
ಬೆಂಗಳೂರು (ಜ.28): ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಈಗ ಬಹಿರಂಗವಾಗಿ ಸಮರ ಸಾರಿದೆ. ಕಳೆದ ಮೂರು ವರ್ಷಗಳಿಂದ ಪೂರ್ಣಗೊಂಡಿರುವ ಕಾಮಗಾರಿಗಳ ಸುಮಾರು 36 ಸಾವಿರ ಕೋಟಿ ರೂಪಾಯಿ ಬಾಕಿ ಹಣ ಪಾವತಿಸದ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸಲು ಗುತ್ತಿಗೆದಾರರ ಸಂಘ ನಿರ್ಧರಿಸಿದೆ. ಡಿಸೆಂಬರ್ ವರೆಗೆ ನೀಡಿದ್ದ ಗಡುವು ಮುಗಿದರೂ ಬಿಡಿಗಾಸು ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್ ಮಂಜುನಾಥ್ ನೇತೃತ್ವದಲ್ಲಿ ಇಂದು ನಡೆದ ಪದಾಧಿಕಾರಿಗಳ ಸಭೆಯಲ್ಲಿ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗಿದೆ. ಮೊದಲ ಹಂತವಾಗಿ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ. ಒಂದು ವೇಳೆ ಬಜೆಟ್ ನಂತರವೂ ಸರ್ಕಾರ ಸ್ಪಂದಿಸದಿದ್ದರೆ, ರಾಜ್ಯಾದ್ಯಂತ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸಿ (Work Bandh) ತೀವ್ರ ಸ್ವರೂಪದ ಪ್ರತಿಭಟನೆ ನಡೆಸುವುದಾಗಿ ಸಂಘ ಎಚ್ಚರಿಕೆ ನೀಡಿದೆ.
ಈ ಹೋರಾಟದ ಮುಂದಿನ ಹಾದಿಯ ಬಗ್ಗೆ ಮಾಹಿತಿ ನೀಡಲು ನಾಳೆ (ಜ. 29) ಬೆಳಗ್ಗೆ 11 ಗಂಟೆಗೆ ಚಾಮರಾಜಪೇಟೆಯ ಸಂಘದ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ಕರೆಯಲಾಗಿದೆ. ಈ ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಆರ್ ಮಂಜುನಾಥ್ ಅವರು ಸರ್ಕಾರದ ವಿರುದ್ಧದ ಮುಂದಿನ ಕಾನೂನಾತ್ಮಕ ಹೋರಾಟದ ಸಂಪೂರ್ಣ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ.
ತಿರುಗುಬಾಣವಾದ 'ಪೇ-ಸಿಎಂ' ಅಸ್ತ್ರ: 40% ಇಂದ 60% ಆರೋಪದತ್ತ!
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ '40% ಕಮಿಷನ್' ಮತ್ತು 'ಪೇ-ಸಿಎಂ' ಅಭಿಯಾನದ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡಿದ್ದ ಇದೇ ಗುತ್ತಿಗೆದಾರರ ಸಂಘ, ಈಗ ಅದೇ ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದಿದೆ. ಆಗ ಗುತ್ತಿಗೆದಾರರ ಪರ ನಿಂತಿದ್ದ ಕಾಂಗ್ರೆಸ್, ಈಗ ಅಧಿಕಾರಕ್ಕೆ ಬಂದ ಮೇಲೆ ಹಣ ನೀಡದೆ ಸತಾಯಿಸುತ್ತಿರುವುದು ಏಕೆ ಎಂಬ ಪ್ರಶ್ನೆ ಮೂಡಿದೆ. ಇದೀಗ ಗುತ್ತಿಗೆದಾರರ ಸಂಘವು ಹಾಲಿ ಸರ್ಕಾರದ ವಿರುದ್ಧ '60% ಕಮಿಷನ್' ಆರೋಪ ಮಾಡುತ್ತಿರುವುದು ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ