
ಬೆಂಗಳೂರು(ಜು.17): ಪ್ರವಾಸಿ ವೀಸಾದಡಿ ಭಾರತಕ್ಕೆ ಆಗಮಿಸಿ ಧರ್ಮ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ 19 ವಿದೇಶಿಯರಿಗೆ ನಗರದ 37ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಅಹ್ಮದ್ ಜೈನಿ ಮತ್ತು ಮಹ್ಮದ್ ಫೈಸಲ್ ಸೇರಿದಂತೆ ಇಂಡೋನೇಷ್ಯಾದ 10 ಮತ್ತು ಕಜಕಿಸ್ತಾನದ 9 ಮಂದಿ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಪುರಸ್ಕರಿಸಿದ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ಆರೋಪಿಗಳು ಪ್ರವಾಸಿ ವೀಸಾದ ಮೇಲೆ ದೆಹಲಿಗೆ ಬಂದು ಜಮಾತ್ ಧರ್ಮ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ನಂತರ ಬೆಂಗಳೂರಿಗೆ ಬಂದು ಪಾದರಾಯನಪುರ ಮಸೀದಿಯಲ್ಲಿ ಆಶ್ರಯ ಪಡೆದಿದ್ದರು. ಭಾರತೀಯ ವಿದೇಶಾಂಗ ಕಾಯ್ದೆ ಉಲ್ಲಂಘನೆ ಮತ್ತು ಧರ್ಮ ಪ್ರಚಾರದಲ್ಲಿ ತೊಡಗಿದ್ದ ಆರೋಪದ ಮೇಲೆ ಜೆ.ಜೆ.ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿದ್ದರು. ವಿಚಾರಣಾ ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ಬಂಧನದ ವಶಕ್ಕೆ ನೀಡಿತ್ತು.
ತಬ್ಲಿಗ್ ಜಮಾತ್‌ನಲ್ಲಿ ಪಾಲ್ಗೊಂಡ 76 ಮಂದಿ ವಿದೇಶಿಗರಿಗೆ ಜಾಮೀನು!
ಈಗ ಜಾಮೀನು ನೀಡಿಕೆ ವೇಳೆ ತಲಾ ಒಂದು ಲಕ್ಷ ರು. ಮೊತ್ತದ ವೈಯಕ್ತಿಕ ಬಾಂಡ್ ನೀಡಬೇಕು. ಹಾಗೆಯೇ, 10 ಸಾವಿರ ನಗದು ಅಥವಾ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಇದೇ ಮಾದರಿಯ ಪ್ರಕರಣಗಳಲ್ಲಿ ಭಾಗಿಯಾಗಬಾರದು. ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ನ್ಯಾಯಾಲಯ ಆರೋಪಿಗಳಿಗೆ ಷರತ್ತು ವಿಧಿಸಿದೆ. ಅಲ್ಲದೆ, ಜೈಲಿನಿಂದ ಬಿಡುಗಡೆ ಮಾಡಿದ ನಂತರ ತನಿಖಾಧಿಕಾರಿಗಳು ಆರೋಪಿಗಳನ್ನು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆ ಪೂರ್ಣಗೊಳ್ಳುವವರೆಗೆ ಬೆಂಗಾವಲಿನೊಂದಿಗೆ ಡಿಟೆನ್ಷನ್ ಕೇಂದ್ರ ಅಥವಾ ಇತರೆ ಯಾವುದಾದರೂ ಪ್ರದೇಶದಲ್ಲಿ ಇರಿಸಬೇಕು ಎಂದು ನಿರ್ದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ