
ಬಳ್ಳಾರಿ: ನಗರದಲ್ಲಿ ಬ್ಯಾನರ್ ಗಲಾಟೆ ಪ್ರಕರಣದಲ್ಲಿ ಮೃತಪಟ್ಟ ರಾಜಶೇಖರ ರೆಡ್ಡಿ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಮತ್ತು ಮನೆ ನಿರ್ಮಾಣ ಭರವಸೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಕಂಟಕ ಎದುರಾಗಿದೆ. ರಾಜಶೇಖರ ರೆಡ್ಡಿ ಅವರ ಕುಟುಂಬಕ್ಕೆ ₹25 ಲಕ್ಷ ನಗದು ರೂಪದಲ್ಲಿ ಪರಿಹಾರ ನೀಡಿರುವುದನ್ನು ಪ್ರಶ್ನಿಸಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ದಾಖಲಾಗಿದೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಶೂಟೌಟ್‌ನಲ್ಲಿ ಸಾವನ್ನಪ್ಪಿದ ಹಿನ್ನೆಲೆ, ನಗದು ರೂಪದಲ್ಲಿ ಇಷ್ಟು ದೊಡ್ಡ ಮೊತ್ತವನ್ನು ನೀಡಿರುವುದು RBI ನಿಯಮಾವಳಿಗಳ ಉಲ್ಲಂಘನೆ ಎಂದು ಆರೋಪಿಸಲಾಗಿದೆ.
RBI ಹಾಗೂ ಆದಾಯ ತೆರಿಗೆ ಕಾಯ್ದೆಗಳ ಪ್ರಕಾರ, ₹2 ಲಕ್ಷಕ್ಕಿಂತ ಹೆಚ್ಚು ಮೊತ್ತವನ್ನು ನಗದು ರೂಪದಲ್ಲಿ ವ್ಯವಹರಿಸುವುದು ನಿಯಮಬಾಹಿರ ಎನ್ನಲಾಗಿದೆ. ಆದರೆ ಸಚಿವರು ಸುಮಾರು ₹25 ಲಕ್ಷ ಹಣವನ್ನು ನಗದು ರೂಪದಲ್ಲೇ ನೀಡಿರುವುದರಿಂದ ಕಾನೂನು ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾಗಿದೆ.
ಹಿಂದೂಪರ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಅವರು ಈ ಕುರಿತು ಆದಾಯ ತೆರಿಗೆ ಇಲಾಖೆಗೆ ಅಧಿಕೃತ ದೂರು ಸಲ್ಲಿಸಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮೃತ ಕುಟುಂಬಕ್ಕೆ ಅಂದಾಜು ₹25 ಲಕ್ಷ ನಗದು ನೆರವು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಪ್ರಕರಣದ ಕುರಿತು ಐಟಿ ಇಲಾಖೆ ಪರಿಶೀಲನೆ ನಡೆಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಬಳ್ಳಾರಿಯ ಹುಸೇನ್ ನಗರ ನಿವಾಸಿಯಾಗಿದ್ದ ರಾಜಶೇಖರ ರೆಡ್ಡಿ ಅವರು ಬ್ಯಾನರ್ ಗಲಾಟೆ ಸಂದರ್ಭದಲ್ಲಿ ಗುಂಡಿನ ದಾಳಿಗೆ ಒಳಗಾಗಿ ಮೃತಪಟ್ಟಿದ್ದರು. ಈ ದುರ್ಘಟನೆ ಹಿನ್ನೆಲೆಯಲ್ಲಿ ಮೃತರ ಕುಟುಂಬವನ್ನು ಭೇಟಿ ಮಾಡಿದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಆರ್ಥಿಕ ನೆರವಾಗಿ ₹25 ಲಕ್ಷ ಹಣವನ್ನು ನೀಡಿದ್ದರು.
ಮೃತ ರಾಜಶೇಖರ ರೆಡ್ಡಿ ಅವರ ಕುಟುಂಬದ ಸ್ಥಿತಿಯನ್ನು ಪರಿಗಣಿಸಿ, ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿ (ಸ್ಲಂ ಬೋರ್ಡ್) ಮೂಲಕ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡಲಾಗುವುದು ಎಂದು ಸಚಿವರು ಘೋಷಿಸಿದ್ದರು. ಸರ್ಕಾರ ಕುಟುಂಬದೊಂದಿಗೆ ನಿಂತಿದ್ದು, ಯಾವುದೇ ರೀತಿಯ ಅನ್ಯಾಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನುಡಿಗಳನ್ನಾಡಿದ್ದರು. ಸದ್ಯ ಈ ಪ್ರಕರಣ ಬಳ್ಳಾರಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ