
ಬೆಂಗಳೂರು(ಮೇ.28): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತಿಥ್ಯದ ಹೋಟೆಲ್ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ತನ್ಮೂಲಕ ಈ ಬಗ್ಗೆ ಉಂಟಾಗಿರುವ ಗೊಂದಲವನ್ನು ರಾಜ್ಯ ಸರ್ಕಾರವೇ ನಿವಾರಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ನರೇಂದ್ರ ಮೋದಿ ಆಗಮಿಸಿದ್ದರು. ಪ್ರಧಾನಮಂತ್ರಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರ್ಕಾರದ ಸಂಪ್ರದಾಯ. ಆದರೆ ಕಳೆದ ವರ್ಷ ಏಪ್ರಿಲ್‌ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿತ್ತು. ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಹೀಗಾಗಿ ಗೊಂದಲ ಉಂಟಾಗಿತ್ತು ಎಂದು ಸ್ಪಷ್ಟನೆ ನೀಡಿದರು.
ಹುಲಿ ಯೋಜನೆ ಕಾರ್ಯಕ್ರಮಕ್ಕೆ ಮೋದಿ ಮೈಸೂರು ಭೇಟಿ; ₹3.3 ಕೋಟಿ ಬಿಲ್ ಬಾಕಿ!
2023ರ ಏಪ್ರಿಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರ (ಎನ್‌ಟಿಸಿಎ)ವೇ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಒಟ್ಟು 6 ಕೋಟಿ 33 ಲಕ್ಷ ರು. ವೆಚ್ಚವಾಗಿದೆ. ಎನ್ಟಿಸಿಎಯು ರಾಜ್ಯಕ್ಕೆ 3 ಕೋಟಿ ರು. ಪಾವತಿಸಿದೆ. ಉಳಿದ ಹಣ ಪಾವತಿಸಿಲ್ಲ. ಹೀಗಾಗಿ ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್‌ನವರು ಕಾರ್ಯಕ್ರಮದ ಆಯೋಜನೆಗೆ ಸ್ಥಳೀಯ ಬೆಂಬಲ ನೀಡಿದ್ದ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರವೇ ಆತಿಥ್ಯದ 80 ಲಕ್ಷ ರು. ಹಣ ಪಾವತಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ