
ಬೆಂಗಳೂರು (ಮೇ.14): 108 ಅಂಬ್ಯುಲೆನ್ಸ್ ಗಳ ನಿರ್ವಹಣೆಯನ್ನ ಖಾಸಗಿ ಏಜನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು 108 ಅಂಬ್ಯುಲೆನ್ಸ್ ಗಳನ್ನು ಇಲ್ಲಿಯವರೆಗೆ ಖಾಸಗಿ ಏಜೆನ್ಸಿಗಳು ನಿರ್ವಹಿಸುತ್ತಿದ್ದವು. ಈ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರವೇ 108 ಅಂಬ್ಯುಲೆನ್ಸ್ ಗಳ ನಿರ್ವಹಣೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು, ಈಗಾಗಲೇ ಚಾಮರಾಜ ನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ ಎಂದರು.
108 ಅಂಬ್ಯುಲೆನ್ಸ್ ಗಳ ಸೇವೆ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಬಹು ಮುಖ್ಯವಾದದ್ದು. ಖಾಸಗಿ ಏಜನ್ಸಿಯಿಂದ ಇದರ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿರಲಿಲ್ಲ. ಸರ್ಕಾರದಿಂದ ಏಜೆನ್ಸಿಗೆ ಹಣ ಪಾವತಿಯಾದರೂ, ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿಯಾಗುತ್ತಿರಲಿಲ್ಲ. ಸರ್ಕಾರ ಹಲವು ಬಾರಿ ಮದ್ಯಪ್ರವೇಶಿಸಿ ಅಂಬ್ಯುಲೆನ್ಸ್ ಡ್ರೈವರ್ ಗಳ ಸಮಸ್ಯೆಯನ್ನ ಬಗೆಹರಿಸಬೇಕಾಗಿತ್ತು. ಸರ್ಕಾರವೇ ನಿರ್ವಹಣೆ ಮಾಡುವುದರಿಂದ ಇನ್ಮುಂದೆ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
108 ಅಂಬ್ಯುಲೆನ್ಸ್ ಗಳ ಮಾಲಿಕತ್ವ ಸರ್ಕಾರದ ಬಳಿ ಇದೆ. ಅಂಬ್ಯುಲೆನ್ಸ್ ಗಳಿಗೆ ಡಿಸೇಲ್, ಪೆಟ್ರೋಲ್ ನಿಂದ ಹಿಡಿದು ವಾಹನ ಚಾಲಕರ ವೇತನವನ್ನು ಕೂಡಾ ಸರ್ಕಾರವೇ ನೀಡುತ್ತಿತ್ತು. ಕೇವಲ ಒಂದು ಕಮಾಂಡ್ ಸೆಂಟರ್ ಮೂಲಕ ಖಾಸಗಿ ಏಜನ್ಸಿಯವರು ನಿರ್ವಹಣೆ ಮಾಡುತ್ತಿದ್ದರು. ಏಜೆನ್ಸಿಯ ಬದಲು ಆರೋಗ್ಯ ಇಲಾಖೆಯೇ ನಡೆಸಿದರೆ ಸರ್ಕಾರದ ಬೊಕ್ಕಸಕ್ಕೂ ನೂರಾರು ಕೋಟಿ ಹಣ ಉಳಿತಾಯವಾಗಲಿದೆ. ಅಲ್ಲದೇ ವ್ಯವಸ್ಥೆಯಲ್ಲೂ ಸುಧಾರಣೆ ತರಬಹುದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮಿಮ್ಸ್ ಹೆರಿಗೆ ಆಸ್ಪತ್ರೆಗೆ ಮತ್ತಷ್ಟು ಮೂಲ ಸೌಲಭ್ಯಕ್ಕೆ ಚಿಂತನೆ: ಸಚಿವ ದಿನೇಶ್ ಗುಂಡೂರಾವ್
ಈಗಾಗಲೇ ಚಾಮರಾಜ ನಗರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ 108 ಅಂಬ್ಯುಲೆನ್ಸ್ ನಿರ್ವಹಣೆಯನ್ನ ಆರೋಗ್ಯ ಇಲಾಖೆ ಯಶಸ್ವಿಯಾಗಿ ನಡೆಸಿದೆ. ಮುಂದಿನ ತಿಂಗಳಲ್ಲಿ ರಾಜ್ಯದ ಎಲ್ಲ ಸ್ಟೇಟ್ ಅಂಬ್ಯುಲೆನ್ಸ್ ಗಳನ್ನ ಇಲಾಖೆ ತನ್ನ ನಿರ್ವಹಣೆಯ ವ್ಯಾಪ್ತಿಗೆ ತೆಗೆದುಕೊಳ್ಳಲಿದೆ. ಇದಾದ ಬಳಿಕ ಮೂರು ತಿಂಗಳ ಒಳಗಾಗಿ 108 ಅಂಬ್ಯುಲೆನ್ಸ್ ಗಳನ್ನು ಆರೋಗ್ಯ ಇಲಾಖೆ ತನ್ನ ಕಮಾಂಡ್ ಕಂಟ್ರೋಲ್ ಸೆಂಟರ್ ವ್ಯಾಪ್ತಿಗೆ ತೆಗೆದುಕೊಂಡು ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳಲಿದೆ ಎಂದರು. ಬೆಂಗಳೂರಿನಲ್ಲಿ ಒಂದು ಕಮಾಂಡ್ ಸೆಂಟರ್ ಹಾಗೂ ಪ್ರತಿ ಜಿಲ್ಲೆಗಳಲ್ಲೂ ಪ್ರತ್ಯೇಕ ಕಮಾಂಡ್ ಸೆಂಟರ್ ಗಳನ್ನ ರಚಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ