ರಾಜ್ಯದಲ್ಲಿ ಬರುವ ಅ.1ರಿಂದ ಆಸ್ತಿ ನೋಂದಣಿ ಮಾರ್ಗಸೂಚಿ (ಗೈಡನ್ಸ್ ವ್ಯಾಲ್ಯೂ) ದರ ಪರಿಷ್ಕರಣೆಯಾಗಲಿದ್ದು, ಸರಾಸರಿ ಶೇ.25 ರಿಂದ ಶೇ.30 ರಷ್ಟು ಹೆಚ್ಚಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಬೆಂಗಳೂರು (ಸೆ.20): ರಾಜ್ಯದಲ್ಲಿ ಬರುವ ಅ.1ರಿಂದ ಆಸ್ತಿ ನೋಂದಣಿ ಮಾರ್ಗಸೂಚಿ (ಗೈಡನ್ಸ್ ವ್ಯಾಲ್ಯೂ) ದರ ಪರಿಷ್ಕರಣೆಯಾಗಲಿದ್ದು, ಸರಾಸರಿ ಶೇ.25 ರಿಂದ ಶೇ.30 ರಷ್ಟು ಹೆಚ್ಚಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ಸುಮಾರು ಎರಡು ಸಾವಿರ ಕೋಟಿ ರು. ಹೆಚ್ಚುವರಿ ಆದಾಯ ನಿರೀಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರತಿ ವರ್ಷ ಮಾರ್ಗಸೂಚಿ ದರ ಪರಿಷ್ಕರಣೆಯಾಗಬೇಕು. ಆದರೆ, ಕಳೆದ ಐದು ವರ್ಷದಿಂದ ಮಾರ್ಗಸೂಚಿ ದರ ಪರಿಷ್ಕರಣೆಯಾಗಿಲ್ಲ. ಇದರಿಂದ ಹಲವೆಡೆ ಭೂಮಿ ಮಾರಾಟಗಾರರು ಮತ್ತು ರೈತರಿಗೆ ಅನ್ಯಾಯವಾಗಿದೆ. ಅಲ್ಲದೇ, ಕಪ್ಪು ಹಣ ವಹಿವಾಟಿಗೂ ಅವಕಾಶವಾದಂತಾಗಿದೆ. ಈ ಹಿನ್ನೆಲೆಯಲ್ಲಿ ಅ.1ರಿಂದ ಹೊಸ ಮಾರ್ಗಸೂಚಿ ದರ ಜಾರಿಯಾಗಲಿದೆ ಎಂದು ತಿಳಿಸಿದರು.
ಭಾರತ ದೇಶದಲ್ಲಿ ಸಂವಿಧಾನವೇ ಸಾರ್ವಭೌಮ: ಸಚಿವ ಚಲುವರಾಯಸ್ವಾಮಿ
ಮೊದಲ ಹಂತದಲ್ಲಿ ಬೆಂಗಳೂರಲ್ಲಿ: ಮೊದಲ ಹಂತವಾಗಿ ಬೆಂಗಳೂರಿನಲ್ಲಿ ಪರಿಷ್ಕೃತ ದರ ಜಾರಿಯಾಗಲಿದೆ. ಉಳಿದಂತೆ ಪ್ರತಿ ಜಿಲ್ಲೆಯಲ್ಲಿ ಅಲ್ಲಿನ ಉಪಸಮಿತಿ ಚರ್ಚಿಸಿ ನೂತನ ಮಾರ್ಗಸೂಚಿ ದರವನ್ನು ಹಂತಹಂತವಾಗಿ ಜಾರಿಗೊಳಿಸಲಿದೆ. ಒಟ್ಟಾರೆಯಾಗಿ ಪರಿಷ್ಕೃತ ಮಾರ್ಗಸೂಚಿ ದರ ಸರಾಸರಿ ಶೇ.25 ರಿಂದ ಶೇ.30ರಷ್ಟು ಹೆಚ್ಚಾಗಲಿದೆ. ಮಾರ್ಗಸೂಚಿ ದರಕ್ಕೂ, ಮಾರುಕಟ್ಟೆ ದರಕ್ಕೂ ಹೆಚ್ಚಿನ ವ್ಯತ್ಯಾಸ ಇರಬಾರದು ಎಂಬ ಕಾನೂನಿದೆ. ಹೀಗಾಗಿ ಈ ನ್ಯೂನ್ಯತೆಯನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿ ದರ ಪರಿಷ್ಕರಣೆ ಎಂಬುದಕ್ಕಿಂತ ನ್ಯೂನ್ಯತೆಯನ್ನು ಸರಿಪಡಿಸಲಾಗಿದೆ ಎಂದು ಭಾವಿಸುವುದು ಸೂಕ್ತ ಎಂದರು.
ಮಾರ್ಗಸೂಚಿ ದರ ಪರಿಷ್ಕರಣೆಯಲ್ಲಿ ಯಾರಿಗಾದರೂ ತಕರಾರು ಇದ್ದರೆ, ಅದಕ್ಕೂ ಆಕ್ಷೇಪ ಸಲ್ಲಿಸಬಹುದು. ಅಧಿಕಾರಿಗಳು ತಕರಾರುಗಳನ್ನೂ ಗಮನಿಸಿ ಹೊಸ ಮಾರ್ಗಸೂಚಿ ದರವನ್ನು ಜಾರಿಗೊಳಿಸಲಿದ್ದಾರೆ ಎಂದ ಅವರು, ಮಾರುಕಟ್ಟೆ ದರಕ್ಕೂ ಮಾರ್ಗಸೂಚಿ ದರಕ್ಕೂ ಸಾಮ್ಯತೆ ಇರುವ ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ.10 ರಷ್ಟು ಏರಿಕೆಯಾಗಲಿದೆ. ಮಾರ್ಗಸೂಚಿ ದರಕ್ಕಿಂತ ಮಾರುಕಟ್ಟೆ ದರ 200 ಪಟ್ಟು ಹೆಚ್ಚಿರುವ ಪ್ರದೇಶಗಳಲ್ಲಿ ಪರಿಷ್ಕೃತ ದರವನ್ನು ಶೇ.20 ರಿಂದ ಶೇ.25 ರಷ್ಟು ಹೆಚ್ಚಿಸಲಾಗಿದೆ ಎಂದರು.
ಇನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಮಾರುಕಟ್ಟೆ ದರ ಮಾರ್ಗಸೂಚಿ ದರಕ್ಕಿಂತ 500 ಪಟ್ಟು ಹೆಚ್ಚಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ 5 ರಿಂದ 10 ಲಕ್ಷ ರು. ಇದ್ದರೆ, ಮಾರುಕಟ್ಟೆ ದರ 10 ಕೋಟಿ ರು.ಗಿಂತ ಅಧಿಕವಿದೆ. ಇಂತಹ ಪ್ರದೇಶಗಳಲ್ಲಿ ನೂತನ ಮಾರ್ಗಸೂಚಿ ದರವನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ. ಮಾರುಕಟ್ಟೆ ದರಕ್ಕಿಂತ ಮಾರ್ಗಸೂಚಿ ದರ ಹೆಚ್ಚಾಗಿದ್ದರೆ, ಅಂತಹ ಭಾಗದಲ್ಲಿ ಮಾರ್ಗಸೂಚಿ ದರವನ್ನು ಮತ್ತಷ್ಟು ಕಡಿಮೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ದುರಹಂಕಾರದ ಮಾತುಗಳನ್ನಾಡುತ್ತಿದೆ: ಅಶ್ವತ್ಥನಾರಾಯಣ
ಕಾವೇರಿ-2 ಹೆಚ್ಚುತ್ತಿರುವ ನೋಂದಣಿಗಳು: ಕಾವೇರಿ-2 ತಂತ್ರಾಂಶ ಜಾರಿಯಾದ ವೇಳೆ ಸಣ್ಣಪುಟ್ಟ ನ್ಯೂನ್ಯತೆಗಳು ಇತ್ತು. ಆದರೆ, ಪ್ರಸ್ತುತ ಬಹುತೇಕ ನ್ಯೂನ್ಯತೆಗಳನ್ನು ಸರಿಪಡಿಸಲಾಗಿದೆ. ಪರಿಣಾಮ ರಾಜ್ಯದಲ್ಲಿ ಪ್ರತಿದಿನ ಅಂದಾಜು 10 ರಿಂದ 13 ಸಾವಿರ ಆಸ್ತಿ ನೋಂದಣಿಗಳಾಗುತ್ತಿವೆ. ಈ ತಿಂಗಳಲ್ಲಿ ಈಗಾಗಲೇ 800 ಕೋಟಿ ರೂ. ಗೂ ಅಧಿಕ ಆದಾಯ ಸರ್ಕಾರಕ್ಕೆ ಬಂದಿದೆ ಎಂದರು.