* ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರ ಹುದ್ದೆ
* 1,323 ಹುದ್ದೆಗಳಿಗೆ ಒಟ್ಟು 3,10,332 ಮಂದಿ ಅರ್ಜಿ ಸಲ್ಲಿಕೆ
* ಎಲ್ಲ ಅಭ್ಯರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ
ಬೆಂಗಳೂರು(ಸೆ.19): ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರ (ಎಸ್‌ಡಿಎ) ಹುದ್ದೆಗಳ ನೇಮಕಾತಿಗೆ ಇಂದು(ಭಾನುವಾರ) ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಒಟ್ಟು 3.10 ಲಕ್ಷ ಮಂದಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಹೈದರಾಬಾದ್ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಖಾಲಿ ಇರುವ 1,323 ಹುದ್ದೆಗಳಿಗೆ ಒಟ್ಟು 3,10,332 ಮಂದಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ರಾಜ್ಯದ ಎಲ್ಲ 31 ಜಿಲ್ಲಾ ಕೇಂದ್ರಗಳು ಹಾಗೂ 23 ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗಿದೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಜಿ.ಸತ್ಯವತಿ ತಿಳಿಸಿದ್ದಾರೆ.
undefined
ನಕಲು ಮಾಡಲು ಇಯರ್ ಫೋನ್ ಬಳಸಿ ಸಿಕ್ಕಿಬಿದ್ದಳು!
ರಾಜ್ಯದಲ್ಲಿ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮತ್ತು ಸ್ಯಾನಿಟೈಸರ್ ಬಳಕೆಗೆ ಒತ್ತು ನೀಡಲಾಗಿದೆ. ಪರೀಕ್ಷೆ ಪ್ರಾರಂಭಕ್ಕೆ ಒಂದು ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಅಭ್ಯರ್ಥಿಗಳು ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್ ಸೇರಿದಂತೆ ಯಾವುದಾದರೂ ಮೂಲ ಗುರುತಿನ ಚೀಟಿಯೊಂದಿಗೆ ಪ್ರವೇಶ ಪತ್ರವನ್ನು ಪರೀಕ್ಷಾ ಕೇಂದ್ರದಲ್ಲಿ ಪರಿಶೀಲನೆಗೆ ಕಡ್ಡಾಯವಾಗಿ ಹಾಜರುಪಡಿಸಬೇಕು. ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪರಿಶೀಲನೆಗೆ ಅಧಿಕಾರಿಗಳು ಸೂಚಿಸಿದ್ದಲ್ಲಿ ಮಾಸ್ಕ್ ತೆಗೆಯಬೇಕು ಎಂಬ ಷರತ್ತುಗಳನ್ನು ವಿಧಿಸಿರುವುದಾಗಿ ಅವರು ಹೇಳಿದರು.