
ಬೆಳಗಾವಿ (ಜೂ.9): ಸ್ವಂತ ಮಗಳನ್ನೇ ಭಿಕ್ಷಾಟನೆಗೆ ಬಿಟ್ಟಿದ್ದ ತಾಯಿಯನ್ನು ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಬೆಳಗಾವಿ ನಗರದ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ, ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ರಕ್ಷಿಸಲು ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.
ಕಾಲೇಜು ರಸ್ತೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಭಿಕ್ಷೆ ಬೇಡುತ್ತಿರುವುದನ್ನು ಗಮನಿಸಿದ ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು, ಬಾಲಕಿಯನ್ನು ವಶಕ್ಕೆ ಪಡೆಯಲು ಮುಂದಾದಾಗ, ಆಕೆಯ ತಾಯಿ ತೀವ್ರ ವಿರೋಧ ವ್ಯಕ್ತಪಡಿಸಿ ಹೈಡ್ರಾಮಾ ಸೃಷ್ಟಿಸಿದಳು. ಆದರೆ, ಅಧಿಕಾರಿಗಳು ಪಟ್ಟುಬಿಡದೇ ತಾಯಿ ಹಾಗೂ ಬಾಲಕಿಯನ್ನು ವಶಕ್ಕೆ ಪಡೆದರು.
ಬೆಳಗಾವಿಯಲ್ಲಿ ಮಕ್ಕಳ ಭಿಕ್ಷಾಟನೆ ಹೆಚ್ಚುತ್ತಿದ್ದು ಇದಕ್ಕೆ ಕಾನೂನಿನ ಕಡಿವಾಣ ಹಾಕಬೇಕಿದೆ. ಮಕ್ಕಳನ್ನು ಭಿಕ್ಷಾಟನೆಗೆ ಅಥವಾ ಕೂಲಿ ಕೆಲಸಕ್ಕೆ ಕಳುಹಿಸುವುದು ಕಾನೂನುಬಾಹಿರವಾಗಿದ್ದು, ಇದು ಬಾಲಕಾರ್ಮಿಕ ಕಾಯಿದೆಯಡಿ ಗಂಭೀರ ಅಪರಾಧವೆಂದು ಪರಿಗಣಿಸಲಾಗುತ್ತದೆ.
ಸದ್ಯ ಮಕ್ಕಳ ರಕ್ಷಣಾ ಸಮಿತಿಯ ಅಧಿಕಾರಿಗಳು ಬಾಲಕಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದು, ತಾಯಿಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಈ ಘಟನೆಯು ಬೆಳಗಾವಿಯಲ್ಲಿ ಬಾಲ ಕಾರ್ಮಿಕತೆ ಮತ್ತು ಭಿಕ್ಷಾಟನೆಯಂತಹ ಸಾಮಾಜಿಕ ಸಮಸ್ಯೆಗಳ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ