
ಬೆಂಗಳೂರು(ಜು.25): ರಾಜ್ಯದಲ್ಲಿ ಮಳೆ ಹಾಗೂ ಮಳೆಯಿಂದ ಉಂಟಾಗಿರುವ ಪ್ರವಾಹದಿಂದ ಈವರೆಗೆ 9 ಜನ ಸಾವನ್ನಪ್ಪಿದ್ದು, 3 ಮಂದಿ ಕಾಣೆಯಾಗಿದ್ದಾರೆ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ
ರಾಜ್ಯದ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಹಾವೇರಿ, ಕೊಡಗು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ದಾವಣಗೆರೆ, ಹಾಸನ ಸೇರಿದಂತೆ 11 ಜಿಲ್ಲೆಗಳ 45 ತಾಲೂಕುಗಳಲ್ಲಿ ಮಳೆಯಿಂದಾಗಿ ತೀವ್ರ ಸಂಕಷ್ಟಎದುರಾಗಿದೆ. 283 ಗ್ರಾಮಗಳಿಗೆ ತೀವ್ರ ಹಾನಿಯಾಗಿದ್ದು, 36,498 ಮಂದಿ ತೊಂದರೆಗೆ ಸಿಲುಕಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 4, ಬೆಳಗಾವಿಯಲ್ಲಿ ಇಬ್ಬರು, ಕೊಡಗು, ಚಿಕ್ಕಮಗಳೂರು ಹಾಗೂ ಧಾರವಾಡದಲ್ಲಿ ತಲಾ ಒಬ್ಬರು ಸೇರಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರ ಮಳೆಗೆ ಬೆಳಗಾವಿ ಇನ್ನೂ ತತ್ತರ
134 ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, 2480 ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ. 54 ದೊಡ್ಡ ಜಾನುವಾರುಗಳು ಹಾಗೂ 24 ಸಣ್ಣ ಜಾನುವಾರುಗಳು ಮೃತಪಟ್ಟಿವೆ. 31,360 ಮಂದಿಯನ್ನು ಸ್ಥಳಾಂತರ ಮಾಡಲಾಗಿದ್ದು, ರಾಜ್ಯದ 237 ಕಡೆ ಸ್ಥಾಪಿಸಿರುವ ಕಾಳಜಿ ಕೇಂದ್ರದಲ್ಲಿ 22,417 ಮಂದಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
58,960 ಎಕರೆ ಬೆಳೆ ಹಾನಿ:
ಪ್ರವಾಹದಿಂದಾಗಿ ರಾಜ್ಯದಲ್ಲಿ 58960 ಎಕರೆಯಲ್ಲಿ ಬೆಳೆದ ಬೆಳೆ ಹಾನಿಯಾಗಿದೆ. 1962 ಎಕರೆಯಲ್ಲಿ ಬೆಳೆದಿದ್ದ ತೋಟಗಾರಿಕೆ ಬೆಳೆಯೂ ನಷ್ಟವಾಗಿದೆ. ಪ್ರವಾಹದಿಂದಾಗಿ ಸುಮಾರು 555 ಕಿ.ಮೀ. ರಸ್ತೆ ಹಾನಿಯಾಗಿದ್ದು, ರಾಜ್ಯದ ವಿವಿಧೆಡೆ 123 ಸೇತುವೆಗಳು ಹಾನಿಗೆ ಒಳಗಾಗಿವೆ. 213 ಶಾಲೆಗಳಿಗೆ ಪ್ರವಾಹದಿಂದಾಗಿ ಭಾರೀ ಹಾನಿಯಾಗಿದ್ದು, 33 ಆರೋಗ್ಯ ಕೇಂದ್ರಗಳು ಹಾಳಾಗಿವೆ. ಮಳೆಯಿಂದ 3,502 ವಿದ್ಯುತ್ ಕಂಬ ಬಿದ್ದಿದ್ದು, 341 ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳು ದುರಸ್ತಿಗೊಳಗಾಗಿವೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ