ಕೋಚ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸದೇ ಇರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ.31 ಕಡೆಯ ದಿನವಾಗಿತ್ತು. ವಿರೇಂದ್ರ ಸೆಹ್ವಾಗ್, ಟಾಮ್ ಮೂಡಿ, ಅನಿಲ್ ಕುಂಬ್ಳೆ, ದೊಡ್ಡ ಗಣೇಶ್ ಸೇರಿದಂತೆ ಒಟ್ಟು ಆರು ಮಂದಿ ಟೀಂ ಇಂಡಿಯಾ ಕೋಚ್ ಆಗಲು ಅರ್ಜಿ ಸಲ್ಲಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಬಳಿಕ ಭಾರತ ತಂಡದ ಕೋಚ್ ಯಾರಾಗಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆಬೀಳಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.