
ಬಳ್ಳಾರಿ(ಜ.9): ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಳ್ಳಾರಿಯ ಬ್ಯಾನರ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣದ ಗಂಭೀರತೆ ಮತ್ತು ರಾಜಕೀಯ ತಿರುವುಗಳನ್ನು ಗಮನಿಸಿ, ತನಿಖೆಯನ್ನು ಸಿಐಡಿ (CID)ಗೆ ಹಸ್ತಾಂತರಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಬಳ್ಳಾರಿಯ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು ಪ್ರಕರಣಗಳ ಪೈಕಿ ನಾಲ್ಕು ಪ್ರಮುಖ ಪ್ರಕರಣಗಳನ್ನು ಸಿಐಡಿ ತನಿಖೆಗೆ ವರ್ಗಾಯಿಸಲಾಗಿದೆ. ರಾಜ್ಯ ಡಿಜಿ ಮತ್ತು ಐಜಿಪಿ (DG & IGP) ಎಂ.ಎ. ಸಲೀಂ ಅವರು ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ. ಉಳಿದ ಎರಡು ಪ್ರಕರಣಗಳನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (DCRE) ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಈ ಗಲಭೆ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಬಿ ಶ್ರೀರಾಮುಲು ಸೇರಿದಂತೆ ಜಿಲ್ಲೆಯ ಹಲವು ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣವು ದಿನದಿಂದ ದಿನಕ್ಕೆ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ, ನಿಷ್ಪಕ್ಷಪಾತ ತನಿಖೆಯ ಅಗತ್ಯವಿದ್ದರಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಸಿಐಡಿ ಡಿಐಜಿ ನೇತೃತ್ವದಲ್ಲಿ ವಿಶೇಷ ತನಿಖೆ
ಸಿಐಡಿ ಡಿಐಜಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವು ಈ ಪ್ರಕರಣದ ವಿಚಾರಣೆ ನಡೆಸಲಿದೆ. ಪ್ರಕರಣದ ಎಲ್ಲಾ ಫೈಲ್‌ಗಳನ್ನು ತಕ್ಷಣವೇ ಸಿಐಡಿ ವಿಶೇಷ ತಂಡಕ್ಕೆ ವರ್ಗಾಯಿಸುವಂತೆ ಬಳ್ಳಾರಿ ಎಸ್‌ಪಿ ಅವರಿಗೆ ರಾಜ್ಯ ಡಿಜಿ ಸೂಚನೆ ನೀಡಿದ್ದಾರೆ. ತನಿಖೆಯನ್ನು ಚುರುಕುಗೊಳಿಸಿ ಶೀಘ್ರವಾಗಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಏನಿದು ಬಳ್ಳಾರಿ ಬ್ಯಾನರ್ ಗಲಾಟೆ?
ಬಳ್ಳಾರಿ ನಗರದಲ್ಲಿ ಫ್ಲೆಕ್ಸ್ ಮತ್ತು ಬ್ಯಾನರ್ ಕಟ್ಟುವ ವಿಚಾರದಲ್ಲಿ ಎರಡು ರಾಜಕೀಯ ಗುಂಪುಗಳ ನಡುವೆ ನಡೆದ ಸಂಘರ್ಷ ದೊಡ್ಡ ಮಟ್ಟದ ಗಲಭೆಗೆ ಕಾರಣವಾಗಿತ್ತು. ಗಲಾಟೆ ವೇಳೆ ಗುಂಡಿನ ಸದ್ದು ಕೇಳಿಸಿತ್ತು. ಕಾಂಗ್ರೆಸ್ ಮುಖಂಡನೋರ್ವ ಗುಂಡು ತಗುಲಿ ಬಲಿಯಾಗಿದ್ದ. ಈ ಪ್ರಕರಣ ಸಂಬಂಧ ಬ್ರೂಸ್‌ಪೇಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಿದ್ದಲ್ಲದೆ, ರಾಜಕೀಯ ದ್ವೇಷಕ್ಕೂ ದಾರಿಯೊಟ್ಟಿತ್ತು. ಇದೀಗ ಸಿಐಡಿ ತನಿಖೆಯಿಂದ ಸತ್ಯಾಸತ್ಯತೆ ಹೊರಬರಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ