ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ: ಬಾನು ಮುಷ್ತಾಕ್‌

Kannadaprabha News   | Kannada Prabha
Published : Jul 06, 2025, 09:46 AM IST
banu mushtaq

ಸಾರಾಂಶ

ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿಕೊಳ್ಳುವ ಕುರಿತು ಇನ್ನೂ ತೀರ್ಮಾನಿಸಿಲ್ಲ. ಸಮ್ಮೇಳನಕ್ಕೆ ಇನ್ನೂ ಸಾಕಷ್ಟು ದಿನಗಳು ಇವೆ ಎಂದು ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ತಿಳಿಸಿದರು.

ಮೈಸೂರು (ಜು.06): ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿಕೊಳ್ಳುವ ಕುರಿತು ಇನ್ನೂ ತೀರ್ಮಾನಿಸಿಲ್ಲ. ಸಮ್ಮೇಳನಕ್ಕೆ ಇನ್ನೂ ಸಾಕಷ್ಟು ದಿನಗಳು ಇವೆ ಎಂದು ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ತಿಳಿಸಿದರು. ಜಿಲ್ಲಾ ಪತ್ರಕರ್ತರ ಸಂಘ ಶನಿವಾರ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿರುವ ಅವ್ಯವಹಾರದ ಕುರಿತು ಸರ್ಕಾರ ತನಿಖೆಗೆ ಆದೇಶಿಸಿದೆ. ಕಸಾಪ ರಾಜ್ಯಾಧ್ಯಕ್ಷರ ವಿರುದ್ಧವೇ ಗಂಭೀರ ಆರೋಪಗಳು ಕೇಳಿ ಬಂದಿವೆ.

ಹೀಗಾಗಿ, ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಳ್ಳಬೇಕೆ ಬೇಡವೇ ಎಂಬ ಪ್ರಶ್ನೆ ಎದುರಾಗಿರುವುದು ಸಹಜ ಎಂದರು. ಆದರೆ, ಕಸಾಪ ರಾಜ್ಯಾಧ್ಯಕ್ಷರೊಬ್ಬರೇ ಎಲ್ಲವೂ ಆಗಿಲ್ಲ. ಎಲ್ಲಾ ಜಿಲ್ಲೆಗಳ ಅಧ್ಯಕ್ಷರನ್ನೂ ಕಸಾಪ ಒಳಗೊಂಡಿದೆ. ಹೀಗಾಗಿ, ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಳ್ಳುವ ಕುರಿತು ಈಗಲೇ ಯಾವುದೇ ತೀರ್ಮಾನಕ್ಕೆ ಬಂದಿಲ್ಲ‌. ಮುಂದಿನ ದಿನಗಳಲ್ಲಿ ಈ ಬಗ್ಗೆ ತೀರ್ಮಾನಿಸುತ್ತೇನೆ ಎಂದು ಅವರು ಹೇಳಿದರು.

ಹಾವೇರಿಯಲ್ಲಿ ನಡೆದ ಸಮ್ಮೇಳನದಲ್ಲಿ ಅಲ್ಪಸಂಖ್ಯಾತರಿಗೆ ಗೋಷ್ಠಿಗೂ ಅವಕಾಶ ನೀಡದ ಅಧ್ಯಕ್ಷರು, ಈ ಬಾರಿ ಸರ್ವಾಧ್ಯಕ್ಷ ಸ್ಥಾನಕ್ಕೆ ಆಹ್ವಾನ ನೀಡಿದ್ದಾರೆ. ಇದು ಅವರಲ್ಲಾದ ಬದಲಾವಣೆಯೇ, ಒತ್ತಡವೇ, ಸಾಮಾಜಿಕ ಸ್ಥಿತ್ಯಂತರವೇ ಅಥವಾ ಅನಿವಾರ್ಯವೇ ಎಂಬುದನ್ನು ತಿಳಿದುಕೊಳ್ಳಬೇಕಿದೆ. ಅದರ ಹೊರತಾಗಿ ಪ್ರಜಾಸತ್ತಾತ್ಮಕವಾಗಿ ಸರ್ವಾಧ್ಯಕ್ಷರ ಆಯ್ಕೆ ಮಾಡಿದ್ದು, ಸಂಸ್ಥೆಯ ಆಹ್ವಾನಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು. ದಸರಾ ಉದ್ಘಾಟನೆಗೆ ಆಹ್ವಾನಿಸುವ ಕುರಿತು ಚರ್ಚೆಯಾಗುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಕೂಸು ಹುಟ್ಟುವ ಮೊದಲೇ ಹೆಸರಿಡುವುದು ಬೇಡ. ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಕಾಯೋಣ ಎಂದರು.

ಗಂಡಾಳ್ವಿಕೆ ವ್ಯವಸ್ಥೆ ಇನ್ನೂ ಹೋಗಿಲ್ಲ: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ವಿಧಾನಪರಿಷತ್‌ ಸದಸ್ಯ ರವಿಕುಮಾರ್‌ ಅವಹೇಳನಕಾರಿಯಾಗಿ ಮಾತನಾಡಿರುವ ಕುರಿತು ಪ್ರತಿಕ್ರಿಯಿಸಿ, ಸಮಾಜದಲ್ಲಿ ಗಂಡಾಳ್ವಿಕೆ ವ್ಯವಸ್ಥೆ ಇನ್ನೂ ಹೋಗಿಲ್ಲ. ಆದರೆ, ಶಾಲಿನಿ ರಜನೀಶ್‌ ಅವರು ಪ್ರಜಾಸತ್ತಾತ್ಮಕ ಅಧಿಕಾರ ಹೊಂದಿದ್ದಾರೆ. ಇದನ್ನು ಅವಮಾನವಾಗಿ ತೆಗೆದುಕೊಳ್ಳದೆ, ಸಾರ್ವಜನಿಕವಾಗಿ ಮಹಿಳಾ ನಿಂದನೆ ಮಾಡುವವರ ವಿರುದ್ಧ ಕಾಯ್ದೆ ತರಲಿ. ಅಶ್ಲೀಲ ಪದ ಮಾತನಾಡುವವರಿಗೆ ಮಾನಸಿಕ ಚಿಕಿತ್ಸೆ ಆಗಬೇಕಿದೆ ಎಂದರು.

ಈ ಹಿಂದೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಎಂಎಲ್ಸಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆಗ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣೀರು ಹಾಕಿದ್ದರು. ಆಗ ನಾನು ಒಂದು ಪತ್ರ ಬರೆಯುವ ಮೂಲಕ ಮಹಿಳಾ ನಿಂದಕರಿಗೆ ಕಠಿಣ ಶಿಕ್ಷೆ ನೀಡುವಂತಹ ಕಾನೂನು ಜಾರಿಗೆ ತರುವಂತೆ ಒತ್ತಾಯಿಸಿದ್ದೆ. ಸರ್ಕಾರ ಅವರದೇ ಇರುವಾಗ ಕಠಿಣ ಕಾನೂನು ತರಬೇಕೆಂದು ಹೇಳಿದ್ದೆ. ಆ ಬಗ್ಗೆ ನಾನು ಈಗಲೂ ಒತ್ತಾಯಿಸುತ್ತೇನೆ. ಮಹಿಳೆಯರನ್ನು ಅವಹೇಳನ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸುವಂತಹ ಕಾಯ್ದೆಯನ್ನು ಸರ್ಕಾರ ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ