
ದುಬೈ(ಡಿ.26): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ಅವರಿಗೆ ಕಹಿ ಸುದ್ದಿಯೊಂದು ಎದುರಾಗಿದೆ.
ಹೌದು, ವೈಯಕ್ತಿಕ ಕಾರಣಗಳಿಂದಾಗಿ ಶ್ರೀಲಂಕಾ ವಿರುದ್ಧದ ಸೀಮಿತ ಓವರ್'ಗಳ ಸರಣಿಯಿಂದ ಹಿಂದೆ ಸರಿದಿದ್ದ ಭಾರತ ಕ್ರಿಕೆಟ್ ತಂಡದ ಖಾಯಂ ನಾಯಕ ವಿರಾಟ್ ಕೊಹ್ಲಿ, ಐಸಿಸಿ ಟಿ20 ಶ್ರೇಯಾಂಕ ಬ್ಯಾಟ್ಸ್'ಮನ್'ಗಳ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಟಿ20 ಬ್ಯಾಟ್ಸ್'ಮನ್'ಗಳ ಪಟ್ಟಿಯಲ್ಲಿ 824 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದ ಕೊಹ್ಲಿ, 776 ಅಂಕಗಳಿಂದ 3ನೇ ಸ್ಥಾನ ಪಡೆದಿದ್ದಾರೆ. ಕೊಹ್ಲಿ ಈ ಸರಣಿಯಿಂದ ಹಿಂದೆ ಸರಿದಿದ್ದರಿಂದ ಟಿ20 ಬ್ಯಾಟ್ಸ್'ಮನ್'ಗಳ ಶ್ರೇಯಾಂಕ ಪಟ್ಟಿಯಲ್ಲಿ 48 ಅಂಕಗಳನ್ನು ಕಳೆದುಕೊಂಡಿದ್ದಾರೆ. ಸದ್ಯ ಆಸ್ಟ್ರೇಲಿಯದ ಆ್ಯರೋನ್ ಫಿಂಚ್ (784) ಮೊದಲ ಸ್ಥಾನದಲ್ಲಿದ್ದರೆ, ವೆಸ್ಟ್ ಇಂಡೀಸ್'ನ ಆರಂಭಿಕ ಎವೀನ್ ಲೆವೀಸ್ (780) 2ನೇ ಸ್ಥಾನ ಪಡೆದಿದ್ದಾರೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಮಿಂಚಿದ್ದ ಕರ್ನಾಟಕದ ರಾಹುಲ್ 4ನೇ ಸ್ಥಾನ ಪಡೆದಿದ್ದಾರೆ.
ಲಂಕಾ ವಿರುದ್ಧದ ಕೊನೆಯ ಟಿ20 ಪಂದ್ಯದಿಂದ ಹೊರಗುಳಿದಿದ್ದ ಯುವ ವೇಗಿ ಜಸ್'ಪ್ರೀತ್ ಬುಮ್ರಾ ಕೂಡ 3ನೇ ಸ್ಥಾನಕ್ಕೆ ಕುಸಿದಿದ್ದಾರೆ. ಬೌಲರ್'ಗಳ ಪಟ್ಟಿಯಲ್ಲಿ ಪಾಕಿಸ್ತಾನದ ಸ್ಪಿನ್ನರ್ ಇಮಾದ್ ವಾಸೀಂ ಮೊದಲ ಸ್ಥಾನದಲ್ಲಿದ್ದರೆ, ಆಫ್ಘಾನಿಸ್ತಾನದ ಬೌಲರ್ ರಶೀದ್ ಖಾನ್ 2ನೇ ಸ್ಥಾನ ಪಡೆದಿದ್ದಾರೆ. ಲಂಕಾ ವಿರುದ್ಧದ ಟಿ20 ಸರಣಿಯಲ್ಲಿ 8 ವಿಕೆಟ್ ಪಡೆದಿದ್ದ ಯಜುವೇಂದ್ರ ಚಹಲ್ 14 ಸ್ಥಾನ ಮೇಲಕ್ಕೆ ಜಿಗಿದಿದ್ದು 16ನೇ ಸ್ಥಾನ ಪಡೆದಿದ್ದಾರೆ. ಇನ್ನು ಹಾರ್ದಿಕ್ ಪಾಂಡ್ಯ 39ನೇ ಸ್ಥಾನದಲ್ಲಿದ್ದರೆ, ಕುಲ್ದೀಪ್ ಯಾದವ್ 64ನೇ ಸ್ಥಾನದಲ್ಲಿದ್ದಾರೆ.
ಇನ್ನು ತಂಡಗಳ ವಿಭಾಗದಲ್ಲಿ ಶ್ರೀಲಂಕಾ ವಿರುದ್ಧ 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ 121 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟರೆ, 124 ಅಂಕಗಳೊಂದಿಗೆ ಪಾಕಿಸ್ತಾನ ಮೊದಲ ಸ್ಥಾನದಲ್ಲಿ ಭದ್ರವಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.