
ವಿಧಾನ ಪರಿಷತ್ (ಸೆ.22): ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಶಿಕ್ಷಕರ ಹುದ್ದೆಗಳಿಗೆ ಪ್ರತ್ಯೇಕ ನೇಮಕಾತಿ ನಡೆಸಲು ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ತರಲು ಸರ್ಕಾರ ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಬಸವರಾಜ ಪಾಟೀಲ್ ಇಟಗಿ ಅವರು ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಭಾಗದಲ್ಲಿ ಶಿಕ್ಷಕರ ಕೊರತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಎರಡು ಬಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಮೊದಲ ಬಾರಿಗೆ 10,600 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿದಾಗ ಎರಡು ಸಾವಿರ ಹಾಗೂ ಎರಡನೇ ಬಾರಿ 10 ಸಾವಿರ ಹುದ್ದೆಗಳಿಗೆ ಮೂರು ಸಾವಿರ ಮಂದಿ ಮಾತ್ರ ಅರ್ಹರು ಸಿಕ್ಕರು. ಎರಡೂ ಬಾರಿ ನೇಮಕಾತಿ ಮಾಡಿದರೂ ಅಗತ್ಯವಿರುವಷ್ಟುಶಿಕ್ಷಕರು ಸಿಗಲಿಲ್ಲ ಎಂದು ಹೇಳಿದರು.
ಸಚಿವ ನಾರಾಯಣಗೌಡ ಜೊತೆ ಗಲಾಟೆಗೆ ಶಾಸಕ ಬೆಳ್ಳಿ ಪ್ರಕಾಶ್ ಪ್ರತಿಕ್ರಿಯೆ..! ...
ಇದಕ್ಕೆ ಪ್ರತಿಕ್ರಿಯಿಸಿದ ಸದಸ್ಯ ಬಸವರಾಜ ಪಾಟೀಲ್ ಇಟಗಿಯವರು, ಕಲ್ಯಾಣ ಕರ್ನಾಟಕ ಭಾಗಕ್ಕೆ ನೇಮಕವಾಗಿರುವ ಶಿಕ್ಷಕರು ಒಂದೆರಡು ವರ್ಷ ಸೇವೆ ಸಲ್ಲಿಸಿ, ಬಳಿಕ ತೀವ್ರ ಅನಾರೋಗ್ಯ ಸೇರಿದಂತೆ ನಾನಾ ಕಾರಣ ಮುಂದಿಟ್ಟು ತಮಗೆ ಬೇಕಾದ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ಈ ವರ್ಗಾವಣೆ ಪ್ರಕ್ರಿಯೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಮೀಲಾಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಿ ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರ ಕೊರತೆಯನ್ನು ನೀಗಿಸುವಂತೆ ಮನವಿ ಮಾಡಿದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಈ ಭಾಗದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕದ ಶಾಲೆಗಳ ಶಿಕ್ಷಕ ಹುದ್ದೆಗಳಿಗೆ ಪ್ರತ್ಯೇಕ ನೇಮಕಾತಿ ನಡೆಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಶೀಘ್ರದಲ್ಲೇ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ತಂದು ಆ ಭಾಗದ ಶಿಕ್ಷಕರ ಕೊರತೆ ಪರಿಹರಿಸುವುದಾಗಿ ಸಚಿವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ