
ಬೆಂಗಳೂರು (ಡಿ.5): ಚಳಿಗಾಲದ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ಸರ್ಕಾರದ ಕಡೆಯಿಂದ ಒಗ್ಗಟ್ಟಾಗಿ ಮತ್ತು ಸಮರ್ಥವಾಗಿ ಎದುರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ.
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಚಿವ ಸಂಪುಟ ಸಭಾಮಂದಿರದಲ್ಲಿ ಸಚಿವರ ಸಭೆ ನಡೆಸಲಾಯಿತು. ಸಭೆಯಲ್ಲಿ ಪ್ರಮುಖವಾಗಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೆ ಸಿದ್ಧತೆ ನಡೆಸಿರುವ ಬಗ್ಗೆ ಚರ್ಚಿಸಲಾಗಿದೆ.
ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದರೆ ಸರ್ಕಾರದಿಂದ ಎಲ್ಲರೂ ಒಗ್ಗಟ್ಟಾಗಿ ಎದುರಿಸಬೇಕು. ಇದರಲ್ಲಿ ಯಾವುದೇ ಒಡಕು ಇರಬಾರದು. ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ವೇಳೆ, ಕಳೆದ ಎರಡೂವರೆ ವರ್ಷಗಳು ಸರ್ಕಾರದಿಂದ ಕೈಗೊಂಡಿರುವ ಕಾರ್ಯಗಳ ಬಗ್ಗೆ ಗಟ್ಟಿಯಾಗಿ ತಿಳಿಸಬೇಕು. ಅದರಲ್ಲೂ ಕಳೆದ ಎರಡೂವರೆ ವರ್ಷಗಳಿಂದ ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರು.ವರೆಗೆ ವ್ಯಯಿಸಲಾಗಿದೆ. ಅದರಿಂದ ರಾಜ್ಯದ ಜನರ ಆರ್ಥಿಕ ಬದಲಾವಣೆ, ರಾಜ್ಯದ ಆರ್ಥಿಕ ವೃದ್ಧಿ ಸೇರಿ ಅದಕ್ಕೆ ಸಂಬಂಧಿಸಿದ ವಿಚಾರಗಳನ್ನು ಸಚಿವರು, ಶಾಸಕರು ತಿಳಿಸಬೇಕು ಎಂದು ನಿರ್ಧರಿಸಲಾಯಿತು.
ಇದೇ ವೇಳೆ ಹಿರಿಯ ಸಚಿವರೊಬ್ಬರು ಸದೃಢ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾಗುವ ಪರಿಸ್ಥಿತಿಗೆ ನಾವೇ ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.
ಅವಿಶ್ವಾಸ ನಿರ್ಣಯ ಮಂಡನೆಯಾದರೆ ಅದರ ಮೇಲಿನ ಚರ್ಚೆಗಾಗಿ ಕನಿಷ್ಠ 4 ರಿಂದ 5 ದಿನಗಳ ಕಲಾಪ ಬೇಕಾಗಲಿದೆ. ಅದರಿಂದ ಕಾಯ್ದೆಗಳ ಮೇಲಿನ ಚರ್ಚೆ, ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆ ಸೇರಿ ಇನ್ನಿತರ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಗಳನ್ನು ನಡೆಸಲು ಸಮಯ ಸಾಲುವುದಿಲ್ಲ. ಹೀಗಾಗಿ ಅಧಿವೇಶನವನ್ನು ಹೆಚ್ಚುವರಿಯಾಗಿ 2 ದಿನ ನಡೆಸಬಹುದೇ ಎಂಬ ಬಗ್ಗೆ ಚರ್ಚೆ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಅಂತಿಮವಾಗಿ, ಅವಿಶ್ವಾಸ ನಿರ್ಣಯ ಮಂಡನೆಯಾದರೆ ಆ ಬಗ್ಗೆ ಚರ್ಚಿಸೋಣ ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಗೊಂದಲಕ್ಕೆ ಒಳಗಾಗಬೇಡಿ:
ನಾಯಕತ್ವ ಬದಲಾವಣೆ ಗೊಂದಲದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಅದಕ್ಕೆ, ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಯಾರೂ ಗೊಂದಲಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ. ಎಲ್ಲವೂ ಸರಿಹೋಗಲಿದೆ ಎಂದು ಆಶ್ವಾಸನೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ