ಬೆಂಗಳೂರು ಗಲಭೆ ಪ್ರಕರಣ ಸಂಬಂಧ ತನಿಖೆ ಮಾಡಲು ಇಂದು (ಬುಧವಾರ) ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಬೆಂಗಳೂರು, (ಆ.12): ನಗರದ ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಮ್ಯಾಜಿಸ್ಟ್ರೇಟ್ ತನಿಖೆಗೆ ಮುಂದಾಗಿದೆ.
ಪ್ರಕರಣ ಸಂಬಂಧ ತನಿಖೆ ಮಾಡಲು ಇಂದು (ಬುಧವಾರ) ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಮಾರ್ಗಸೂಚಿ ಪ್ರಕಾರ ಡಿಸ್ಟಿಕ್ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ತೀರ್ಮಾನವಾಯ್ತು.
ಬೆಂಗಳೂರು ಗಲಭೆ: ಉತ್ತರ ಪ್ರದೇಶ ಮಾದರಿಯ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿನ್ನೆ(ಮಂಗಳವಾರ) ರಾತ್ರಿ ನಡೆದ ದಾಂಧಲೆ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಒಪ್ಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಅಲ್ಲದೇ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟುಮಾಡಿದ್ರೇ, ನಷ್ಟ ಉಂಟು ಮಾಡಿದವರಿಂದಲೇ ವಸೂಲಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶವಿದೆ. ಈ ಆದೇಶದಂತೆಯೇ ಘಟನೆಯಲ್ಲಿ ಹಾನಿಯಾದ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ನಿರ್ಧಾರ ಮಾಡಿರುವುದಾಗಿ ತಿಳಿಸಿದರು.
ಸಭೆಯಲ್ಲಿ ಗೃಹ ಸಚಿವ ಬೊಮ್ಮಾಯಿ, ಡಿಜಿಐಜಿಪಿ ಪ್ರವೀಣ್ ಪಂತ್, ನಗರ ಪೊಲಿಸ್ ಆಯುಕ್ತ ಕಮಲ್ ಪಂತ್, ಗೃಹ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.