ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬೆಳಗಾವಿ (ಡಿ.16): ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಎನ್ಎಚ್ಆರ್ ಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಪ್ರಕರಣದ ತನಿಖೆಯ ಪ್ರಗತಿ, ಬಂಧನ, ಪರಿಹಾರ ನೀಡಿದ ಬಗ್ಗೆ ಮಾಹಿತಿ ನೀಡಿ. ಇಂತಹ ಘಟನೆ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸೂಚನೆ ನೀಡಿದೆ.
ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಕರಣ ಸಂಬಂಧ 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿ ರಚಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಿದ್ದಾರೆ.
ಬೆಳಗಾವಿ ಕೇಸ್ ದ್ರೌಪದಿ ವಸ್ತ್ರಾಪಹರಣಕ್ಕಿಂತಲೂ ಕ್ರೂರ: ಹೈಕೋರ್ಟ್
ಪೊಲೀಸ್ ಇನ್ಸಪೆಕ್ಟರ್ ಸಸ್ಪೆಂಡ್
ಬೆಳಗಾವಿ: ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಆದೇಶ ಹೊರಡಿಸಿದ್ದಾರೆ.
ಒಂದು ಕಡೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್, ಸರ್ಕಾರಕ್ಕೆ ಮತ್ತು ಪೊಲೀಸ್ ಇಲಾಖೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರೆ ಮತ್ತೊಂದು ಕಡೆ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಅಷ್ಟೇ ಅಲ್ಲದೇ ವಿಪಕ್ಷ ನಾಯಕ ಆರ್.ಅಶೋಕ ನೇತೃತ್ವದ ತಂಡ ಶುಕ್ರವಾರ ಸಂಜೆ ಕಾಕತಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ಪಡೆದುಕೊಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.
ಬೆಳಗಾವಿ ಶಾಕ್: ಮಗ ಪ್ರೀತಿಸಿ ಓಡಿ ಹೋಗಿದ್ದಕ್ಕೆ ತಾಯಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಬೆತ್ತಲೆಗೊಳಿಸಿ ಹಲ್ಲೆ!
ಶನಿವಾರದಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿತ್ತು. ಇದೇ ವೇಳೆ ಪ್ರಕರಣದ ಕುರಿತು ಮಾಹಿತಿ ಪಡೆದುಕೊಂಡು ಬರಲು ಬಿಜೆಪಿ ಹೈಕಮಾಂಡ್ 5 ಜನ ಸದಸ್ಯರ ಸತ್ಯಶೋಧನಾ ಸಮಿತಿಯನ್ನು ನೇಮಿಸಿದೆ. ಈ ಸಮಿತಿ ಕೂಡ ಶನಿವಾರ ಬೆಳಗಾವಿಗೆ ಆಗಮಿಸಲಿದೆ. ಅಲ್ಲದೆ, ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಗೆ ಸಾಂತ್ವನ ಹೇಳಲಿದ್ದು, ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತು ಮಾಹಿತಿ ಪಡೆಯಲಿದೆ.