ದೈಹಿಕ ಶಿಕ್ಷಕರಿಗೆ ಗುಡ್ ನ್ಯೂಸ್: ಬಹುದಿನಗಳ ಬೇಡಿಕೆ ಈಡೇರಿಕೆ

By Suvarna NewsFirst Published Jun 18, 2021, 3:05 PM IST
Highlights

* ರಾಜ್ಯದ 'ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಕರಿಗೆ ಗುಡ್ ನ್ಯೂಸ್
* ಬಹುದಿನಗಳ ದೈಹಿಕ ಶಿಕ್ಷಕರ ಬಡ್ತಿ ಬೇಡಿಕೆಗೆ ಅಸ್ತು
* ರಾಜ್ಯ ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಬಹುದಿನಗಳ ಬೇಡಿಕೆ ಈಡೇರಿಕೆ

ಬೆಂಗಳೂರು, (ಜೂನ್.18): ಸರ್ಕಾರಿ ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಬಹುಕಾಲದ ಬೇಡಿಕೆಯಾಗಿದ್ದ ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹುದ್ದೆಯಿಂದ ಗ್ರೂಪ್-ಬಿ ವೃಂದದ ದೈಹಿಕ ಶಿಕ್ಷಣ ಪರಿವೀಕ್ಷಕರ 148 ಹುದ್ದೆಗಳಿಗೆ ಮುಂಬಡ್ತಿಯನ್ನು ನೀಡಿ ಆದೇಶ ಹೊರಡಿಸುವ ಮೂಲಕ ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶಾಲೆಗಳ ಪ್ರವೇಶ ಪ್ರಕ್ರಿಯೆ ಆರಂಭ

2016ರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪದೋನ್ನತಿ ಪ್ರಕ್ರಿಯೆ ನಡೆದಿದ್ದು, 5 ವರ್ಷಗಳ ಕಾಲ ಪ್ರೌಢ ಶಾಲಾ ದೈಹಿಕ ಶಿಕ್ಷಕರಿಗೆ ಯಾವುದೇ ಪದೋನ್ನತಿ ನೀಡಿರಲಿಲ್ಲ. ನೆನೆಗುದಿಗೆ ಬಿದ್ದಿದ್ದ ಬಡ್ತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಆಡಳಿತಾತ್ಮಕ ಸಮಸ್ಯೆ ಬಗೆಹರಿಸಲಾಗಿದೆ ಎಂದಿದ್ದಾರೆ.

ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಜೂನ್ 21ರಂದು ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗುತ್ತಿದ್ದು, ಕೋವಿಡ್ ನಿಯಮಗಳನ್ನು ಪಾಲಿಸಿ ದೈಹಿಕ ಶಿಕ್ಷಕರು ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿ ತಮ್ಮ ಇಚ್ಛಾನುಸಾರ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿ ನೀಡಬೇಕೆಂಬುದು ಕರ್ನಾಟಕ ರಾಜ್ಯ ಸರ್ಕಾರಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಬೇಡಿಕೆಯಾಗಿತ್ತು. ಈಗ ಆ ಪ್ರಕ್ರಿಯೆ ಮುಗಿದಿದ್ದು, ಮುಂಬಡ್ತಿ ಹೊಂದಲಿರುವ ದೈಹಿಕ ಶಿಕ್ಷಣ ಪರಿವೀಕ್ಷಕರು ಇಲಾಖೆಯಲ್ಲಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಗುಣಮಟ್ಟದ ಶಿಕ್ಷಣದಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಬೇಕೆಂದು ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ.

click me!