
ಬೆಂಗಳೂರು(ಅ. 28): ವಿಶ್ವದ ವಿವಿಧ ದೇಶಗಳಲ್ಲಿ ರೂಪಾಂತರಿ ವೈರಾಣುಗಳ ಪತ್ತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ(Karnataka) ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆ(Genomic Sequence Test)ಪ್ರಮಾಣ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ (TAC) ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಎವೈ 4.2(AY 4.2) ವೈರಾಣು ಪತ್ತೆಯಾಗಿದೆ. ಆದರೆ, ಸದ್ಯಕ್ಕೆ ಈ ವೈರಾಣು(Virus) ನಮಲ್ಲಿ ವ್ಯಾಪಕವಾಗಿ ಹರಡಿಲ್ಲ. ಆ ರೀತಿಯ ಲಕ್ಷಣಗಳೂ ಸಹ ಗೋಚರಿಸಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆ ಹೆಚ್ಚಳಕ್ಕೆ ಟಿಎಸಿ ಸಲಹೆ ನೀಡಿದರೆ ಮಾಡಲಾಗುವುದು. ಪ್ರಸ್ತುತ ವರದಿಯಾಗುತ್ತಿರುವ ಒಟ್ಟು ಪಾಸಿಟಿವ್ ಪ್ರಕರಣಗಳ ಶೇ.10 ರಷ್ಟು ಮಾದರಿಗಳನ್ನು ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗುತ್ತಿದೆ. ಈ ಪ್ರಮಾಣ ಹೆಚ್ಚಳ ಮಾಡಲು ಚಿಂತನೆ ಮಾಡಲಾಗಿದೆ’ ಎಂದು ಹೇಳಿದರು.
‘ಈಗಾಗಲೇ ಅಂತರಾಷ್ಟ್ರೀಯ ಪ್ರಯಾಣಿಕರಿಗೆ(International Travelers) ಹೊಸ ಮಾರ್ಗಸೂಚಿ(Guidelines) ಪ್ರಕಟಿಸಲಾಗಿದೆ. ವಿದೇಶಿ ಪ್ರಯಾಣಿಕರ(Foreign Travelers) ಮೇಲೆ ನಿಗಾ ವಹಿಸಲಿದ್ದು, ಹೊಸ ರೂಪಾಂತರಿ ಪತ್ತೆಯಾದರೆ ತಕ್ಷಣ ನಿಯಂತ್ರಣ ಕ್ರಮ ಪಾಲಿಸಲಾಗುವುದು. ರೂಪಾಂತರಿ ವಿಚಾರದಲ್ಲಿ ಇಲಾಖೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
ಹೊಸ ಕೊರೋನಾ ತಳಿ ಬಗ್ಗೆ ತಜ್ಞರು ಹೇಳಿದ್ದಿಷ್ಟು
ಸರ್ಕಾರಿ ಕಚೇರಿಗಳಲ್ಲಿ ಕೊರೋನಾ ಮಾರ್ಗಸೂಚಿ ಪಾಲನೆ ಕಡ್ಡಾಯ
ಕೊರೋನಾ(Coronavirus) ನಿಯಂತ್ರಣ ಸಲುವಾಗಿ ಸರ್ಕಾರಿ ಕಚೇರಿಗಳಲ್ಲಿ(Government Offices) ಕೊರೋನಾ ಮಾರ್ಗಸೂಚಿ ಪಾಲನೆ ಕಡ್ಡಾಯ ಮಾಡಲಾಗಿದ್ದು, ಈ ಬಗ್ಗೆ ನಿಗಾ ವಹಿಸಲು ಪ್ರತಿ ಕಚೇರಿಯಲ್ಲೂ ಪ್ರತ್ಯೇಕ ನೋಡಲ್ ಅಧಿಕಾರಿಯನ್ನು ನೇಮಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕೋವಿಡ್(Covid19) ಸೋಂಕು ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಪರಿಸ್ಥಿತಿಯನ್ನು ಇದೇ ರೀತಿಯಲ್ಲಿ ನಿಯಂತ್ರಣದಲ್ಲಿಟ್ಟುಕೊಳ್ಳಲು ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂದರ್ಶಕರು ಕೋವಿಡ್ ನಿಯಂತ್ರಣಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ.
ಈ ಹಿನ್ನೆಲೆಯಲ್ಲಿ ಎಲ್ಲಾ ಕಚೇರಿಗಳಲ್ಲೂ ಕೊರೋನಾ ನಿಯಮ ಪಾಲನೆ ಅಗುತ್ತಿರುವ ಬಗ್ಗೆ ನಿಗಾ ವಹಿಸಲು ನೋಡಲ್ ಅಧಿಕಾರಿಯನ್ನು ನೇಮಿಸಲಾಗುವುದು. ಯಾರಾದರೂ ನಿಯಮ ಉಲ್ಲಂಘನೆ ಮಾಡಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಆದೇಶದಲ್ಲಿ ತಿಳಿಸಿದ್ದಾರೆ. ನಿಯಮ ಉಲ್ಲಂಘಿಸುವವರಿಗೆ ನೋಡಲ್ ಅಧಿಕಾರಿ ಸೂಚನೆ ನೀಡಬೇಕು. ಸೂಚನೆ ಹೊರತಾಗಿಯೂ ಉಲ್ಲಂಘನೆ ಪುನರಾವರ್ತನೆಯಾದರೆ ದಂಡ ಅಥವಾ ಸೂಕ್ತ ಕ್ರಮ ವಹಿಸಲು ಆದೇಶದಲ್ಲಿ ಸೂಚಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ