ಶೀಘ್ರದಲ್ಲೇ ಪಶುವೈದ್ಯಕೀಯ ವಿವಿಯ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕ: ಸಚಿವ ಚವ್ಹಾಣ್‌

By Kannadaprabha News  |  First Published Sep 17, 2022, 11:08 AM IST

ಪಶು ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳಿಂದ ಖಾಲಿ ಇದ್ದ 36 ಬ್ಯಾಗ್‌ಲಾಕ್‌ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ ಸಚಿವ ಪ್ರಭು ಬಿ.ಚವ್ಹಾಣ್‌ 


ಬೆಳಗಾವಿ(ಸೆ.17):  ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 217 ಬೋಧಕ ಮತ್ತು 220 ಬೋಧಕೇತರ ಸಿಬ್ಬಂದಿಗಳ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್‌ ಸ್ವಷ್ಟಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇದ್ದ 217 ಬೋಧಕ ಮತ್ತು 220 ಬೋಧಕೇತರ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸದರಿ ಪ್ರಸ್ತಾವನೆಗೆ ಅನುಮೋದನೆ ನೀಡಿ, ಬೋಧಕ ಮತ್ತು ಬೋಧಕೇತೇರ ಸಿಬ್ಬಂದಿಗಳ ಹುದ್ದೆಗಳನ್ನು ಮಂಜೂರು ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಬೆಳಗಾವಿ ಜಿಲ್ಲೆಯ ಅಥಣಿ ವೈದ್ಯಕೀಯ ಮಹಾವಿದ್ಯಾಲಯ ಪ್ರಾರಂಭಕ್ಕಾಗಿ 77 ಬೋಧಕರು ಹಾಗೂ 98 ಬೋಧಕೇತರ ಹುದ್ದೆಗಳು ಮಂಜೂರಾಗಿದ್ದು, ಶೀಘ್ರದಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು. ಪಶು ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳಿಂದ ಖಾಲಿ ಇದ್ದ 36 ಬ್ಯಾಗ್‌ಲಾಕ್‌ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

Latest Videos

undefined

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್: ಶಿಕ್ಷಕ, ಪೊಲೀಸ್ ನೇಮಕಾತಿಗೆ ಅಧಿಸೂಚನೆ ಪ್ರಕಟ

ಅಥಣಿ ಮಹಾವಿದ್ಯಾಲಯ ಕಟ್ಟಡ ಪೂರ್ಣ: ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಳೆದ ಅವಧಿಯಲ್ಲಿ ಸಾಮಾಜಿಕ ಚಿಂತಕ ಭಾವುರಾವ್‌ ದೇಶಪಾಂಡೆ ಸ್ಮರಣಾರ್ಥ ಬೆಳಗಾವಿ ಜಿಲ್ಲೆಗೆ ಪಶುವೈದ್ಯಕೀಯ ಮಹಾವಿದ್ಯಾಲಯವನ್ನು ಘೋಷಣೆ ಮಾಡಿದ್ದರು. ಈ ಸಂಬಂಧ ಅಥಣಿ ತಾಲ್ಲೂಕಿನ ಕೊಕಟನೂರು ಸಮೀಪದಲ್ಲಿ 200 ಎಕರೆ ವಿಶಾಲ ಪ್ರದೇಶದಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಎಂದು ಪ್ರಕಟಣೆಯಲ್ಲಿ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

ಅಥಣಿ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸಮ್ಮುಖದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಬಾಕಿ ಇದ್ದ ನಿರ್ಮಾಣ ಕಾಮಗಾರಿ ಕುರಿತು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳು-ಸಿಬ್ಬಂದಿಗಳಿಗೆ ತಾಕೀತು ಮಾಡಿ, ಅಥಣಿಗೆ ಭೇಟಿ ನೀಡಿ, ಕಾಲೇಜು ಕಟ್ಟಡಗಳ ನಿರ್ಮಾಣ ಕಾಮಗಾರಿ ಪರಿಶೀಲಿಸಿ, ಕಟ್ಟಡಗಳ ಗುಣಮಟ್ಟಕಾಯ್ದುಕೊಂಡು, ಮೂಲಭೂತ ಸೌಲಭ್ಯಗಳನ್ನು ಒದಗಿಸಿ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿತ್ತು ಎಂದು ತಿಳಿಸಿರುವ ಪ್ರಭು ಚವ್ಹಾಣ್‌ ಅವರು ತಾವು ಕಾಲೇಜು ನಿರ್ಮಾಣಕ್ಕೆ ವಹಿಸಿದ್ದ ಮುತುವರ್ಜಿ ವಿವರಿಸಿದ್ದಾರೆ. ಕಾಲೇಜಿನ ಕೊಠಡಿಗಳು, ಆಸ್ಪತ್ರೆ ಕಟ್ಟಡ, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ವಸತಿ ಗೃಹಗಳ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿವೆ. ಮರಣೋತ್ತರ ಪರೀಕ್ಷೆ ಕೊಠಡಿ, ಗ್ರಂಥಾಲಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಭಾರತೀಯ ಪಶು ವೈದ್ಯಕೀಯ ಪರಿಷತ್ತಿನಿಂದ ಮಾನ್ಯತೆ ಪಡೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಭಾಗದ ಹೈನುಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸುವ ಮೂಲಕ ಭಾವುರಾವ್‌ ದೇಶಪಾಂಡೆ ಅವರಿಗೆ ಗೌರವ ಸಲ್ಲಿಸಿದಂತಾಗಿದೆ. ಕಾಲೇಜು ಮಂಜೂರು ಮತ್ತು ನಿರ್ಮಾಣದಲ್ಲಿ ಮಾಜಿ ಸಚಿವ ಲಕ್ಷ್ಮಣ ಸವದಿ ಅವರ ಪರಿಶ್ರಮ ಸಾಕಷ್ಟಿದೆ. ನನ್ನ ಅವಧಿಯಲ್ಲಿ ಕಾಲೇಜು ನಿರ್ಮಾಣ ಪೂರ್ಣಗೊಂಡಿರುವುದು ನನ್ನ ಸೌಭಾಗ್ಯ ಎಂದು ಪ್ರಭು ಚವ್ಹಾಣ್‌ ಪ್ರಕಟಣೆಯಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
 

click me!