
ಬೆಂಗಳೂರು (ಆ.22): ರಾಜ್ಯದ 500 ಸರ್ಕಾರಿ ಶಾಲೆಗಳನ್ನು 'ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ' (KPS) ಮೇಲ್ದರ್ಜೆಗೇರಿಸಲು ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ADB) ನೊಂದಿಗೆ ಕರ್ನಾಟಕ ಸರ್ಕಾರವು 1,750 ಕೋಟಿ ರೂಪಾಯಿಗಳ ಸಾಲ ಒಪ್ಪಂದಕ್ಕೆ ಅಧಿಕೃತವಾಗಿ ಸಹಿ ಹಾಕಿದೆ. ಮುಂದಿನ ನಾಲ್ಕು ವರ್ಷಗಳಲ್ಲಿ ಈ ಶಾಲಾ ಅಭಿವೃದ್ಧಿ ಯೋಜನೆಗಳು ಪೂರ್ಣಗೊಳ್ಳಲಿವೆ. ವಿಕಾಸಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ಸಮ್ಮುಖದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಮತ್ತು ಎಡಿಬಿ (ADB) ಪ್ರತಿನಿಧಿಗಳು ಈ ಐತಿಹಾಸಿಕ ಒಪ್ಪಂದಕ್ಕೆ ಅಂಕಿತ ಹಾಕಿದರು.
ಈ ಬೃಹತ್ ಯೋಜನೆಯ ಒಟ್ಟು ವೆಚ್ಚ 2,500 ಕೋಟಿ ರೂಪಾಯಿಗಳಾಗಿದ್ದು, ಏಷ್ಯನ್ ಅಭಿವೃದ್ಧಿ ಬ್ಯಾಂಕ್ ನೀಡುವ 1,750 ಕೋಟಿ ರೂ. ಸಾಲದ ಹೊರತಾಗಿ, ಬಾಕಿ 750 ಕೋಟಿ ರೂಪಾಯಿ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಎಲ್ಲಾ 500 ಶಾಲೆಗಳ ನವೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು 2029-30ರ ವೇಳೆಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ನಿಗದಿಪಡಿಸಿದ ನಿರ್ದಿಷ್ಟ ಮಾನದಂಡಗಳ ಆಧಾರದ ಮೇಲೆ ಶಾಲೆಗಳನ್ನು ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಆಕರ್ಷಿಸುವ ಸಾಮರ್ಥ್ಯವಿರುವ ಸರ್ಕಾರಿ ಶಾಲೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಮೇಲ್ದರ್ಜೆಗೇರಿಸಲಾಗುವ ಪ್ರತಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ (KPS) ಕನಿಷ್ಠ 1,200 ವಿದ್ಯಾರ್ಥಿಗಳಿಗೆ ವ್ಯಾಸಂಗ ಮಾಡಲು ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ.
ಈ ಯೋಜನೆಯಡಿ ದ್ವಿಭಾಷಾ ಶಿಕ್ಷಣ (Bilingual Education), ಶಿಕ್ಷಕರಿಗೆ ಆಧುನಿಕ ತರಬೇತಿ, ಕಂಪ್ಯೂಟರ್ ಸೈನ್ಸ್ ಶಿಕ್ಷಣ ಹಾಗೂ ಕೃತಕ ಬುದ್ಧಿಮತ್ತೆ (Artificial Intelligence) ಕಲಿಕೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು. ವೃತ್ತಿಪರ ಹಾಗೂ ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಒತ್ತು ನೀಡುವ ಜೊತೆಗೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸುರಕ್ಷಿತ ಉಚಿತ ಸಾರಿಗೆ ಸೌಲಭ್ಯವನ್ನು ಒದಗಿಸಲು ಯೋಜನೆ ರೂಪಿಸಲಾಗಿದೆ.
ಎಡಿಬಿ ಸಂಸ್ಥೆಯು ಭಾರತದ ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಅತಿ ದೊಡ್ಡ ಆರ್ಥಿಕ ನೆರವು ಇದಾಗಿದೆ. ರಾಜ್ಯದ ಕಪಿಎಸ್ (KPS) ಯೋಜನೆಗಳು ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರವೇ ಬ್ಯಾಂಕ್ ಈ ಸಾಲಕ್ಕೆ ಅನುಮೋದನೆ ನೀಡಿದೆ. ಈಗಾಗಲೇ ಯೋಜನೆಯ ಮೊದಲ ಕಂತಾಗಿ 262.5 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಉಳಿದ ಹಣ ವರ್ಷವಾರು ಬಿಡುಗಡೆಯಾಗಲಿದೆ. ಅದರಂತೆ, 2026-27 ರಲ್ಲಿ: 358.75 ಕೋಟಿ ರೂ, 2027-28 ರಲ್ಲಿ 385 ಕೋಟಿ ರೂ, 2028-29 ರಲ್ಲಿ 376.25 ಕೋಟಿ ರೂ ಮತ್ತು 2029-30 ರಲ್ಲಿ 367.5 ಕೋಟಿ ರೂಪಾಯಿ ನೀಡಲಿದೆ. ಇದಲ್ಲದೆ, ಈಗಾಗಲೇ 100 ಶಾಲೆಗಳ ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಿದ್ದು, ಮೇಲ್ದರ್ಜೆಗೇರಿಸಬೇಕಾದ ಶಾಲೆಗಳನ್ನು ಗುರುತಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ