
ಹಾವೇರಿ (ಮಾ.16): ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ೮೦೦ ಹೊಸ ಡಯಾಲಿಸಿಸ್ ಯಂತ್ರಗಳನ್ನು ಕೊಡುತ್ತಿದ್ದೇವೆ. ಏಕ ಬಳಕೆಯ ಯಂತ್ರಗಳಾಗಿರುವುದರಿಂದ ನಿರ್ವಹಣೆ ಸುಲಭವಾಗಿದ್ದು, ಸೋಂಕು ತಡೆಗಟ್ಟಲು ಸಾಧ್ಯವಾಗುತ್ತದೆ. ಬೆಳಗಾವಿ ವಿಭಾಗದ ೫೮ ತಾಲೂಕು ಆಸ್ಪತ್ರೆಗಳು ಮತ್ತು ೭ ಜಿಲ್ಲಾ ಆಸ್ಪತ್ರೆಗಳಿಗೆ ಹೊಸ ಏಜೆನ್ಸಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದ ಜಿಲ್ಲಾಸ್ಪತ್ರೆಯಲ್ಲಿ ನವೀಕೃತ ಡಯಾಲಿಸಿಸ್ ಘಟಕವನ್ನು ಶುಕ್ರವಾರ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಹಾವೇರಿ ಸೇರಿದಂತೆ ರಾಜ್ಯದಲ್ಲಿ ಬಾಕಿ ಉಳಿದಿರುವ ೧೫ ಜಿಲ್ಲಾಸ್ಪತ್ರೆಗಳಿಗೆ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ನೀಡಿ, ಜನರಿಗೆ ಉಚಿತವಾಗಿ ಸೇವೆ ನೀಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಆಸ್ಪತ್ರೆಗಳಲ್ಲಿ ಜೀವರಕ್ಷಕ ಔಷಧಗಳ ಕೊರತೆ ಬಗ್ಗೆ ಕೇಳಿದ ಪ್ರಶ್ನೆಗೆ, ಬಿಜೆಪಿ ಸರ್ಕಾರ ಜೀವರಕ್ಷಕ ಔಷಧಗಳ ವಿತರಣೆಯ ವ್ಯವಸ್ಥೆಯನ್ನು ಹಾಳು ಮಾಡಿ ಹೋಗಿತ್ತು. ಅದನ್ನು ಸರಿಪಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಈಗಾಗಲೇ ಸಾಕಷ್ಟು ಸುಧಾರಣೆಯಾಗಿದೆ.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಎಂಎಸ್‌ಪಿ ನಿಗದಿ ನೆನಪಾಗಲಿಲ್ಲವೇಕೆ?: ಮಾಜಿ ಸಿಎಂ ಬೊಮ್ಮಾಯಿ
ಮೇ ತಿಂಗಳ ಒಳಗೆ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜಾಗಬೇಕಾದ ಎಲ್ಲ ಔಷಧಗಳನ್ನು ಪೂರೈಸಲು ಕ್ರಮ ಕೈಗೊಂಡು, ಜನರಿಗೆ ಕೊರತೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದರು. ಬರ ನಿರ್ವಹಣೆ ಬಗ್ಗೆ ಕೇಳಿದ ಪ್ರಶ್ನೆಗೆ, ರಾಜ್ಯದಲ್ಲಿ ಕುಡಿಯುವ ನೀರು, ಮೇವು ಸೇರಿದಂತೆ ಬರಗಾಲ ನಿರ್ವಹಣೆಗೆ ಜಿಲ್ಲಾಧಿಕಾರಿಗಳ ಪಿಡಿ ಅಕೌಂಟ್‌ಗೆ ಹಣ ಹಾಕಿದ್ದೇವೆ. ಮುಖ್ಯಮಂತ್ರಿಯವರು ಜಿಲ್ಲಾಧಿಕಾರಿ ಮತ್ತು ಸಿಇಒಗಳ ಸಭೆ ನಡೆಸಿ, ಅಗತ್ಯ ಸೂಚನೆ ನೀಡಿದ್ದಾರೆ ಎಂದರು.
ಪ್ರತಿ ರೈತರ ಖಾತೆಗೆ ರು. ೨ ಸಾವಿರ ಬರ ಪರಿಹಾರ ನೀಡಲು ೭೦೦ ಕೋಟಿ ರು. ಬಿಡುಗಡೆ ಮಾಡಿದ್ದೇವೆ. ಆದರೆ, ಕೇಂದ್ರ ಸರ್ಕಾರ ಕಾನೂನಿನ ಪ್ರಕಾರ ಕೊಡಬೇಕಾದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್.ಡಿ.ಆರ್.ಎಫ್) ನಯಾಪೈಸೆಯನ್ನೂ ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರದ ವಿರುದ್ಧ ಕೇರಳ ಸರ್ಕಾರ ಹೋದ ರೀತಿಯಲ್ಲೇ, ನಾವೂ ನ್ಯಾಯಾಲಯಕ್ಕೆ ಹೋಗುವ ಆಲೋಚನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿಯ ಭ್ರಷ್ಟಾಚಾರ ಬಯಲು: ಕೇಂದ್ರ ಸರ್ಕಾರ ಸಂವಿಧಾನ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಎಲೆಕ್ಷನ್ ಬಾಂಡ್‌ಗಳ ಮೂಲಕ ಬಿಜೆಪಿ ನಡೆಸಿದ ಭ್ರಷ್ಟಾಚಾರ ವಿಶ್ವಕ್ಕೇ ಗೊತ್ತಾಗಿದೆ. ಇಡಿ, ಐಟಿ ದಾಳಿ ನಡೆದ ನಂತರ ಸಂಬಂಧಪಟ್ಟ ಕಂಪನಿಗಳು ವಾರದೊಳಗೆ ೧೦೦ ಕೋಟಿಯಿಂದ ೫೦೦ ಕೋಟಿಯನ್ನು ಬಿಜೆಪಿಗೆ ಕೊಟ್ಟಿವೆ. ಇವರೆಲ್ಲ ಏಕೆ ಕೊಟ್ಟರು. ಭ್ರಷ್ಟಾಚಾರ ಮಾಡಲು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದರು. ಬಿಜೆಪಿಯ ಲೂಟಿ ಇಂದು ಬಯಲಾಗಿದೆ ಎಂದು ಕುಟುಕಿದರು.
ದೇಶದ ಪ್ರಗತಿಗೆ ಮಹಿಳೆಯರ ಕೊಡುಗೆ ಮಹತ್ವದ್ದು: ಸಚಿವ ಕೃಷ್ಣ ಬೈರೇಗೌಡ
ಲೋಕಸಭಾ ಚುನಾವಣೆಯಲ್ಲಿ ನಾವು ೨೦ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯದ ವಿರುದ್ಧ ಜನರು ನಮಗೆ ಮತ ಹಾಕಿ ಬೆಂಬಲಿಸುತ್ತಾರೆ. ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿಯುವ ವಿಶ್ವಾಸವಿದೆ ಎಂದು ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ