
ಬೆಂಗಳೂರು (ಏ.10): ಬೀದರ್‌ನಲ್ಲಿ ಏ.11 ಮತ್ತು 12 ರಂದು 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಗುರುವಾರ ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ಡಾ. ಭೀಮಣ್ಣ ಖಂಡ್ರೆ ವೇದಿಕೆಯಲ್ಲಿ ಆಯೋಜನೆಗೊಂಡಿರುವ ಸಮ್ಮೇಳನವನ್ನು 11ರಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ವಸ್ತುಪ್ರದರ್ಶನವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ ಎಂದರು.
ಅರಣ್ಯ, ಪರಿಸರ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಪೌರಾಡಳಿತ ಸಚಿವ ರಹೀಂಖಾನ್ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಸಂಸದ ಸಾಗರ ಖಂಡ್ರೆ ವ್ಯಂಗ್ಯಚಿತ್ರ ಪ್ರದರ್ಶನ ಅನಾವರಣಗೊಳಿಸುವರು.
ಏ.12 ರಂದು ಮಧ್ಯಾಹ್ನ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸಮಾರೋಪ ಭಾಷಣ ಮಾಡಲಿದ್ದು, ಸ್ಪೀಕರ್ ಯು.ಟಿ.ಖಾದರ್ ಪ್ರಶಸ್ತಿ ಪ್ರದಾನ ಮಾಡುವರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉಪಸ್ಥಿತರಿರುವರು. ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿನಂದನಾ ನುಡಿ ನೆರವೇರಿಸಲಿದ್ದು, ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣ ಪಾಟೀಲ್, ಬೋಸರಾಜು ಪಾಲ್ಗೊಳ್ಳಲಿದ್ದಾರೆ. ಕಲ್ಯಾಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಜೇಯ ಸಿಂಗ್ ಉಪಸ್ಥಿತರಿರುವರು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಘಟಕ ಅಧ್ಯಕ್ಷ ಸೋಮಶೇಖರಗಾಂಧಿ, ಪ್ರಧಾನ ಕಾರ್ಯದರ್ಶಿ ಜಯಕುಮಾರಗೌಡ, ರಾಜ್ಯ ಸಮಿತಿ ಸದಸ್ಯ ಎಚ್.ಆರ್.ರವೀಶ್, ಉಪಾಧ್ಯಕ್ಷ ಡಾ.ಸ್ವಾಮಿ, ಹಿರಿಯ ಪತ್ರಕರ್ತರಾದ ಧ್ಯಾನ್ ಪೂಣಚ್ಚ, ಜುಕ್ರಿಯಾ ಮತ್ತಿತರರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ