
ಕೂಡ್ಲಿಗಿ (ಜು.4) : ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಡೇಲಡಕು ದೊಡ್ಡಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 34ಕ್ಕೂ ಹೆಚ್ಚು ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ತಾಲೂಕಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಇವರನ್ನು ದಾಖಲಿಸಲಾಗಿತ್ತು. ಈ ಪೈಕಿ, 14 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಶನಿವಾರ ರಾತ್ರಿ ಮತ್ತು ಭಾನುವಾರ 10 ಜನರು ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಮತ್ತೆ 24 ಮಂದಿಯಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ಪೈಪ್‌ಲೈನ್ 3-4 ಕಡೆ ಒಡೆದಿದೆ. ಇತ್ತೀಚೆಗೆ ಮಳೆ ಬಂದಿದ್ದರಿಂದ ಒಡೆದಿರುವ ಪೈಪ್‌ನಲ್ಲಿ ಕಲ್ಮಶ ಸೇರಿಕೊಂಡು ಕಲುಷಿತ ನೀರು ಸರಬರಾಜಾಗುತ್ತಿದೆ. ಈ ನೀರು ಸೇವನೆಯಿಂದ ವಾಂತಿ-ಭೇದಿ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು: ಇಬ್ಬರು ಪಿಡಿಒಗಳನ್ನು ಅಮಾನತು ಮಾಡಿದ ಸರ್ಕಾರ
ಗ್ರಾಮಕ್ಕೆ ಪೂರೈಸಲಾಗಿರುವ ನೀರನ್ನು ಬಳ್ಳಾರಿಯ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ, ಈ ನೀರು ಕುಡಿಯಲು ಯೋಗ್ಯವಾಗಿದೆಯೋ?, ಇಲ್ಲವೋ? ಎಂದು ಹೇಳಬಹುದಾಗಿದೆ ಎಂದು ತಾಲೂಕಿನ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಕೂಡ್ಲಿಗಿ ಶಾಸಕ ಡಾ. ಶ್ರೀನಿವಾಸ, ತಾಲೂಕು ಪ್ರಭಾರ ವೈದ್ಯಾಧಿಕಾರಿ ಡಾ.ಶ್ರೀಧರ, ಜಿಲ್ಲಾ ಸರ್ವೇಣಾಧಿಕಾರಿ ಡಾ.ಷಣ್ಮುಖ ನಾಯ್ಕ ಅವರು ಗ್ರಾಮಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ. ಘಟನೆ ನಂತರ, ಪೈಪ್‌ಲೈನ್ ಒಡೆದಿರುವುದನ್ನು ದುರಸ್ತಿ ಮಾಡಲಾಗಿದೆ.
ಕಳೆದ 2 ತಿಂಗಳ ಅವಧಿಯಲ್ಲಿ ಕಲುಷಿತ ನೀರು ಸೇವನೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ನಾಲ್ವರು, ರಾಯಚೂರು ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದರು.
ಕೊಪ್ಪಳ: ಕಲುಷಿತ ನೀರಿಗೆ 4ನೇ ಬಲಿ, ಕನಕಗಿರಿಯಲ್ಲಿ 5 ವರ್ಷದ ಮಗು ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ