ಕಾಲೇಜುಗಳಲ್ಲಿ ಹೆಚ್ಚುವರಿ ಕಾರ್ಯಭಾರಕ್ಕೆ ಅನುಗುಣವಾಗಿ ಆಯಾ ಶೈಕ್ಷಣಿಕ ವರ್ಷಕ್ಕೆ ಸೀಮಿತವಾಗಿ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆದ್ದರಿಂದ ತಾತ್ಕಾಲಿಕ ವ್ಯವಸ್ಥೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಎದುರಿಗೆ ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶ ಇರುವುದಿಲ್ಲ: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್
ವಿಧಾನ ಪರಿಷತ್ತು(ಫೆ.14): ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಅತಿಥಿ ಉಪನ್ಯಾಸಕರನ್ನು ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸ್ಪಷ್ಟಪಡಿಸಿದರು.
ಬಿಜೆಪಿ ಸದಸ್ಯ ಅ.ದೇವೇಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಲೇಜುಗಳಲ್ಲಿ ಹೆಚ್ಚುವರಿ ಕಾರ್ಯಭಾರಕ್ಕೆ ಅನುಗುಣವಾಗಿ ಆಯಾ ಶೈಕ್ಷಣಿಕ ವರ್ಷಕ್ಕೆ ಸೀಮಿತವಾಗಿ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆದ್ದರಿಂದ ತಾತ್ಕಾಲಿಕ ವ್ಯವಸ್ಥೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಎದುರಿಗೆ ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳು ಸೇವಾ ಸಕ್ರಮಾತಿ, ಗೌರವಧನ ಹೆಚ್ಚಳ ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಹಲವು ಬಾರಿ ಮುಷ್ಕರ ನಡೆಸಿದ್ದರು.
undefined
ಅತಿಥಿ ಉಪನ್ಯಾಸಕರಿಗೆ ಬಂಪರ್ ಗಿಫ್ಟ್ ಕೊಟ್ಟ ಸರ್ಕಾರ: ನೇಮಕಾತಿಯಲ್ಲಿ ಶೇ.5 ಕೃಪಾಂಕ ನೀಡಲು ತೀರ್ಮಾನ
ಈ ಹಿನ್ನೆಲೆಯಲ್ಲಿ ಅವರ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದ್ದು ಸದರಿ ಸಮಿತಿ ವಿಸ್ತೃತ ವರದಿ ಸಲ್ಲಿಸಿದೆ. ಸದರಿ ವರದಿಯನ್ನು ಪರಿಶೀಲಿಸಿ ಸರ್ಕಾರ ಅತಿಥಿ ಉಪನ್ಯಾಸಕರುಗಳಿಗೆ ಗರಿಷ್ಠ 8 ರಿಂದ 10 ಗಂಟೆಗಳ ಬದಲಾಗಿ ಗರಿಷ್ಠ 15ರಿಂದ 19 ಗಂಟೆಗಳ ಕಾರ್ಯಭಾರವನ್ನು ನೀಡಿ ಗೌರವ ಧನವನ್ನು ಕೂಡ ಹೆಚ್ಚಿಸಿತ್ತು ಎಂದರು.
ಬೆಳಗಾವಿಯಲ್ಲಿ ನಡೆದ ಅತಿಥಿ ಉಪನ್ಯಾಸಕರ ಮುಷ್ಕರದ ಹಿನ್ನೆಲೆಯಲ್ಲಿ ಈಗಿನ ಸರ್ಕಾರ ಅವರ ಬಹುತೇಕ ಬೇಡಿಕೆಗಳನ್ನು ಈಡೇರಿಸಿದೆ. ವೇತನವನ್ನು 5 ಸಾವಿರ ರು.ಗಳಷ್ಟು ಹೆಚ್ಚಳ ಮಾಡಲಾಗಿದೆ. 5 ಲಕ್ಷ ರು.ಮೌಲ್ಯದ ಆರೋಗ್ಯ ವಿಮೆ, ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡಲಾಗುವುದು. ಅತಿಥಿ ಉಪನ್ಯಾಸಕರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ಕಾರ್ಯಭಾರದ ಬಗ್ಗೆಯೂ ಸೂಚನೆ ನೀಡಲಾಗಿದೆ. 60 ವರ್ಷ ಪೂರೈಸಿದ ಅತಿಥಿ ಉಪನ್ಯಾಸಕರು ಕೆಲಸ ಬಿಡುವಾಗ 5 ಲಕ್ಷ ರು.ಇಡುಗಂಟು ನೀಡಲು ತೀರ್ಮಾನ ಮಾಡಲಾಗಿದೆ. ಸಹಾಯಕ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸುವುದಾಗಿ ಮತ್ತು ಸಂದರ್ಭದಲ್ಲಿ ಇವರಿಗೆ ಕೃಪಾಂಕ ನೀಡುವ ಬಗ್ಗೆ ನಿರ್ಧಾರ ಮಾಡಲಾಗಿದೆ. ಆದರೆ, ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಎದುರಿಗೆ ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶ ಇರುವುದಿಲ್ಲ ಎಂದು ಹೇಳಿದರು.