ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿದ್ದ ಸರ್ಕಾರ
ಬೆಂಗಳೂರು(ಜು.19): ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿಗೆ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿದ ಆದೇಶ ರದ್ದುಪಡಿಸುವಂತೆ ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಮಂಗಳವಾರ ವಜಾಗೊಳಿಸಿದೆ.
ಈ ಕುರಿತು ಎಲ್.ಎನ್. ಪವಿತ್ರಾ ಸೇರಿ 28 ಅಭ್ಯರ್ಥಿಗಳು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಕೆಎಟಿ ನ್ಯಾಯಾಂಗ ಸದಸ್ಯ ಟಿ.ನಾರಾಯಣ ಸ್ವಾಮಿ ಅವರ ನೇತೃತ್ವದ ಪೀಠ ಈ ಆದೇಶ ಮಾಡಿದೆ. ಪಿಐಎಸ್ ನೇಮಕಾತಿ ಅಕ್ರಮ ದೊಡ್ಡ ಮಟ್ಟದ ಹಗರಣವಾಗಿದೆ. ನೇಮಕಾತಿ ಪ್ರಾಧಿಕಾರವೇ ಅಕ್ರಮ ನಡೆಸಿದೆ ಎಂಬ ಆರೋಪವಿದೆ. ಇದರಿಂದ ಕಳಂಕಿತ ಹಾಗೂ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಪ್ರಕರಣದಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹಾಗಾಗಿ, ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸುವ ತೀರ್ಮಾನ ನ್ಯಾಯಸಮ್ಮತವಾಗಿದೆ ಎಂಬ ಸರ್ಕಾರದ ವಾದವನ್ನು ಕೆಎಟಿ ಪುರಸ್ಕರಿಸಿದೆ.
PSI Scam: ಯಾವ ಹೋರಾಟ ನಡೆಸಿ ಹಾಗರಗಿ ಜೈಲಲ್ಲಿ ಇದ್ದಾರೆ?: ಹೈಕೋರ್ಟ್
ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿದ್ದ ಸರ್ಕಾರ, ಮರು ಪರೀಕ್ಷೆ ನಡೆಸಲು 2022ರ ಏ.29ರಂದು ಆದೇಶಿಸಿತ್ತು. ಅದನ್ನು ರದ್ದುಪಡಿಸುವಂತೆ ಕೋರಿದ್ದ ಅರ್ಜಿದಾರರು, ಕಳಂಕರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದರು.