ಬಿಬಿಎಂಪಿಯ 243 ವಾರ್ಡ್‌ಗಳಲ್ಲಿ ‘ನಮ್ಮ ಕ್ಲಿನಿಕ್’ ಆರಂಭಿಸಲು ಅಗತ್ಯವಿರುವ ವೈದ್ಯಕೀಯ ಅಧಿಕಾರಿ, ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಜು.25ರಂದು ನೇರ ನೇಮಕಾತಿ ನಡೆಸುತ್ತಿದೆ.
ಬೆಂಗಳೂರು (ಜು.23): ಬಿಬಿಎಂಪಿಯ 243 ವಾರ್ಡ್‌ಗಳಲ್ಲಿ ‘ನಮ್ಮ ಕ್ಲಿನಿಕ್’ ಆರಂಭಿಸಲು ಅಗತ್ಯವಿರುವ ವೈದ್ಯಕೀಯ ಅಧಿಕಾರಿ, ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಜು.25ರಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ನಗರದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ 2022-23ನೇ ಸಾಲಿನ ಆಯವ್ಯಯಲ್ಲಿ ಬಿಬಿಎಂಪಿಯ ಎಲ್ಲ ವಾರ್ಡ್‌ಗಳಲ್ಲಿ ‘ನಮ್ಮ ಕ್ಲಿನಿಕ್’ ಆರಂಭಿಸುವುದಾಗಿ ಘೋಷಣೆ ಮಾಡಿತ್ತು. ವಾರ್ಡ್ ಮಟ್ಟದಲ್ಲಿ ವೆಲ್‌ನೆಸ್ ಕೇಂದ್ರ ಮಾದರಿಯಲ್ಲಿ ಈ ಕ್ಲಿನಿಕ್ ಆರಂಭಿಸಲಾಗುತ್ತಿದೆ. ಪ್ರತಿ ಕ್ಲಿನಿಕ್‌ನಲ್ಲೂ ವೈದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗಶಾಲಾ ತಜ್ಞ, ನಾಲ್ಕನೇ ದರ್ಜೆ ಸಹಾಯಕ ಸೇರಿ 8 ಹುದ್ದೆಗಳಿಗೆ ಮೆರಿಟ್ ಕಂ ರೋಸ್ಟರ್ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಯು 1 ವರ್ಷ ಅವಧಿಯದ್ದಾಗಿದೆ. ಆಸಕ್ತರು ಜು.25ರಂದು ಬಿಬಿಎಂಪಿ ಕೇಂದ್ರ ಕಚೇರಿಯ ನೌಕರರ ಭವನದಲ್ಲಿ ನಡೆಯಲಿರುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 080 22975561ಗೆ ಕರೆ ಮಾಡಬಹುದು ಅಥವಾ ಬಿಬಿಎಂಪಿ ವೆಬ್‌ಸೈಟ್ https://bbmp.gov.in/home ಗೆ ಭೇಟಿ ನೀಡಬಹುದಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಬಡ ವರ್ಗದವರಿಗೆ ಅನುಕೂಲವಾಗಲೆಂದು ದೆಹಲಿ ಸರ್ಕಾರ ಸ್ಥಾಪಿಸಿರುವ ‘ಮೊಹಲ್ಲಾ ಕ್ಲಿನಿಕ್’ ಮಾದರಿಯಲ್ಲಿಯೇ ರಾಜ್ಯದಲ್ಲಿಯೇ ‘ನಮ್ಮ ಕ್ಲಿನಿಕ್’ ಸ್ಥಾಪಿಸಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ರಾಜ್ಯದಲ್ಲಿ 438 ‘ನಮ್ಮ ಕ್ಲಿನಿಕ್’ ಸ್ಥಾಪಿಸಲಾಗುತ್ತಿದೆ. ಎಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇಲ್ಲವೋ ಅಲ್ಲಿ ಇವು ಕಾರ್ಯನಿರ್ವಹಿಸಲಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇವುಗಳ ಮೇಲುಸ್ತುವಾರಿ ವಹಿಸಲಿವೆ. 15ನೇ ಹಣಕಾಸು ಆಯೋಗದ ಅನುದಾನದಡಿಯಲ್ಲಿ 155.77 ಕೋಟಿ ರು. ವೆಚ್ಚದಲ್ಲಿ ನಮ್ಮ ಕ್ಲಿನಿಕ್ ಸ್ಥಾಪಿಸಲು ಸರಕಾರ ಮುಂದಾಗಿದೆ. ಕ್ಲಿನಿಕ್‌ಗಳಿಗೆ ಒಬ್ಬ ವೈದ್ಯಾಧಿಕಾರಿ, ಶುಶ್ರೂಷಕರು ಮತ್ತು ದ್ವಿತೀಯ ದರ್ಜೆ ಸಹಾಯಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಏನಿದು ನಮ್ಮ ಕ್ಲಿನಿಕ್?
ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹೊರತಾಗಿ ನಗರ, ಪಟ್ಟಣಗಳ ವಾರ್ಡ್ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುವ ಕೇಂದ್ರ
ಯಾಕೆ ಈ ಕ್ಲಿನಿಕ್?
ಸರ್ಕಾರಿ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆ ಮಾಡಲು. ಹಾಗೂ, ಜನರಿಗೆ ಸ್ಥಳೀಯವಾಗಿಯೇ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ
ಎಲ್ಲೆಲ್ಲಿ ಆರಂಭ?
ಬೆಂಗಳೂರು ಮಹಾನಗರದ ಎಲ್ಲ ವಾರ್ಡ್‌ಗಳು ಸೇರಿದಂತೆ ರಾಜ್ಯದ ವಿವಿಧೆಡೆ 155.77 ಕೋಟಿ ರು. ವೆಚ್ಚದಲ್ಲಿ 438 ನಮ್ಮ ಕ್ಲಿನಿಕ್ ಆರಂಭ
ಯಾರ್ಯಾರು ಇರ್ತಾರೆ?
ಪ್ರತಿ ಕ್ಲಿನಿಕ್‌ನಲ್ಲಿ ಒಬ್ಬ ವೈದ್ಯಾಧಿಕಾರಿ, ಶುಶ್ರೂಷಕ ಮತ್ತು ದ್ವಿತೀಯ ದರ್ಜೆ ಸಹಾಯಕರು ಲಭ್ಯ. ಇವರೆಲ್ಲ ಗುತ್ತಿಗೆ ಆಧಾರದ ಮೇಲೆ ನೇಮಕ.