
ಬಳ್ಳಾರಿ (ಜ.23): ಬಳ್ಳಾರಿಯ ಜೀ ಸ್ಕೈರ್ ಲೇಔಟ್‌ನಲ್ಲಿರುವ ಮಾಡೆಲ್ ಹೌಸ್‌ಗೆ ಬೆಂಕಿ ಬಿದ್ದ ಪ್ರಕರಣ ಈಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ನಗರದಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ಎಫ್‌ಎಸ್‌ಎಲ್ ಅಧಿಕಾರಿಗಳು ಭೇಟಿ ನೀಡಿದ್ದು, ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಾಡೆಲ್ ಹೌಸ್‌ಗೆ ಬೆಂಕಿ ಬಿದ್ದಿರುವ ಹಿನ್ನೆಲೆಯಲ್ಲಿ ಬೆಂಕಿಯ ಮೂಲವನ್ನು ಪತ್ತೆಹಚ್ಚಲು ವಿಧಿವಿಜ್ಞಾನ ಪ್ರಯೋಗಾಲಯದ (FSL) ತಂಡ ಸ್ಥಳಕ್ಕೆ ಆಗಮಿಸಿದೆ. ಬೆಂಕಿ ಆಕಸ್ಮಿಕವಾಗಿ ಹತ್ತಿಕೊಂಡಿದೆಯೇ ಅಥವಾ ಯಾರಾದರೂ ಉದ್ದೇಶಪೂರ್ವಕವಾಗಿ ಹಚ್ಚಿದ್ದಾರೆಯೇ ಎಂಬ ಬಗ್ಗೆ ತಪಾಸಣೆ ನಡೆಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ಪೆಟ್ರೋಲ್ ಅಥವಾ ಡೀಸೆಲ್‌ನಂತಹ ದ್ರವಗಳನ್ನು ಬಳಸಲಾಗಿದೆಯೇ ಎಂಬ ಬಗ್ಗೆ ತಂಡವು ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕುತ್ತಿದೆ.
ಇತ್ತ ಪ್ರಕರಣವನ್ನು ಖಂಡಿಸಿ ಬಳ್ಳಾರಿಯ ರಾಯಲ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ಮಾಜಿ ಸಂಸದ ಫಕೀರಪ್ಪ ಹಾಗೂ ಮಾಜಿ ಶಾಸಕ ಸುರೇಶ್ ಬಾಬು ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಟೈರ್ ಸುಡಲು ಯತ್ನ, ಪೊಲೀಸರೊಂದಿಗೆ ವಾಗ್ವಾದ
ಪ್ರತಿಭಟನೆಯ ವೇಳೆ ಉದ್ರಿಕ್ತರಾದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಸ್ತೆಯಲ್ಲೇ ಟೈರ್ ಸುಟ್ಟು ಆಕ್ರೋಶ ಹೊರಹಾಕಲು ಮುಂದಾದರು. ಆದರೆ ಸ್ಥಳದಲ್ಲಿದ್ದ ಪೊಲೀಸರು ಇದಕ್ಕೆ ಅವಕಾಶ ನೀಡದಿದ್ದಾಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ವಾಗ್ವಾದ ನಡೆಯಿತು. ಎಎಸ್‌ಪಿ ರವಿಕುಮಾರ್ ಅವರೊಂದಿಗೆ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಮಾತಿನ ಚಕಮಕಿ ನಡೆಸಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದ್ದಾರೆ.
ನಗರದಲ್ಲಿ ಪೊಲೀಸ್ ಸರ್ಪಗಾವಲು
ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಳ್ಳಾರಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ರಾಯಲ್ ವೃತ್ತದ ಸುತ್ತಮುತ್ತ ಪೊಲೀಸರು ಸರ್ಪಗಾವಲು ಹಾಕಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ