
ವಿಧಾನಸಭೆ(ಫೆ.15): ಕೊಬ್ಬರಿ ಖರೀದಿಗೆ ರೈತರ ನೋಂದಣಿಯಲ್ಲಿ ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಒಂದು ವಾರ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಬುಧವಾರ ಕೊಬ್ಬರಿ ಬೆಂಬಲ ಬೆಲೆಯ ಚರ್ಚೆಗೆ ಉತ್ತರ ನೀಡಿದ ಅವರು, ನೋಂದಣಿ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಒಂಭತ್ತು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುವುದು. ಈವರೆಗೆ ಆಗಿರುವ ನೋಂದಣಿಯನ್ನು ಪುನರ್ ಪರಿಶೀಲನೆ ಮಾಡಿ ವಾಮ ಮಾರ್ಗದಲ್ಲಿ ವರ್ತಕರು ಮಾಡಿಕೊಂಡಿರುವ ನೋಂದಣಿಗಳನ್ನು ರದ್ದುಪಡಿಸಿ ಅರ್ಹ ರೈತರಿಂದ ಕೊಬ್ಬರಿ ಖರೀದಿ ಮಾಡಲಾಗುವುದು ಎಂದು ಹೇಳಿದರು.
ಕೊಬ್ಬರಿ ನೋಂದಣಿ: ತುಮಕೂರು ತೆಂಗು ಬೆಳೆಗಾರರಿಗೆ ಅನ್ಯಾಯ
ನೋಂದಣಿ ಪ್ರಕ್ರಿಯೆಗೆ ನೇಮಕಗೊಂಡಿರುವ ಕೆಲವರು ಸ್ವಂತ ಲ್ಯಾಪ್‌ಟಾಪ್‌ಗಳನ್ನು ಖರೀದಿ ಮಾಡಿ, ಮನೆಮನೆಗೆ ಹೋಗಿ ನೋಂದಣಿ ಮಾಡಿರುವುದು ಕಂಡು ಬಂದಿದೆ. ಇದರಲ್ಲಿ ಕೆಲವು ವರ್ತಕರ ಪಾತ್ರ ಇರುವುದು ಗೊತ್ತಾಗಿದೆ. ಯಾವ ಜಿಲ್ಲೆಗಳಲ್ಲಿ ಈ ರೀತಿ ಲೋಪವಾಗಿದೆ ಎಂಬುದನ್ನು ಪತ್ತೆ ಮಾಡಿ ಅಂತಹ ನೋಂದಣಿಗಳನ್ನು ರದ್ದುಪಡಿಸಲಾಗುವುದು ಎಂದರು.
ಈ ಮೊದಲು ಕೇಂದ್ರ ಸರ್ಕಾರ ಏಳು ತಿಂಗಳವರೆಗೆ ಕೊಬ್ಬರಿ ಖರೀದಿಗೆ ಅವಕಾಶ ನೀಡಿತ್ತು. ಪ್ರಸ್ತುತ 3 ತಿಂಗಳಿನಂತೆ ಎರಡು ಅವಧಿ ಖರೀದಿಗೆ ಅವಕಾಶ ನೀಡಲಾಗಿದೆ. ಕಳೆದ ಬಾರಿ ಖರೀದಿಯಲ್ಲಿ ನಾಫೆಡ್ 200 ಕೋಟಿ ರೂ. ನಷ್ಟ ಅನುಭವಿಸಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಉಂಡೆ ಕೊಬ್ಬರಿಯನ್ನು ಶೇ.25ರಷ್ಟು ಖರೀದಿಸಲು ಅವಕಾಶವಿದೆ. ಆ ಪ್ರಮಾಣವನ್ನು ಶೇ.50ಕ್ಕೆ ಹೆಚ್ಚಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ. ಹಾಗೆಯೇ ಹೋಳಾಗಿರುವ ವಿಲ್ಲಿಂಗ್ ಕೊಬ್ಬರಿಯನ್ನು ಖರೀದಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ